ಮಡಿಕೇರಿ: ಮಳೆಗಾಲ ಆರಂಭವಾಗಿದ್ದು, ರಸ್ತೆಗಳಿಗೆ ಹಾನಿಯಾಗುವಂತಹ ಪ್ರಾಕೃತಿಕ ವಿಕೋಪಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಭಾರೀ ವಾಹನಗಳ ಸಂಚಾರವನ್ನು ಕೊಡಗಿನಲ್ಲಿ ನಿರ್ಬಂಧಿಸಲಾಗಿದೆ.

ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ  ಮತ್ತು ಇತರೆ ಸರಕು ಸಾಗಾಣಿಕೆಯನ್ನು ಜಿಲ್ಲೆಯಾದ್ಯಂತ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಬಂಧಿಸುವ ತೀರ್ಮಾನವನ್ನು ಜಿಲ್ಲಾಡಳಿತ ಕೈಗೊಂಡಿದ್ದು ಅದರಂತೆ  ಜೂ.23 ರಿಂದ ಆಗಸ್ಟ್ 16ರವರೆಗೆ ಭಾರೀ ವಾಹನಗಳಿಗೆ ಸಂಚಾರಕ್ಕೆ ಅವಕಾಶವಿರುವುದಿಲ್ಲ.

ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಭೂಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗಲಿರುವುದರಿಂದ  ಸಾರ್ವಜನಿಕ ಜೀವ ಮತ್ತು ಆಸ್ತಿಗಳ ಹಿತದೃಷ್ಟಿಯಿಂದ ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್‌ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂರ್ಸ್‍, ಶಿಪ್ ಕಾರ್ಗೋ ಕಂಟೈರ್ಸ್ ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧವಿರಲಿದೆ

ಕಳೆದ ಮೂರು ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ನೆರೆ ಹಾವಳಿಯಿಂದಾಗಿ ಹಲವಾರು ರಸ್ತೆಗಳು ಹಾಳಾಗಿದೆ.  ಈ ರಸ್ತೆಗಳನ್ನು ಈಗಾಗಲೇ ಮಳೆಹಾನಿ ದುರಸ್ತಿಯಡಿ ಸರಿಪಡಿಸಲಾಗುತ್ತಿದ್ದು, ಪ್ರಸ್ತುತ ವರ್ಷದ ಮಳೆಗಾಲ ಪ್ರಾರಂಭವಾಗಿರುವುದರಿಂದ ಮುಂದೆ ಸಂಭವಿಸಬಹುದಾದ ಅಪಾಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಭಾರೀ ವಾಹನ ಸಂಚಾರದಿಂದ ರಸ್ತೆಗೆ ಅಪಾಯವಾಗುವ ಸಾಧ್ಯತೆ ಇರುವುದರಿಂದ ಲಘು ವಾಹನಗಳು, ಬಸ್‌ಗಳು ಹಾಗೂ 10 ಟನ್ ತೂಕದೊಳಗಿನ ಸರಕು ವಾಹನಗಳನ್ನು ಹೊರತುಪಡಿಸಿ ಉಳಿದ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಆದರೆ ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳಿಗೆ (ಮಲ್ಟಿ ಆಕ್ಸಿಲ್ ಬಸ್‌ಗಳು  ಸೇರಿದಂತೆ) ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ. ಈ ಸಂಬಂಧ ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 116 ರಂತೆ ಅವಶ್ಯವಿರುವ ಸಂಜ್ಞೆ , ಸೂಚನಾ ಫಲಕಗಳನ್ನು ಅಳವಡಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.

ಜಿಲ್ಲೆಯ ಮುಖಾಂತರ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‌ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲು ಪೊಲೀಸ್ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶಿಸಿದ್ದಾರೆ.

 

 

 

 

By admin