ಬೆಂಗಳೂರು: ಕೊರೊನಾ ಸಾಂಕ್ರಾಮಿಕ ರೋಗವನ್ನು ಗುಣಪಡಿಸಲಾಗುತ್ತದೆ ಎಂಬ ಸುಳ್ಳು ಆಶ್ವಾಸನೆ ನೀಡುವುದು ಹಾಗೂ ಮಾಧ್ಯಮಗಳಲ್ಲಿ ಪ್ರಚಾರ ಮಾಡುವುದು ಮಾಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದಾಗಿ ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿ ಎಚ್ಚರಿಕೆ ನೀಡಿದೆ.
ಔಷಧಿ ನೀಡುವುದಾಗಿ ಪ್ರಚಾರ ನೀಡುವುದು ಕಾನೂನಿನಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹವರ ವಿರುದ್ಧ ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಗೆ ಸಾರ್ವಜನಿಕರು ದೂರು ನೀಡಿದಲ್ಲಿ ಪರಿಶೀಲಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ.
ಕೋವಿಡ್-19 ಎರಡನೆ ಅಲೆ ತೀವ್ರವಾಗಿ ಪ್ರಸರಣಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಜ್ವರ, ನೆಗಡಿ, ಕೆಮ್ಮು ಮತ್ತು ಮೈ-ಕೈ ನೋವಿನಂತಹ ಲಕ್ಷಣಗಳಿಂದ ಬಳಲುತ್ತಿರುವ ರೋಗಿಗಳು ತಮ್ಮ ವೃತ್ತಿ ಸ್ಥಳಕ್ಕೆ ಬಂದ ಸಂದರ್ಭದಲ್ಲಿ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಯಲ್ಲಿ ನೊಂದಾಯಿಸಲ್ಪಟ್ಟ ಆಯುರ್ವೇದ, ಯುನಾನಿ, ಪ್ರಕೃತಿ ಚಿಕಿತ್ಸೆ ಮತ್ತು ಯೋಗ, ಇಂಟಿಗ್ರೇಟೆಡ್ ಹಾಗೂ ಸಿದ್ಧ ಪದ್ದತಿಯಲ್ಲಿ ವೃತ್ತಿ ನಡೆಸುತ್ತಿರುವ ವೈದ್ಯರು ವೈದ್ಯಕೀಯ ನೈತಿಕತೆಯನ್ನು ಕಾಪಾಡುವುದು. ಭಾರತ ಸರ್ಕಾರದ ಆಯುಷ್ ಮಂತ್ರಾಲಯ, ರಾಜ್ಯ ಸರ್ಕಾರದ ಹಾಗೂ ಜಿಲ್ಲಾಡಳಿತದ ಕೋವಿಡ್-10 ರ ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಈ ನಡುವೆ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಗುಣಪಡಿಸಲಾಗುತ್ತದೆ ಎಂಬ ಸುಳ್ಳು ಆಶ್ವಾಸನೆ ನೀಡುವುದು. ದೃಶ್ಯ-ಪತ್ರಿಕಾ ಮಾಧ್ಯಮಗಳಲ್ಲಿ ಜಾಹೀರಾತು ನೀಡುವುದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸುವುದು ಕಾನೂನಿನಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಇಂತಹವರ ವಿರುದ್ಧ ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಗೆ ದೂರು ನೀಡಿದಲ್ಲಿ ಪರಿಶೀಲಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊರ್ಳಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.