ಚಾಮರಾಜನಗರ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ನಗರದಲ್ಲಿ ಅರ್ಥಪೂರ್ಣವಾಗಿ ನಡೆಯಿತು.
ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗುಂಡ್ಲುಪೇಟೆ ಪೊಲೀಸ್ ಠಾಣೆಯ ನಿವೃತ್ತ ಸಬ್‌ಇನ್ಸ್‌ಪೆಕ್ಟರ್ ಪಿ. ಸುಜಾತ ಅವರು ಗೌರವ ವಂದನೆ ಸ್ವೀಕರಿಸಿದರು.
ಬಳಿಕ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸುಜಾತ ಅವರು ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆಯಾಗಿದೆ. ಇಲ್ಲಿ ಸಾಕಷ್ಟು ಕಲಿತಿದ್ದೇವೆ. ಹಿರಿಯ ಉನ್ನತ ಅಧಿಕಾರಿಗಳ ಸಹಕಾರದಿಂದ ಉತ್ತಮವಾಗಿ ಸೇವೆ ಸಲ್ಲಿಸಲು ಸಾಧ್ಯವಾಯಿತು. ಇಲಾಖೆ ಇನ್ನಷ್ಟು ಎತ್ತರಕ್ಕೆ ಬೆಳೆಯಲೆಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ಪೊಲೀಸ್ ಧ್ವಜ ಬಿಡುಗಡೆ ಮಾಡಿ ವಿತರಿಸಿದರು.
ಕಾರ್ಯಕ್ರಮದಲ್ಲಿ ಗುಂಡ್ಲುಪೇಟೆ ಪೊಲೀಸ್ ಠಾಣೆಯ ನಿವೃತ್ತ ಸಬ್‌ಇನ್ಸ್‌ಪೆಕ್ಟರ್ ಪಿ. ಸುಜಾತ ಹಾಗೂ ನಿವೃತ್ತ ಅಸಿಸ್ಟೆಂಟ್ ಸಬ್‌ಇನ್ಸ್‌ಪೆಕ್ಟರ್ ಎ. ಮಹದೇವ, ಎಎಒ ದೊಡ್ಡಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಸೋಮೇಗೌಡ, ಅಶೋಕ್ ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.