ಚಾಮರಾಜನಗರ: ಗ್ರಾಹಕರ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರಿಗೂ ಜಾಗೃತಿ ಅವಶ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ಅವರು ಅಭಿಪ್ರಾಯಪಟ್ಟರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆ.ಡಿ.ಪಿ ಸಭಾಂಗಣದಲ್ಲಿಂದು ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮೊಬಿಲಿಟಿ ಇಂಡಿಯಾ ಇವರ ಸಹಯೋಗದಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನದ ಅಂಗವಾಗಿ ಪ್ರಾಧಿಕಾರದ ಕಾನೂನು ಸ್ವಯಂ ಸೇವಕರುಗಳಿಗೆ ಮತ್ತು ವಿಶೇಷಚೇತನರಿಗೆ ಸಹಾಯಕ ಸಾಧನ ಸಲಕರಣೆ ವಿತರಣೆ ಕುರಿತು ಹಮ್ಮಿಕೊಳ್ಳಲಾಗಿದ್ದ ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಹಕರ ದಿನದ ಉದ್ದೇಶ ಮತ್ತು ಹಕ್ಕುಗಳ ಬಗ್ಗೆ ಜಾಗೃತಿ ಉಂಟಾದಾಗ ಮಾತ್ರ ಅರಿವು ಕಾರ್ಯಕ್ರಮಗಳು ಯಶಸ್ವಿಯಾಗಲೂ ಸಾಧ್ಯ. ಸರ್ಕಾರವು ಗ್ರಾಹಕರ ಹಕ್ಕುಗಳಿಗೆ ಸಂಬಂಧಿಸಿದಂತೆ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬೇಕು. ಎಲ್ಲಾ ವಸ್ತುಗಳು ನಿರ್ದಿಷ್ಟ ಕಾಲಾವಕಾಶ ಹೊಂದಿರುತ್ತದೆ.
ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಅಗತ್ಯವಾಗಿದೆ ಎಂದು ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತೂರು ಇಂದುಶೇಖರ್ ಅವರು ಮಾತನಾಡಿ ಗ್ರಾಹಕರ ಹಕ್ಕುಗಳ ದಿನವು ಸರಕು ಮತ್ತು ಸೇವೆಗಳಿಗೆ ಸಂಬಂಧಿಸಿದ ದಿನವಾಗಿದೆ. ಗ್ರಾಹಕರ ಹಕ್ಕುಗಳ ಮಹತ್ವವನ್ನು ಸಂಪೂರ್ಣವಾಗಿ ಅರಿಯಬೇಕು.
ಪ್ರತಿಯೊಂದು ವಸ್ತುಗಳನ್ನು ಖರೀದಿಸುವ ಸಂದರ್ಭದಲ್ಲಿ ವಸ್ತುವಿನ ಬಗ್ಗೆ ಸರಿಯಾಗಿ ತಿಳಿದುಕೊಂಡು ವ್ಯವಹರಿಸಬೇಕು. ಮಾರುಕಟ್ಟೆಯಲ್ಲಿ ಕಂಡು ಬರುವ ಬಣ್ಣ ಬಣ್ಣದ ಪದಾರ್ಥಗಳಿಗೆ ಮಾರು ಹೋಗಬಾರದು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಶ್ರೀಧರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಹೆಚ್.ಎನ್. ಶ್ರೀನಿಧಿ, ಮೊಬಿಲಿಟಿ ಇಂಡಿಯಾದ ಎಸ್.ಎನ್. ಆನಂದ್, ಕಾರ್ಮಿಕ ಇಲಾಖೆಯ ನಿರೀಕ್ಷಕರಾದ ವೀಣಾ ಇತರರು ಕಾರ್ಯಕ್ರಮದಲ್ಲಿ ಇದ್ದರು.
