ಚಾಮರಾಜನಗರ: ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿರುವ ಅನಿಷ್ಠ ಪದ್ಧತಿಗಳಲ್ಲಿ ಬಾಲ್ಯವಿವಾಹವು ಕೂಡ ಒಂದಾಗಿದ್ದು,ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಭಿಪ್ರಾಯಪಟ್ಟರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಯುವಜನ ಕ್ರೀಡಾ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬಾಲ್ಯವಿವಾಹ ನಿಷೇಧ ಕುರಿತು ಹಮ್ಮಿಕೊಳ್ಳಲಾಗಿದ್ದ ಯುವಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯವಿವಾಹವು ಮಕ್ಕಳಲ್ಲಿ ದೈಹಿಕ ಹಾಗೂ ಮಾನಸಿಕವಾಗಿ ವ್ಯತಿರಿತ ಪರಿಣಾಮ ಬೀರಲಿದೆ. ಪೋಷಕರು ಮೂಢನಂಬಿಕೆಯಿಂದ ಹೊರಬಂದಾಗ ಮಾತ್ರ ಬಾಲ್ಯವಿವಾಹದಂತಹ ಅನಿಷ್ಠ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಾಧ್ಯವಾಗಲಿದೆ ಎಂದರು.
ಸಮಾಜದಲ್ಲಿ ಹಾಸು ಹೊಕ್ಕಾಗಿರುವ ಬಾಲ್ಯವಿವಾಹದಂತ ಸಮಸ್ಯೆಗಳನ್ನು ತಡೆಯಲು ಮಕ್ಕಳಿಗೆ ಶಿಕ್ಷಣ ಅತ್ಯಂತ ಅವಶ್ಯಕವಾಗಿದೆ. ಶಿಕ್ಷಣದಿಂದ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮುಂದುವರೆಯಬಹುದು. ಪೋಷಕರು ಸಹ ಮಕ್ಕಳ ಭವಿಷ್ಯಕ್ಕೆ ದಾರಿ ದೀಪವಾಗ ಹಾಗೂ ಸ್ಫೂರ್ತಿದಾಯಕವಾಗಬೇಕು. ಬಾಲ್ಯವಿವಾಹ ತಡೆಗಟ್ಟುವಲ್ಲಿ ಪೋಷಕರು, ಸಾರ್ವಜನಿಕರು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ ಅವರು ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಹೊತ್ತು ನೀಡಬೇಕು. ಪೋಷಕರು ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನಹರಿಸಬೇಕು. ಮಕ್ಕಳು ಪೋಷಕರ ಒತ್ತಡಗಳಿಗೆ ಮಣಿದು ಬಾಲ್ಯವಿವಾಹಕ್ಕೆ ಮುಂದಾಗಬಾರದು. ಈ ನಿಟ್ಟಿನಲ್ಲಿ ಮಕ್ಕಳಿಗೆ ಬಾಲ್ಯವಿವಾಹದ ಕುರಿತು ಪ್ರಾಥಮಿಕ ಹಂತದಿಂದಲೇ ಅರಿವು ಮೂಡಿಸಬೇಕು ಎಂದರು.
ಬಾಲ್ಯವಿವಾಹ ಕುರಿತು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದಲ್ಲಿ ಗಣ್ಯರು ಬಹುಮಾನ ವಿತರಿಸಿದರು. ಇದೇ ವೇಳೆ ಬಾಲ್ಯವಿವಾಹ ಕುರಿತು ಜಾಗೃತಿ ಭಿತ್ತಿಪತ್ರ ಅನಾವರಣ ಮಾಡಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ರೂಪಶ್ರೀ, ಶ್ವೇತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷ್ಮೀ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್. ಅನಿತಾ, ಮೊಬಿಲಿಟಿ ಸಂಸ್ಥೆಯ ರಾಜಣ್ಣ, ಪೋಲಿಸ್ ಇಲಾಖೆಯ ಪ್ರಸನ್ನಮೂರ್ತಿ, ಆರೋಗ್ಯ ಇಲಾಖೆಯ ಮಾದೇಶ್, ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಮಹೇಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿ ವೇದಾವತಿ ಇತರರು ಕಾರ್ಯಕ್ರಮದಲ್ಲಿ ಇದ್ದರು.