ಚಾಮರಾಜನಗರ: ಕೆಲವು ದೇಶಗಳಲ್ಲಿ ಕೋವಿಡ್-೧೯ ಪ್ರಕರಣಗಳು ಏರಿಕೆಯಾಗಿರುವ ವರದಿ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಜಿಲ್ಲೆಯಲ್ಲಿ ಪಾಲನೆ ಮಾಡಬೇಕಿದ್ದು, ಕೋವಿಡ್ ಪರೀಕ್ಷೆ ಹೆಚ್ಚಳ, ಲಸಿಕಾಕರಣಕ್ಕೆ ವೇಗ ನೀಡುವ ಕಾರ್ಯಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ ಸಂಬಂಧ ನಡೆದ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗಿರುವ ವರದಿಯ ಕಾರಣದಿಂದ ಸರ್ಕಾರ ಕೋವಿಡ್‌ಗೆ ಸಂಬಂಧಿಸಿದಂತೆ ಅನುಸರಿಸಬೇಕಿರುವ ಮಾರ್ಗಸೂಚಿಯನ್ನು ಹೊರಡಿಸಿದೆ. ಇದರಂತೆ ಕೋವಿಡ್ ಪರೀಕ್ಷೆ, ಲಸಿಕಾಕರಣ, ಚಿಕಿತ್ಸೆ, ಇತರೆ ಅಂಶಗಳ ಕಾರ್ಯತಂತ್ರಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕಿದೆ. ಕೋವಿಡ್ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಳ ಮಾಡಬೇಕು. ಐಎಲ್‌ಐ, ಸಾರಿ ಪ್ರಕರಣಗಳಿಗೆ ಕೋವಿಡ್ ಪರೀಕ್ಷೆ ಮಾಡಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಸೋಂಕಿನ ಲಕ್ಷಣಗಳನ್ನು ಹೊಂದಿರುವವರನ್ನು ಪರೀಕ್ಷೆಗೆ ಒಳಪಡಿಸಲು ಅಗತ್ಯ ಸಂಖ್ಯೆಯಲ್ಲಿ ತಂಡಗಳನ್ನು ನಿಯೋಜಿಸಬೇಕು. ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಪರೀಕ್ಷೆ ಸಂಖ್ಯೆಯನ್ನು ಹೆಚ್ಚು ಮಾಡಬೇಕು. ಇದಕ್ಕಾಗಿ ತುರ್ತಾಗಿ ಕಾರ್ಯೋನ್ಮುಖರಾಗಬೇಕು ಎಂದರು.
ಕೋವಿಡ್-೧೯ ಲಸಿಕೆಯ ಬೂಸ್ಟರ್ ಡೋಸ್ ನೀಡುವ ಪ್ರಕ್ರಿಯೆ ವೇಗಗೊಳಿಸಬೇಕು. ಆರೋಗ್ಯ ಸಿಬ್ಬಂದಿ, ಮುಂಚೂಣಿ ಕಾರ್ಯಕರ್ತರೆಲ್ಲರೂ ಇನ್ನೆರಡು ದಿನಗಳೊಳಗೆ ಮುನ್ನೆಚ್ಚರಿಕೆ ಡೋಸ್ ಅನ್ನು ಪಡೆಯಬೇಕು. ಈ ಬಗ್ಗೆ ವ್ಯಾಪಕವಾಗಿ ಅಧಿಕಾರಿಗಳು ತುರ್ತು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಜಿಲ್ಲೆಯಲ್ಲಿರುವ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳು, ಐಸೋಲೇಷನ್ ಹಾಸಿಗೆ, ಆಮ್ಲಜನಕ ಲಭ್ಯತೆ, ಔಷಧಿ ದಾಸ್ತಾನು ಬಗ್ಗೆ ವಿವರವಾಗಿ ಮಾಹಿತಿ ಪಡೆದ ಜಿಲ್ಲಾಧಿಕಾರಿಯವರು ಕೋವಿಡ್-೧೯ ಪ್ರಕರಣಗಳು ಏರಿಕೆಯಾದ ಪಕ್ಷದಲ್ಲಿ ಸಂದರ್ಭವನ್ನು ನಿರ್ವಹಿಸಲು ಎಲ್ಲ ಹಂತಗಳ ಆಸ್ಪತ್ರೆಗಳನ್ನು ಸನ್ನದ್ದವಾಗಿರಿಸುವ ದಿಸೆಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯಿತ್ರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್‌ರಾಜ್, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ವೈದ್ಯಕೀಯ ಕಾಲೇಜಿನ ಡೀನ್ ಡಾ. ಸಂಜೀವ್, ಜಿಲ್ಲಾಸ್ಪತ್ರೆಯ ನೋಡಲ್ ಅಧಿಕಾರಿ ಡಾ. ಮಹೇಶ್, ಸ್ಥಾನಿಕ ವೈದ್ಯಾಧಿಕಾರಿ ಡಾ. ಕೃಷ್ಣಪ್ರಸಾದ್, ಜಿಲ್ಲಾ ಕಣ್ಗಾವಲು ಅಧಿಕಾರಿ ಡಾ. ನಾಗರಾಜು, ತಹಶೀಲ್ದಾರರಾದ ಬಸವರಾಜು, ಮಂಜುಳಾ, ಆನಂದಯ್ಯ, ರವಿಶಂಕರ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಸುಧಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
