ಚಾಮರಾಜನಗರ: ಜಿಲ್ಲೆಯಲ್ಲಿ ಅರ್ಹ ವಿದ್ಯಾರ್ಹತೆ ಇಲ್ಲದ ಮತ್ತು ಅಧಿಕೃತ ನೊಂದಣಿ ಹೊಂದದೆ ವೈದ್ಯ ವೃತ್ತಿ ನಡೆಸುತ್ತಿರುವ ವೈದ್ಯರು ಕಂಡು ಬಂದಲ್ಲಿ ಅವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಅನುಸಾರ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಿ, ಪ್ರಸವ ಹಾಗೂ ಗರ್ಭ ಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆ ಅನುಷ್ಠಾನ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅರ್ಹ ವಿದ್ಯಾರ್ಹತೆ ಇ0ಲ್ಲದೇ ವೈದ್ಯ ವೃತ್ತಿ ನಡೆಸುತ್ತಿರುವ ವೈದ್ಯರನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸಬೇಕಿದೆ. ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವ ಸಲುವಾಗಿಯೇ ಜಿಲ್ಲಾ ಮಟ್ಟದ ವಿಶೇಷ ಪಡೆ ಕ್ರಿಯಾ ಶೀಲವಾಗಬೇಕು. ವಿಶೇಷ ಪಡೆಯ ಎಲ್ಲಾ ಸದಸ್ಯರ ನೇತೃತ್ವದಲ್ಲಿ ಸೂಕ್ತ ಪರಿಶೀಲನೆ ಕೈಗೊಂಡು ಜನರಿಗೆ ಚಿಕಿತ್ಸಾ ವಿಧಾನದಲ್ಲಿ ವಂಚನೆಯಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಅರ್ಹ ವಿದ್ಯಾರ್ಹತೆ ಇಲ್ಲದ ವೈದ್ಯರು ಯಾವುದೇ ಬಗೆಯಲ್ಲಿ ಚಿಕಿತ್ಸೆ ನೀಡುತ್ತಿರುವುದು ಕಂಡು ಬಂದಲ್ಲಿ ಸಾರ್ವಜನಿಕರು ಸಹ ಮಾಹಿತಿ ನೀಡಿ ದೂರು ಸಲ್ಲಿಸಬೇಕು. ಜಿಲ್ಲಾ ಹಾಗೂ ತಾಲೂಕು ಹಂತದಲ್ಲಿ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಿ ಸಮಿತಿ ಇದ್ದು ತಾಲೂಕು ವೈದ್ಯಾಧಿಕಾರಿಗಳಿಗೆ ಅಥವಾ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳಿಗೆ ದೂರು ನೀಡಿದರೆ ಪರಿಶೀಲಿಸಿ ಗಂಭೀರ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಿ ಪ್ರಾಧಿಕಾರ ನಿಯಮಾನುಸಾರ ಎಲ್ಲಾ ಖಾಸಗಿ ನರ್ಸಿಂಗ್ ಹೋಮ್, ಆಸ್ಪತ್ರೆಗಳು, ಕ್ಲಿನಿಕ್‍ಗಳು ನೊಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಈಗಾಗಲೇ ನೊಂದಣಿಯಾಗಿದ್ದಲ್ಲಿ ನವೀಕರಣಗೊಳಿಸಬೇಕಿದೆ. ಇನ್ನೂ ಹಲವು ನೊಂದಣಿಯಾಗಬೇಕಿದೆ. ಈ ಬಗ್ಗೆ ಕೂಡಲೇ ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಯವರು ತಿಳಿಸಿದರು.

ಪ್ರಸವ ಪೂರ್ವ ಹಾಗೂ ಗರ್ಭ ಪೂರ್ವ ಹಂತದಲ್ಲಿ ಲಿಂಗ ಪತ್ತೆ ಮಾಡುವುದು ಅಪರಾಧವಾಗಿದೆ. ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್‍ಗಳು ಲಿಂಗ ಪತ್ತೆ ಮಾಡುವ ಪ್ರಕರಣಗಳು ಕಂಡು ಬಂದಲ್ಲಿ ಪ್ರಸವ ಹಾಗೂ ಗರ್ಭ ಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆ ಅನುಷ್ಠಾನ ಕ್ರಮ ಜರುಗಿಸಬೇಕು. ಇದಕ್ಕಾಗಿಯೇ ಇರುವ ಪರಿಶೀಲನಾ ಸಮಿತಿ ವ್ಯಾಪಕವಾಗಿ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕೆಂದು ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.

ಪ್ರಸವ ಹಾಗೂ ಗರ್ಭ ಪೂರ್ವ ಹಂತದಲ್ಲಿ ಲಿಂಗ ಪತ್ತೆ ಮಾಡುವುದರಿಂದ ಕಾಯ್ದೆ ಪ್ರಕಾರ ಯಾವ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂಬ ಬಗ್ಗೆ ಮನವರಿಕೆ ಮಾಡುವ ಕಾರ್ಯಗಾರವನ್ನು ಆಯೋಜಿಸಬೇಕು. ಎಲ್ಲಾ ಸ್ಕ್ಯಾನಿಂಗ್ ಸೆಂಟರ್‍ಗಳ ಮಾಲೀಕರು ನಿರ್ವಾಹಕರು ಹಾಗೂ ಸಾರ್ವಜನಿಕರನ್ನು ಆಹ್ವಾನಿಸಿ ಕಾಯ್ದೆ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್ ರವಿ ಅವರು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ರವಿ, ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಿ ಪ್ರಾಧಿಕಾರದ ನೋಡಲ್ ಅಧಿಕಾರಿ ಡಾ. ಅಂಕಪ್ಪ, ಜಿಲ್ಲಾ ಸರ್ವೆಲನ್ಸ್ ಅಧಿಕಾರಿ ಡಾ. ನಾಗರಾಜು, ಪೊಲೀಸ್ ವರಿಷ್ಠಾಧಿಕಾರಿ ಅನ್ಸರ್ ಅಲಿ, ಖಾಸಗಿ ಆಸ್ಪತ್ರೆಗಳ ವೈದ್ಯರು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು, ತಾಲೂಕು ವೈದ್ಯಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

By admin