ಚಾಮರಾಜನಗರ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಹಾಗೂ ಆಧಾರ್ ಆಧಾರಿತ (ಎ.ಪಿ.ಬಿ) ಪಾವತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಾಹಕ ಅಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾಮಟ್ಟದ ಬ್ಯಾಂಕರ್‍ಸ್ ಸಮಿತಿ (ಡಿ.ಎಲ್.ಪಿ.ಸಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮನರೇಗಾ ಯೋಜನೆಯಡಿ ಫಲಾನುಭವಿಗಳಿಗೆ ಜಾಬ್‌ಕಾರ್ಡ್ ವಿತರಿಸಲು ಅನುಕೂಲವಾಗುವಂತೆ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕೆಜ್ ಹಾಗೂ ಆಧಾರ್ ಆಧಾರಿತ (ಎ.ಪಿ.ಬಿ) ಪಾವತಿ ಕಾರ್ಯದಲ್ಲಿ ಈವರೆಗೆ ಶೇ. ೫೭ರಷ್ಟು ಪ್ರಗತಿ ಸಾಧಿಸಲಾಗಿದೆ. ಈ ನಿಟ್ಟಿನಲ್ಲಿ ಯೋಜನೆ ಅನುಷ್ಟಾನಗೊಳಿಸುವ ಇಲಾಖೆಗಳು ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಆಧಾರ್ ಜೋಡಣೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.
ಪ್ರತಿ ಗ್ರಾಮ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಮಟ್ಟದಲ್ಲಿ ಫಲಾನುಭವಿಗಳ ಆಧಾರ್ ಸಂಖ್ಯೆಯು ಬ್ಯಾಂಕ್ ಖಾತೆಗೆ ಜೋಡಣೆಯಾಗಿರುವ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಕಾರ್ಯನಿವಾಹಕ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಫಲಾನುಭವಿಗಳು ಬ್ಯಾಂಕ್‌ಗಳಿಗೆ ಆಧಾರ್ ಜೋಡಣೆಗಾಗಿ ಅಲೆಯುವುದರಿಂದ ಸಮಯ ಹಾಗೂ ಒಂದು ದಿನದ ಕೂಲಿ ವ್ಯರ್ಥವಾಗಲಿದೆ. ಇದು ತಪ್ಪಬೇಕು. ಗ್ರಾಮ ಪಂಚಾಯತ್ ಪಿ.ಡಿ.ಒ ಗಳು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದಿರುವ ಫಲಾನುಭವಿಗಳನ್ನು ಗುರುತಿಸಿ, ಆಧಾರ್ ಮಾಹಿತಿ ಸಂಗ್ರಹಿಸಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಬ್ಯಾಂಕ್‌ಗಳಿಗೆ ಸಲ್ಲಿಸಬೇಕು ಎಂದರು.
ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಸಂಭಂಧ ಎಲ್ಲಾ ಗ್ರಾ.ಪಂ. ಪಿ.ಡಿ.ಒ ಹಾಗೂ ತಾ.ಪಂ. ಇ.ಒ ಗಳು ಮತ್ತು ನರೇಗಾ ವಿಭಾಗದ ಸಹಾಯಕ ನಿರ್ದೇಶಕರು ಎನ್.ಆರ್.ಎಲ್.ಎಂ. ಯೋಜನೆಯಡಿ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಜಿ. ಸಖಿ ಹಾಗೂ ಗ್ರಾಮ ಕಾಯಕ ಮಿತ್ರರ ಸಭೆ ನಡೆಸಿ ಅಗತ್ಯ ಮಾರ್ಗದರ್ಶನ ನೀಡಿ ಆಯಾ ಕ್ಷೇತ್ರವ್ಯಾಪ್ತಿ ಮಾಹಿತಿ ಸಂಗ್ರಹಿಸಿ ಸಹಕಾರ ಪಡೆಯಬಹುದು ಎಂದು ಜಿ.ಪಂ. ಸಿ.ಇ.ಒ ಅವರು ಸಲಹೆ ಮಾಡಿದರು.
ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮ ಪಂಚಾಯತ್ ಸೇರಿದಂತೆ ಇತರೆ ಅಧಿಕಾರಿಗಳ ಸಮನ್ವಯದೊಂದಿಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಾರ್ಯವನ್ನು ಅಭಿಯಾನದ ಮಾದರಿಯಲ್ಲಿ ಹಮ್ಮಿಕೊಳ್ಳುವ ಮೂಲಕ ಶೇ. ೧೦೦ರಷ್ಟು ಪ್ರಗತಿಗೆ ಕಾರ್ಯಪ್ರವೃತ್ತರಾಗಬೇಕು. ಕಾಡಂಚಿನ ಗ್ರಾಮಗಳು ಹಾಗೂ ಹಾಡಿ ಪ್ರದೇಶಗಳಲ್ಲಿ ಶಿಬಿರಗಳನ್ನು ಏರ್ಪಡಿಸಬೇಕು. ಕೃಷಿ, ಪಶು ಸಂಗೋಪನೆ ಇಲಾಖೆಗಳಡಿ ತರಬೇತಿ ಪಡೆದು ಕಾರ್ಯನಿರ್ವಹಿಸುತ್ತಿರುವ ಸಖಿಯರನ್ನು ಈ ಕಾರ್ಯಕ್ಕಾಗಿ ಬಳಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಾಯತ್ರಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಪ್ರಭಾರ ಉಪ ಕಾರ್ಯದರ್ಶಿ ಧರಣೇಶ್, ಲೀಡ್ ಬ್ಯಾಮಕ್ ವ್ಯವಸ್ಥಾಪಕರಾದ ಸುರೇಖಾ, ಜಿಲ್ಲಾ ಎಂ.ವೈ.ಎಸ್ ಸಂಯೋಜಕರಾದ ಶಮಂತ್, ಜಿಲ್ಲಾಮಟ್ಟದ ಅಧಿಕಾರಿಗಳು, ಎಲ್ಲಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆಯಲ್ಲಿ ಇದ್ದರು.