
ಚಾಮರಾಜನಗರ: ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯವಾಗಿರುವುದರಿಂದ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವಂತೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯುಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರಿ ನೌಕರರು ತಮ್ಮ ದಿನನಿತ್ಯ ಒತ್ತಡದಿಂದ ಕರ್ತವ್ಯ ನಿರ್ವಹಿಸುವುದರಿಂದ ಕ್ರೀಡೆಯಲ್ಲಿ ಪಾಲ್ಗೊಂಡು ದೈಹಿಕ ಹಾಗೂ ಮಾನಸಿಕ ಸದೃಢರಾಗುವ ನಿಟ್ಟಿನಲ್ಲಿ ಎಲ್ಲಾ ನೌಕರರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಅದನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರಬೇಕು ಎಂದರು.
ಕ್ರೀಡಾಜ್ಯೋತಿ ಸ್ವೀಕರಿಸಿ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರು ಪ್ರತಿವರ್ಷದಂತೆ ಈ ಬಾರಿಯು ೨ ದಿನಗಳ ಕಾಲ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗಿದೆ. ಚಾಮರಾಜನಗರ ಸಾಂಸ್ಕೃತಿಕ ಕಲೆಗಳ ತವರೂರು. ಕಲೆ ಸಾಹಿತ್ಯ, ಸಂಸ್ಕೃತಿಯ ಜೊತೆಗೆ ಕ್ರೀಡಾಕೂಟ ಆಯೋಜನೆ ಸಂತಸ ತಂದಿದೆ ಎಂದರು.
ಸಾಕಷ್ಟು ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಇರುವುದರಿಂದ ಸರ್ಕಾರಿ ನೌಕರರು ದಿನಂಪ್ರತಿ ಒತ್ತಡದ ಜೊತೆಗೆ ಕೆಲಸ ಮಾಡುವ ಅನಿವಾರ್‍ಯತೆ ಎದುರಾಗಿದೆ. ನೌಕರರಿಗೂ ವೈಯಕ್ತಿಕ ಬದುಕು ಇದೆ. ಇದನ್ನು ಮನಗಂಡಿರುವ ರಾಜ್ಯಸರ್ಕಾರ ನೌಕರರು ಕ್ರೀಡಾಕೂಡ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನುವು ಮಾಡಿಕೊಟ್ಟಿದೆ. ಪ್ರಸ್ತುತ ಕ್ರೀಡಾಕೂಟದ ವೆಚ್ಚವನ್ನು ಸರ್ಕಾರವು ೨೫ ಲಕ್ಷದಿಂದ ೩ ಕೋಟಿ ರೂ. ಗಳಿಗೆ ಹೆಚ್ಚಿಸಿದೆ. ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. ಎಲ್ಲಾ ನೌಕರರು ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಒತ್ತಡದ ಕಾರ್ಯನಿರ್ವಹಣೆಯ ಜೊತೆಗೆ ನೌಕರರು ಉತ್ತಮ ದೈಹಿಕ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು. ಕ್ರೀಡೆಯಲ್ಲಿ ಪಾಲ್ಗೊಳ್ಳಲು ಮಾತ್ರ ದೈಹಿಕ ಕಸರತ್ತು ನಡೆಸಬಾರದು. ಪ್ರತಿದಿನ ವ್ಯಾಯಾಮ, ನಡಿಗೆ, ಮೆಡಿಟೇಷನ್‌ಗಳಲ್ಲಿ ದೇಹವನ್ನು ದಂಡಿಸುವುದರಿಂದ ನೌಕರರು ಅನೇಕ ಕಾಯಿಲೆಗಳಿಂದ ಪಾರಾಗಬಹುದು. ಎಲ್ಲಾ ನೌಕರರು ಸದೃಢ ಆರೋಗ್ಯ ಹೊಂದಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡುವತ್ತ ಗಮನ ಹರಿಸಬೇಕು ಎಂದು ಷಡಾಕ್ಷರಿ ಅವರು ತಿಳಿಸಿದರು.
ಕ್ರೀಡಾಕೂಟದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಮಾತನಾಡಿ ಸರ್ಕಾರಿ ನೌಕರರಿಗೆ ಇದು ಕ್ರೀಡಾ ಉತ್ಸವವಾಗಿದೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ನೌಕರರು ದೇಹವನ್ನು ಸದೃಢವಾಗಿಟ್ಟುಕೊಳ್ಳಬೇಕು. ನೌಕರರು ಪ್ರತಿದಿನ ಕ್ರೀಡೆಯಲ್ಲಿ ತೊಡಗುವುದರಿಂದ ದೇಹ ಮತ್ತು ಮನಸ್ಸು ಸಮಸ್ಥಿತಿಗೆ ಬರಲಿದೆ. ಕ್ರೀಡಾಕೂಟಕ್ಕೆ ಜಿಲ್ಲಾಡಳಿತ ಅಗತ್ಯ ಸಹಕಾರ ನೀಡಲಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಮಾತನಾಡಿ ಸರ್ಕಾರಿ ನೌಕರರಿಗೆ ಪ್ರತಿದಿನ ಕಡತ ನಿರ್ವಹಣೆಯಲ್ಲಿಯೇ ಸಮಯ ಕಳೆದುಹೋಗಲಿದೆ. ತಮ್ಮಲ್ಲಿರುವ ಪ್ರತಿಭೆಯನ್ನು ಹೊರಸೂಸಲು ಕ್ರೀಡಾಕೂಟ ಉತ್ತಮ ವೇದಿಕೆಯಾಗಬೇಕು. ಕ್ರೀಡಾಕೂಟದಿಂದ ನೌಕರರಲ್ಲಿ ಸ್ಪರ್ಧಾತ್ಮಕ ಮನೋಭಾವ ಹೆಚ್ಚಾಗಲಿದೆ ಎಂದರು.
ಕಾರ್ಯಕ್ರಮದ ಆರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಅವರು ಮಾತನಾಡಿ ೨ ದಿನಗಳ ಕಾಲ ಆಯೋಜಿಸಲಾಗಿರುವ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ನೌಕರರು ಪಾಲ್ಗೊಂಡು ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು. ಏಳನೇ ವೇತನ ಆಯೋಗ ರಚನೆ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ರಾಜ್ಯಸರ್ಕಾರ ಜಾರಿಗೆ ತರುವ ಮೂಲಕ ಸರ್ಕಾರಿ ನೌಕರರಿಗೆ ಅನುಕೂಲ ಮಾಡಿಕೊಟ್ಟಿದೆ ಎಂದು ತಿಳಿಸಿದರು.
ಇದೇ ವೇಳೆ ಈ ಬಾರಿಯ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ನಗದು ಬಹುಮಾನ, ಸ್ಮರಣಿಕೆಯೊಂದಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಗಣ್ಯರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.
ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ. ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಪೌರಾಯುಕ್ತರಾದ ರಾಮದಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್. ಅನಿತಾ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಹಾಗೂ ತಾಲೂಕು ಶಾಖೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.
