ಚಾಮರಾಜನಗರ, ನವೆಂಬರ್ ೨೬ (ಕರ್ನಾಟಕ ವಾರ್ತೆ):- ಜಿಲ್ಲಾಡಳತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ನಗರದಲ್ಲಿಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಭಾರತ ಸಂವಿಧಾನದ ಪ್ರಾಮುಖ್ಯತೆ ಮತ್ತು ಶ್ರೇಷ್ಠತೆಯ ಅರಿವು ಮೂಡಿಸುವ ಉದ್ದೇಶದಿಂದ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ಬಳಿ ಕಾರ್ಯಕ್ರಮ ಆಯೊಜಿಸಲಾಗಿತ್ತು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಸೇರಿದಂತೆ ಇತರೆ ಗಣ್ಯರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ನೆರವೇರಿಸಿದರು.
ಬಳಿಕ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಭಾರತ ಸಂವಿಧಾನ ಪ್ರಸ್ತಾವನೆಯ ಪೀಠಿಕೆಯನ್ನು ಬೋಧಿಸಿದರು.
ಇದೇ ವೇಳೆ ಗಣ್ಯರು ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ಕೇಂದ್ರವು ಪ್ರಕಟಿಸಿರುವ ಭಾರತ ಸಂವಿಧಾನ ಪುಸ್ತಕವನ್ನು ಬಿಡುಗಡೆಗೊಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ್, ತಹಶೀಲ್ದಾರ್ ಬಸವರಾಜು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
