ಚಾಮರಾಜನಗರ, ಜನವರಿ ೨೩ (ಕರ್ನಾಟಕ ವಾರ್ತೆ):- ಬಾಲ್ಯವಿವಾಹದಿಂದಾಗುವ ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಮೂಲಕ ಬಾಲ್ಯವಿವಾಹ ಪ್ರಕರಣಗಳನ್ನು ತಡೆಯಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ ಬಾಲ್ಯವಿವಾಹ ನಿಷೇಧ ಕುರಿತು ಆಯೋಜಿಸಲಾಗಿದ್ದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಭಾವನಾತ್ಮಕ ವಿಚಾರಗಳ ಬಗ್ಗೆ ಅತ್ಯಂತ ಸೂಕ್ಷ್ಮತೆ ಇರಬೇಕಿದೆ. ಬಾಲ್ಯವಿವಾಹ ನಡೆಯುವ ಹಂತದವರೆಗಿನ ಮುಂಚೆಯೇ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಿದರೆ ಬಾಲ್ಯವಿವಾಹವನ್ನು ತಡೆಗಟ್ಟಬಹುದು. ಹೀಗಾಗಿ ಅಧಿಕಾರಿಗಳು ಬಾಲ್ಯವಿವಾಹದಿಂದ ಆಗುವ ಪರಿಣಾಮಗಳ ಕುರಿತು ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಬಾಲ್ಯವಿವಾಹದಂತಹ ಪದ್ದತಿ ಹೋಗಲಾಡಿಸಲು ಜನರನ್ನು ಮನವೊಲಿಸಬೇಕು. ಆರಂಭದಲ್ಲಿ ಪ್ರತಿರೋಧ ಸಹಜವಾಗಿಯೇ ಇರುತ್ತದೆ. ಜನರಲ್ಲಿ ತಿಳಿವಳಿಕೆ ಮೂಡಿಸಿದಾಗ ಪ್ರಕರಣಗಳು ಇಳಿಮುಖವಾಗುತ್ತವೆ. ಕಾಯ್ದೆಗಳ ಬಗ್ಗೆಯೂ ಹೆಚ್ಚು ಅರಿವು ಮೂಡಿಸಬೇಕಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ಮಾತನಾಡಿ ಬಾಲ್ಯವಿವಾಹ ಮಾಡುವಲ್ಲಿ ಜಿಲ್ಲೆ ಕಳೆದ ನಾಲ್ಕು ತಿಂಗಳ ಹಿಂದೆ ಏಳನೇ ಸ್ಥಾನದಲ್ಲಿತ್ತು. ಜಿಲ್ಲೆಯನ್ನು ಬಾಲ್ಯವಿವಾಹ ಕಳಂಕರಹಿತ ಜಿಲ್ಲೆಯನ್ನಾಗಿಸಲು ಬಾಲ್ಯವಿವಾಹ ನಿಷೇಧ ಕಾರ್ಯದಲ್ಲಿ ತೊಡಗಿಕೊಂಡಿರುವ ಎಲ್ಲರೂ ಪಣತೊಡಬೇಕಿದೆ ಎಂದರು.
ಜಿಲ್ಲೆಯಲ್ಲಿ ಬಾಲ್ಯವಿವಾಹ ಹಾಗೂ ಪೋಕ್ಸೊ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ. ಹೀಗಾಗಿ ಈ ಕಾಯ್ದೆಗಳ ಕುರಿತು ವ್ಯಾಪಕವಾಗಿ ಅರಿವು ಮೂಡಿಸಲಾಗುತ್ತಿದೆ. ಬಾಲ್ಯವಿವಾಹದಂತಹ ಪ್ರಕರಣಗಳನ್ನು ತಡೆಯಲು ಎಲ್ಲಾ ಹಂತದ ಅಧಿಕಾರಿಗಳು ಜವಾಬ್ದಾರಿ ಇರುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಒಗ್ಗೂಡಿ ತಡೆಯುವ ಪ್ರಯತ್ನ ಮಾಡಬೇಕು ಎಂದು ನ್ಯಾಯಾಧೀಶರಾದ ಎಂ. ಶ್ರೀಧರ ಅವರು ತಿಳಿಸಿದರು.
ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಧರಣೇಶ್, ಮುಖ್ಯ ಲೆಕ್ಕಾಧಿಕಾರಿ ಹೆಚ್.ಎಸ್. ಗಂಗಾಧರ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಸರಸ್ವತಿ, ಮೈಸೂರಿನ ಒಡಿಪಿ ಸಂಸ್ಥೆಯ ಧನರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷ್ಮಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.