ಚಾಮರಾಜನಗರ: ಜಿಲ್ಲಾ ಪಂಚಾಯಿತಿಯ ಸಂಜೀವಿನಿ ಎನ್‌ಆರ್‌ಎಲ್‌ಎಂ ಜಿಲ್ಲಾ ಘಟಕ ಹಾಗೂ ಸ್ವಚ್ಛ ಭಾರತ್ ಮಿಷನ್ ಸಹಯೋಗದೊಂದಿಗೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ವಾಹನ ತರಬೇತಿ ಪಡೆದ ಸ್ವ ಸಹಾಯ ಸಂಘದ ಮಹಿಳೆಯರಿಗೆ ಚಾಲನಾ ಪರವಾನಗಿ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಇಂದು ನಗರದಲ್ಲಿ ನಡೆಯಿತು.
ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ ಅವರು ಸ್ವ-ಸಹಾಯ ಸಂಘದ ಮಹಿಳೆಯರಿಗೆ ಚಾಲನಾ ಪರವಾನಗಿ ಪ್ರಮಾಣ ಪತ್ರ ವಿತರಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು ಗ್ರಾಮ ಪಂಚಾಯಿತಿಯಲ್ಲಿನ ಘನ ತ್ಯಾಜ್ಯ ನಿರ್ವಹಣೆಯಲ್ಲಿ ಸ್ವ ಸಹಾಯ ಸಂಘದ ಮಹಿಳೆಯರ ತಂಡ ಯಶಸ್ವಿಯಾಗಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿಸಲು ಕಾರ್ಯನಿರ್ವವಹಿಸಬೇಕು. ಇತರೆ ಸದಸ್ಯರು ವಾಹನ ತರಬೇತಿಗೆ ಬರುವಂತೆ ಹಾಗೂ ಘನ ತ್ಯಾಜ್ಯ ನಿರ್ವಹಣೆಗೆ ತೊಡಗಿಸಲು ಪ್ರೇರಣೆಯಾಗಿ ಎಂದು ಶುಭ ಹಾರೈಸಿದರು.
ಜಿಲ್ಲೆಯ ೧೩೦ ಗ್ರಾಮ ಪಂಚಾಯಿತಿಗಳಲ್ಲಿ ಆಟೋ ಖರೀದಿ ಮಾಡಲಾಗಿದ್ದು, ವಾಹನಗಳ ನಿರ್ವಹಣೆಗಾಗಿ ಸ್ವ-ಸಹಾಯ ಸಂಘದ ಸದಸ್ಯರಿಗೆ ತರಬೇತಿ ನೀಡಿ ವಾಹನ ಚಾಲನಾ ಪರವಾನಗಿ (ಡಿ.ಎಲ್) ಗಳನ್ನು ನೀಡಲಾಗುತ್ತಿದೆ. ಪ್ರಥಮ ಬಾರಿಗೆ ಹನೂರು ತಾಲೂಕಿನ ೨೫ ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬರಂತೆ ೨೫ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರನ್ನು ಆಯ್ಕೆ ಮಾಡಿ ಕೆಎಸ್‌ಆರ್‌ಟಿಸಿ ವಾಹನ ತರಬೇತಿ ಸಂಸ್ಥೆಯ ಮೂಲಕ ತರಬೇತಿ ನೀಡಲಾಗಿದೆ.
