ಚಾಮರಾಜನಗರ: ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕವಾಗಿ ಮೂಲಸೌಲಭ್ಯ ಒದಗಿಸಿಕೊಡುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದ್ದು, ಈ ನಿಟ್ಟಿನಲ್ಲಿ ಒತ್ತು ನೀಡಲಾಗಿದೆ ಎಂದು ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.
ಚಾಮರಾಜನಗರ ತಾಲೂಕಿನ ವೆಂಕಟಯ್ಯನಛತ್ರ ಗ್ರಾಮಕ್ಕೆ ಇಂದು ಭೇಟಿ ನೀಡಿ ಅವರು ಮಾತನಾಡಿದರು.
ಗ್ರಾಮಾಂತರ ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಜಿಲ್ಲೆಯ ಕೆರೆಗಳನ್ನು ತುಂಬಿಸುವ ೧೪೦೦ಕ್ಕೂ ಹೆಚ್ಚು ಕೋಟಿ ರೂ ಮೊತ್ತದ ಯೋಜನೆಗೆ ವಿಸೃತ ಯೋಜನೆ ತಯಾರಿಸಿ ಅನುಕೂಲ ಕಲ್ಪಿಸಲಾಗುತ್ತಿದೆ. ಜನಪರ ಕೆಲಸಗಳಿಗೆ ಮುಂದಾಗಿದ್ದೇವೆ ಎಂದು ಸಚಿವರು ತಿಳಿಸಿದರು.
ಚಾಮರಾಜನಗರ, ಗುಂಡ್ಲುಪೇಟೆಯಲ್ಲಿ ಕುಡಿಯುವ ನೀರಿಗಾಗಿ ಅನುದಾನ ಒದಗಿಸಲಾಗಿದೆ. ಗ್ರಾಮಾಂತರ ಪ್ರದೇಶಗಳ ಅಭಿವೃದ್ದಿಯಾಗಬೇಕು. ಆಗ ಜಿಲ್ಲೆಯೂ ಸಹ ಪ್ರಗತಿ ಹೊಂದುತ್ತದೆ ಎಂದು ಸಚಿವರು ನುಡಿದರು.
ಒಟ್ಟು ೭.೮೫ ಕೋಟಿ ರೂ. ವೆಚ್ಚದಲ್ಲಿ ವೆಂಕಟಯ್ಯನಛತ್ರ ಭಾಗದ ಸಿಸಿ ರಸ್ತೆ, ಚರಂಡಿ ಅಭಿವೃದ್ದಿ ಕಾಮಗಾರಿಗೆ ಮುಖ್ಯಮಂತ್ರಿಯವರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಈಗಾಗಲೇ ಚಾಲನೆ ನೀಡಿದ್ದಾರೆ. ಕಾಮಗಾರಿ ಗುಣಮಟ್ಟದಿಂದ ನಡೆಯಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ, ಉಪವಿಭಾಗಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಎ.ಆರ್. ಬಾಲರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶೈಲಜ ಉಮೇಶ್, ಚಾಮುಲ್ ಅಧ್ಯಕ್ಷರಾದ ನಾಗೇಂದ್ರ, ನಿರ್ದೇಶಕರಾದ ಹೆಚ್.ಎಸ್. ಬಸವರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಸೋಮಣ್ಣ, ಹೆಚ್.ಆರ್. ಸ್ವಾಮಿ, ಪ್ರಮೀಳ ಮಹೇಶ್, ಕೃಷ್ಣಮೂರ್ತಿ, ಲೀಲಾ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ವಿನಯ್‌ಕುಮಾರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್.ಸಿ. ಕೆಂಪರಾಜು, ಇತರರು ಇದ್ದರು.
