ಚಾಮರಾಜನಗರ: ಕ್ರೀಡಾಕೂಟಗಳು ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ನೀಡಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ತಿಳಿಸಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಡಾ. ಬಿ.ಆರ್. ಅಂಬೇಡ್ಕರ್, ಇಂದಿರಾಗಾಂಧಿ ವಸತಿ ಶಾಲೆಗಳ ವಿಧ್ಯಾರ್ಥಿಗಳು ಮತ್ತು ಬೋದಕ, ಬೋಧಕೇತರ ಸಿಬ್ಬಂದಿಗಳಿಗೆ ಏರ್ಪಡಿಸಲಾಗಿದ್ದ ಎರಡು ದಿನಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡಾಕೂಟ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಉತ್ಸಾಹ ತುಂಬಲಿದ್ದು, ಈ ವರ್ಷ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಆಯೋಜಿಸಿರುವುದು ಉತ್ತಮ ಬೆಳವಣಿಗೆ. ಬೋಧಕ ಮತ್ತು ಬೋದಕೇತರ ಶಿಕ್ಷಕರಿಗೂ ಏರ್ಪಡಿಸಿರುವುದು ಮತ್ತಷ್ಟು ಮೆರಗು ನೀಡಲಿದೆ. ವಿದ್ಯಾರ್ಥಿಗಳು ಕ್ರೀಡೆಯನ್ನು ಸ್ಪರ್ಧಾ ಮನೋಭಾವದಿಂದ ಸ್ವೀಕರಿಸಬೇಕು. ಸೋಲು ಗೆಲುವು ಮುಖ್ಯವಲ್ಲ. ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡು ಜಿಲ್ಲೆಗೆ ಕೀರ್ತಿ ತರಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಜಿಲ್ಲಾ ಸಮನ್ವಯ ಅಧಿಕಾರಿ ಮಹದೇವಪ್ರಸಾದ್, ಪ್ರಾಂಶುಪಾಲರಾದ ಸುಯೇಬ್ ಪಾಷ, ಗುರುಪ್ರಸಾದ್, ಸವಿತಾ, ಕವಿತಾ, ಲೋಕೇಶ್, ಕುಮಾರಸ್ವಾಮಿ, ಗಿರೀಶ್ ಮತ್ತು ದೈಹಿಕ ಶಿಕ್ಷಕರಾದ ಮಂಜುನಾಥ್ ಮತ್ತು ನಾಮದೇವ್ ಹಾಗೂ ಶಿಕ್ಷಕರು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.