ಚಾಮರಾಜನಗರ: ತಂಬಾಕು ನಿಯಂತ್ರಣ ಕಾನೂನು ಕೋಟ್ಪಾ ಕಾಯ್ದೆಯನ್ನು ಜಿಲ್ಲೆಯಲ್ಲಿ ವಿವಿಧ ಇಲಾಖೆಗಳು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿಂದು ರಾಷ್ಟ್ರೀಯ ತಂಬಾಕು ನಿಯಂತ್ರಣಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಂಬಾಕು ಉತ್ಪನ್ನಗಳ ಸೇವನೆಯಿಂದ ಆಗುತ್ತಿರುವ ಸಮಸ್ಯೆಗಳನ್ನು ಪರಿಗಣಿಸಿ ತಂಬಾಕು ಉತ್ಪನ್ನಗಳ ಉತ್ಪಾದನೆ, ಸರಬರಾಜು, ಮಾರಾಟದ ಮೇಲೆ ನಿಯಂತ್ರಣ ಹೇರಲು ಜಾರಿಗೆ ತಂದಿರುವ ಕೋಟ್ಪಾ ಕಾಯ್ದೆಯನ್ನು ಇಲಾಖೆಗಳು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ತಿಳಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಅಪರಾಧವಾಗಲಿದೆ. ಧೂಮಪಾನಕ್ಕೆ ಉತ್ತೇಜಿಸುವ ವಸ್ತುಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಇಡುವಂತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ನಿಷೇಧಿತ ಪ್ರದೇಶ ಕುರಿತ ನಾಮಫಲಕವನ್ನು ಆಯಾ ಸ್ಥಳದ ಮಾಲೀಕರು ಪ್ರದರ್ಶಿಸಬೇಕು. ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಅಷ್ಟೇ ಅಲ್ಲ ಅಪ್ರಾಪ್ತರಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಸಹ ನಿಷೇಧಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿಯವರು ತಿಳಿಸಿದರು.
ವಿವಿಧ ಇಲಾಖೆಗಳು ಕೋಟ್ಪಾ ಕಾಯ್ದೆಯಡಿ ತೆಗೆದುಕೊಂಡ ಕ್ರಮಗಳ ಬಗ್ಗೆ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿಯವರು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಧೂಮಪಾನ ನಿಷೇಧದ ನಾಮಫಲಕವನ್ನು ಅಂಗಡಿ ಪರವಾನಗಿದಾರರಿಗೆ ಕಡ್ಡಾಯವಾಗಿ ಪ್ರದರ್ಶಿಸಲು ವಹಿಸಲಾಗಿರುವ ಕ್ರಮಗಳ ಬಗ್ಗೆ ವಿವರ ಪಡೆದುಕೊಂಡರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂಗಡಿ ಉದ್ಯಮಗಳ ಮುಂದೆ ಪ್ರವೇಶ ದ್ವಾರದಲ್ಲಿ ಕೊಟ್ಪಾ ಕಾಯ್ದೆ ಅನ್ವಯ ಕಡ್ಡಾಯವಾಗಿ ನಾಮಫಲಕವನ್ನು ಅಳವಡಿಸಬೇಕು. ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸೂಚಿಸಲಾಗಿರುವ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಸೇವನೆ ತಡೆಯುವ ನಿಟ್ಟಿನಲ್ಲಿ ಮೇಲ್ವಿಚಾರಣೆ ಮಾಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಸೂಚಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಕಾರ್ಯಕ್ರಮಾಧಿಕಾರಿ ಡಾ. ನಾಗರಾಜು, ಪರಿಸರ ಅಧಿಕಾರಿ ಉಮಾಶಂಕರ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಶ್ರೀನಿವಾಸ್, ಡಾ. ಗೋಪಾಲ್, ಡಾ. ಪ್ರಕಾಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುನಾಥ್ ಪ್ರಸನ್ನ, ಇತರೆ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.