ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ಇತ್ತೀಚೆಗೆ ಕೊಳ್ಳೇಗಾಲದ ಉಪ ವಿಭಾಗ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
ವೈದ್ಯರೊಂದಿಗೆ ಆಸ್ಪತ್ರೆಯ ಎಲ್ಲಾ ಕೊಠಡಿಗಳಿಗೂ ಖುದ್ದಾಗಿ ಭೇಟಿ ನೀಡಿದರು. ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಆರೋಗ್ಯದ ವಾತಾವರಣವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಆಸ್ಪತ್ರೆಯ ಎಲ್ಲರೂ ತಮ್ಮ ಕರ್ತವ್ಯವನ್ನು ನಿರ್ವಹಿಸುವಂತೆ ಸೂಚಿಸಿದರು.
ಮಧುಮೇಹ, ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ನೀಡುತ್ತಿರುವ ವೈದ್ಯಕೀಯ ಸೌಲಭ್ಯದ ಕುರಿತು ಪರಿಶೀಲಿಸಿದರು. ಚಿಕಿತ್ಸೆ ನೀಡಲು ಅಗತ್ಯವಿರುವ ಔಷಧ ಹಾಗೂ ಇನ್ನಿತರೆ ವೈದ್ಯಕೀಯ ಸೌಲಭ್ಯಗಳನ್ನು ಸಕಾಲದಲ್ಲೇ ಉಗ್ರಾಣಕ್ಕೆ ಸರಬರಾಜು ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.
ಎಲ್ಲಾ ವಾರ್ಡ್‌ಗಳಿಗೂ ಭೇಟಿ ನೀಡಿ, ರೋಗಿಗಳಿಂದ ಕುಂದು ಕೊರತೆಗಳನ್ನು ಆಲಿಸಿದರು. ಸರ್ಕಾರದಿಂದ ಉಚಿತವಾಗಿ ದೊರೆಯುವ ಔಷಧ ಹಾಗೂ ಪೌಷ್ಠಿಕ ಆಹಾರವನ್ನು ಸಮರ್ಪಕವಾಗಿ ವಿತರಿಸಬೇಕು. ಕುಡಿಯುವ ನೀರು, ಆಸ್ಪತ್ರೆಯ ಸ್ವಚ್ಚತೆ ಬಗ್ಗೆ ವಿಶೇಷ ಗಮನ ಹರಿಸುವಂತೆ ವೈದ್ಯಾಧಿಕಾರಿಗಳಿಗೆ ನ್ಯಾಯಾಧೀಶರು ಸೂಚನೆ ನೀಡಿದರು.
ಕಾನೂನು ನೆರವಿನ ಅಗತ್ಯವಿದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸುವಂತೆ ಸಾರ್ವಜನಿಕರಿಗೆ ನ್ಯಾಯಾಧೀಶರದ ಎಂ. ಶ್ರೀಧರ ಅವರು ಸಲಹೆ ನೀಡಿದರು.