ಚಾಮರಾಜನಗರ: ಬಾಲಕಾರ್ಮಿಕ ಪದ್ದತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಿ ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು, ಜನಪ್ರತಿನಿಧಿಗಳು, ವಿವಿಧ ಇಲಾಖೆಗಳು ಸೇರಿದಂತೆ ಎಲ್ಲರ ಸಹಕಾರ ಅಗತ್ಯವಾಗಿದೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ ಅವರು ಅಭಿಪ್ರಾಯಪಟ್ಟರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆ.ಡಿ.ಪಿ ಸಂಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿ?ಧ ಮತ್ತು ನಿಯಂತ್ರಣ ಕಾಯ್ದೆಯ ಸೆಕ್ಷನ್ ೧೭ರಡಿ ನೇಮಕಗೊಂಡಿರುವ ನಿರೀಕ್ಷಕರುಗಳಿಗೆ ಬಾಲಕಾರ್ಮಿಕ ಪದ್ಧತಿ ಹಾಗೂ ಬಾಲ್ಯವಿವಾಹ ಪದ್ಧತಿ ನಿರ್ಮೂಲನೆಯಲ್ಲಿ ಸೆಕ್ಷನ್ ೧೭ರಡಿ ನೇಮಕಗೊಂಡ ನಿರೀಕ್ಷಕರ ಪಾತ್ರ ಹಾಗೂ ಇ ಶ್ರಮ್ ನೋಂದಣಿ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮಗಳಲ್ಲಿ ಬಾಲಕಾರ್ಮಿಕರನ್ನು ಗುರುತಿಸಿ ಅವರಿಗೆ ಪುನರ್ವಸತಿ ಕಲ್ಪಿಸಬೇಕು. ಶಾಲೆಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತಂದು ಶಿಕ್ಷಣ ಕೊಡಿಸಬೇಕು. ಮಾನವ ಕಳ್ಳಸಾಗಣೆಯನ್ನು ತಡೆಯಬೇಕು. ಶೇ.೩೦ರಷ್ಟು ಜನರಿಗೆ ಮಾತ್ರ ಕಾನೂನಿನ ಅರಿವಿದೆ. ಇನ್ನುಳಿದವರಿಗೂ ಕಾನೂನಿನ ಜಾಗೃತಿ ಮೂಡಿಸಿ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಕಿತ್ತೊಗೆದು ಜಿಲ್ಲೆಯನ್ನು ಬಾಲಕಾರ್ಮಿಕ ಪದ್ದತಿ ಮುಕ್ತಗೊಳಿಸಲು ಎಲ್ಲರ ಸಹಕಾರ ಅವಶ್ಯವಾಗಿದೆ ಎಂದರು. ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಸರ್ಕಾರವು ಸಾಕಷ್ಟು ಕ್ರಿಯಾಶೀಲ ಯೋಜನೆಗಳನ್ನು ಜಾರಿಗೊಳಿಸಿದೆ. ಕಾರ್ಮಿಕರ ಕಲ್ಯಾಣ ಯೋಜನೆ, ಕಾರ್ಯಕ್ರಮಗಳ ಬಗ್ಗೆ ಅರಿವು ಪಡೆದು ಸದುಪಯೋಗ ಮಾಡಿಕೊಳ್ಳುವಲ್ಲಿ ಮುಂದೆ ಬರಬೇಕು. ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಅನುದಾನ ಮೀಸಲಿಟ್ಟಿದೆ. ಸಂಘಟಿತ ಅಸಂಘಟಿತ ಕಾರ್ಮಿಕರನ್ನು ಗುರುತಿಸಿ ಸೌಲಭ್ಯಗಳನ್ನು ತಲುಪಿಸಲು ೧೩ ಇಲಾಖೆಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ನ್ಯಾಯಾಧೀಶರಾದ ಶ್ರೀಧರ ಅವರು ತಿಳಿಸಿದರು. ಮೈಸೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ನಾಜಿಯಾ ಸುಲ್ತಾನ ಅವರು ಮಾತನಾಡಿ ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಯಲ್ಲಿ ಗ್ರಾಮಮಟ್ಟದ ಅಧಿಕಾರಿಗಳು ಗ್ರಾಮಪಂಚಾಯಿತಿಯನ್ನು ಬಾಲಕಾರ್ಮಿಕ ಮುಕ್ತಗೊಳಿಸಿ ಮುಂದಿನ ಪೀಳಿಗೆ ಉತ್ತಮ ಭವಿಷ್ಯಕ್ಕಾಗಿ ಮಕ್ಕಳನ್ನು ದೈಹಿಕ, ಮಾನಸಿಕವಾಗಿ ಸದೃಢಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಗುಡೂರು ಭೀಮಸೇನ ಅವರು ಮಾತನಾಡಿ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸದಿದ್ದರೆ ಕಾನೂನುಗಳು ಕಾಗದದ ಮೇಲೆ ಮಾತ್ರ ಇರಲಿವೆ. ಅವುಗಳ ಪರಿಣಾಮಕಾರಿ ಅನುಷ್ಠಾನದಿಂದ ಯಾವುದೇ ಸಾಮಾಜಿಕ ಪಿಡುಗುಗಳನ್ನು ತೊಡೆದು ಹಾಕಬಹುದು ಎಂದು ತಿಳಿಸಿದರು. ಮಹಿಳಾ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಶೇಖರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ. ಮಹದೇವಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಕೆ.ಬಿ. ಪ್ರಭುಸ್ವಾಮಿ, ಕಾರ್ಮಿಕ ನಿರೀಕ್ಷಕರಾದ ವೀಣಾ, ಕೊಳ್ಳೇಗಾಲ ವೃತ್ತದ ಕಾರ್ಮಿಕ ನಿರೀಕ್ಷಕರಾದ ಚಂದ್ರು, ಗುಂಡ್ಲುಪೇಟೆ ವೃತ್ತದ ನಾರಾಯಣಮೂರ್ತಿ ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಎಂ. ಮಹೇಶ್ ಅವರು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿ?ಧ ಮತ್ತು ನಿಯಂತ್ರಣ ಕಾಯ್ದೆಯ ಸೆಕ್ಷನ್ ೧೭ರಡಿ ನೇಮಕಗೊಂಡಿರುವ ನಿರೀಕ್ಷಕರುಗಳಿಗೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೋವಿಂದ ಅವರು ಬಾಲ್ಯವಿವಾಹ ಪದ್ಧತಿ ನಿರ್ಮೂಲನೆಯಲ್ಲಿ ಸೆಕ್ಷನ್ ೧೭ರಡಿ ನೇಮಕಗೊಂಡ ನಿರೀಕ್ಷಕರ ಪಾತ್ರ ಹಾಗೂ ಇ ಶ್ರಮ್ ನೋಂದಣಿ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮ ಬಳಿಕ ಜಿಲ್ಲೆಯಾದ್ಯಂತ ೧೦ ದಿನಗಳ ಕಾಲ ಸಂಚರಿಸಿ ಇ-ಶ್ರಮ್ ನೋಂದಣಿ ಬಗ್ಗೆ ಅರಿವು ಮೂಡಿಸುವ ಪ್ರಚಾರ ವಾಹನಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಶ್ರೀಧರ ಅವರು ಸೇರಿದಂತೆ ಗಣ್ಯರು ಚಾಲನೆ ನೀಡಿದರು.