ಚಾಮರಾಜನಗರ: ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗಗಳು, ಗುಡ್ಡಗಾಡು ಪ್ರದೇಶ ಸೇರಿದಂತೆ ಎಲ್ಲೆಡೆ ಮುಂಜಾಗ್ರತೆಯಾಗಿ ಕೋವಿಡ್-೧೯ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-೧೯ ತಡೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಕೋವಿಡ್-೧೯ ನಿಯಂತ್ರಣದ ಸಂಬಂಧ ವಿಡಿಯೋ ಸಂವಾದದ ಮೂಲಕ ಮಾಹಿತಿ ನೀಡಲಾಗಿದ್ದು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಜಿಲ್ಲಾ ಪಂಚಾಯಿತಿಯಿಂದ ನಿರ್ದೇಶನ ನೀಡಲಾಗಿದೆ. ಜಾಗೃತಿ ಚಟುವಟಿಕೆಗಳನ್ನು ನಡೆಸುವ ಮೂಲಕ ಜನರಿಗೆ ಮುನ್ನೆಚ್ಚರಿಕೆ ವಿಧಾನಗಳನ್ನು ಅನುಸರಿಸಲು ಅರಿವು ಮೂಡಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ತಿಳಿಸಿದರು.
ಜಿಲ್ಲೆಯ ಎಲ್ಲಾ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಶುಶ್ರೂಷಕಿಯರು ಹಾಗೂ ಉಪಕೇಂದ್ರಗಳಲ್ಲಿ ಸಮುದಾಯ ಆರೋಗ್ಯಾಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿದ್ದು ಜನರಿಗೆ ವೈದ್ಯಕೀಯ ಸೇವೆ ನೀಡಬೇಕೆಂದು ಸೂಚಿಸಿದರು.
ಜಿಲ್ಲೆಯಲ್ಲಿ ಪ್ರಸ್ತುತ ಲಭ್ಯವಿರುವ ರೆಮ್ಡಿಸಿರಿಸ್ ಇಂಜೆಕ್ಷನ್, ಪಿಪಿಐ ಕಿಟ್, ಮಾಸ್ಕ್ ಸೇರಿದಂತೆ ಇತರೆ ಅವಶ್ಯಕ ಚಿಕಿತ್ಸೆಗಳ ಲಭ್ಯತೆ ಬಗ್ಗೆ ಆರೋಗ್ಯ ಅಧಿಕಾರಿಗಳಿಂದ ವಿವರ ಪಡೆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಇನ್ನೂ ಅಗತ್ಯ ಬೀಳಬಹುದಾದ ಔಷಧಗಳ ದಾಸ್ತಾನಿಗಾಗಿ ಕೂಡಲೇ ಕ್ರಮವಹಿಸುವಂತೆ ನಿರ್ದೇಶನ ನೀಡಿದರು.
ಸ್ವಯಂ ಪ್ರೇರಿತರಾಗಿ ಬಸ್‌ಗಳಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು, ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮಾಸ್ಕ್ ಧರಿಸುವಂತೆ ತಿಳಿವಳಿಕೆ ಮೂಡಿಸಲು ಮುಂದಾಗಬೇಕು. ಮುಂಬರುವ ಚಿಕ್ಕಲ್ಲೂರು ಜಾತ್ರೆ ವೇಳೆ ಕೋವಿಡ್ ಸಂಬಂಧ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಮಳಿಗೆ ತೆರೆಯುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ. ನಾಗರಾಜು, ನಿವಾಸಿ ವೈದ್ಯಾಧಿಕಾರಿ ಡಾ. ಮಹೇಶ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಎಂ. ಮಂಜುನಾಥ್ ಸೇರಿದಂತೆ ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
