ಚಾಮರಾಜನಗರ: ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಪಣತೊಡಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.
ನಗರದ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಜಾಥಾಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಈ ಹಿಂದೆ ಬಹಳಷ್ಟು ಕುಷ್ಠರೋಗ ಪ್ರಕರಣಗಳು ಕಂಡು ಬರುತ್ತಿದ್ದವು. ಈಗ ಕಡಿಮೆಯಾಗುತ್ತಿದೆ. ಕುಷ್ಠರೋಗ ಪ್ರಕರಣಗಳು ಕಂಡು ಬಂದರೂ ಸಹ ನಿರ್ಮೂಲನೆಗಾಗಿ ಸರ್ಕಾರ ಅನೇಕ ಕ್ರಮಗಳನ್ನು ಅನುಸರಿಸುತ್ತಿದೆ ಎಂದರು.
ಪ್ರಾಥಮಿಕ ಹಂತದಲ್ಲೇ ಕುಷ್ಠರೋಗಕ್ಕೆ ಚಿಕಿತ್ಸೆ ಪಡೆಯಲು ಮುಂದಾಗಬೇಕು. ಇದರಿಂದ ಬೇಗನೆ ಗುಣಮುಖರಾಗಲು ಸಾಧ್ಯವಾಗುತ್ತದೆ. ಕುಷ್ಠರೋಗದ ಬಗ್ಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಲು ಅಧಿಕಾರಿಗಳು ಮುಂದಾಗಬೇಕಿದೆ. ರೋಗ ಲಕ್ಷಣಗಳ ಬಗ್ಗೆ ಜನರಿಗೆ ತಿಳಿದಾಗ ರೋಗವನ್ನೂ ಸಹ ಪರಿಣಾಮಕಾರಿಯಾಗಿ ತಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.
ಇದೇ ವೇಳೆ ಕುಷ್ಠರೋಗ ನಿರ್ಮೂಲನಾ ಕುರಿತ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಬಳಿಕ ನರ್ಸಿಂಗ್ ಶಾಲೆಯ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಜಾಥಾದಲ್ಲಿ ಪಾಲ್ಗೊಂಡರು. ಚಾಮರಾಜೇಶ್ವರ ದೇವಾಲಯದಿಂದ ಹೊರಟ ಜಾಥಾ ಜೈ ಭುವನೇಶ್ವರಿ ವೃತ್ತ, ಬಿ. ರಾಚಯ್ಯ ಜೋಡಿ ರಸ್ತೆಯ ಮೂಲಕ ಸಾಗಿ ಜಿಲ್ಲಾಡಳಿತ ಭವನದಲ್ಲಿ ಮುಕ್ತಾಯವಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಚಂದ್ರಶೇಖರ್, ತಾಲೂಕು ಆರೋಗ್ಯ ಅಧಿಕಾರಿ ಡಾ. ಶ್ರೀನಿವಾಸ್, ವೈದ್ಯಾಧಿಕಾರಿ ಉಮಾರಾಣಿ, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ದೊರೆಸ್ವಾಮಿ ನಾಯಕ್, ನರ್ಸಿಂಗ್ ಸ್ಕೂಲ್ ಬೋಧಕರಾದ ಗಂಗಮ್ಮ, ಮಂಜುಳಾ, ಸುಷ್ಮಿತಾ, ಇತರರು ಇದ್ದರು.
