ಚಾಮರಾಜನಗರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಕೆ.ಎಂ. ಗಾಯತ್ರಿ ಅವರು ಇಂದು ಚಾಮರಾಜನಗರ ತಾಲೂಕಿನ ಮಂಗಲ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ವಿವಿಧ ಕಾಮಗಾರಿ ಪರಿಶೀಲಿಸಿದರು. ಅಮೃತ ಯೋಜನೆ ಹಂತ-೨ ರಡಿ ಆಯ್ಕೆಯಾಗಿರುವ ಮಂಗಲ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೊತೆ ಅಮೃತ ಗ್ರಾಮ ಪಂಚಾಯಿತಿ ಯೋಜನೆಯಡಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಗ್ರಾಮ ಪಂಚಾಯಿತಿಯ ಗ್ರಂಥಾಲಯದ ದುರಸ್ತಿ ಕಾಮಗಾರಿಯನ್ನು ವೀಕ್ಷಿಸಿ ಗ್ರಂಥಾಲಯದಲ್ಲಿ ನೋಂದಣಿ ಮಾಡಿಕೊಳ್ಳಲು ಗ್ರಾಮ ಪಂಚಾಯಿತಿ ವತಿಯಿಂದ ಕಾರ್ಡ್ಗಳನ್ನು ಒದಗಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮದಲ್ಲಿರುವ ವಿದ್ಯಾರ್ಥಿಗಳು, ಸ್ವ ಸಹಾಯ ಸಂಘದ ಸದಸ್ಯರುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸುವಂತೆ ಹಾಗೂ ಹೆಚ್ಚಿನ ಪುಸ್ತಕಗಳ ಅವಶ್ಯಕತೆಯಿದ್ದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಬೇಡಿಕೆಯನ್ನು ಸಲ್ಲಿಸುವಂತೆ ಗ್ರಂಥಾಲಯ ಮೇಲ್ವಿಚಾರಕರಿಗೆ ಸೂಚಿಸಿದರು.
ಮಂಗಲ ಗ್ರಾಮದ ಪಶು ಆಸ್ಪತ್ರೆಗೆ ಭೇಟಿ ನೀಡಿ ಹಾಜರಾತಿಯನ್ನು ಪರಿಶೀಲಿಸಿ ಪಶು ವೈದ್ಯಾಧಿಕಾರಿಗಳಿಂದ ಚರ್ಮಗಂಟು ರೋಗ ಹಾಗೂ ಲಸಿಕೆಯನ್ನು ನೀಡುತ್ತಿರುವ ಬಗ್ಗೆ ಮಾಹಿತಿ ಪಡೆದರು. ನಂತರ ಕಲ್ಯಾಣಿ ಕೊಳಕ್ಕೆ ಭೇಟಿ ನೀಡಿ ಕಲ್ಯಾಣಿಯನ್ನು ಸ್ವಚ್ಛಗೊಳಿಸುವಂತೆ ಮತ್ತು ಗ್ರಾಮದಲ್ಲಿ ಸ್ಥಳ ಲಭ್ಯವಿದ್ದಲ್ಲಿ ಸಾರ್ವಜನಿಕ ಉದ್ಯಾನವನ್ನು ನಿರ್ಮಿಸಲು ಕ್ರಮವಹಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಲ ಉಪ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಗ್ರಾಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿರುವ ಸಿ.ಸಿ.ರಸ್ತೆ ಮತ್ತು ಚರಂಡಿ ಕಾಮಗಾರಿಗಳನ್ನು ಪರಿಶೀಲಿಸಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜಲ ಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ನಳ ಸಂಪರ್ಕ ಕಾಮಗಾರಿಗಳನ್ನು ಜಿ.ಪಂ ಸಿಇಒ ಅವರು ವೀಕ್ಷಿಸಿದರು.
ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಹಾಜರಾತಿಯನ್ನು ಪರಿಶೀಲಿಸಿದರು. ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯು ಹಾಜರಿಲ್ಲದೆ ಇರುವುದು ಕಂಡುಬಂದ ಹಿನ್ನೆಲೆಯಲ್ಲಿ ವರದಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು. ಮಕ್ಕಳಿಗೆ, ಗರ್ಭಿಣಿ ಮತ್ತು ಬಾಣಂತಿಯರಿಗೆ ನೀಡುತ್ತಿರುವ ಪೌಷ್ಠಿಕ ಆಹಾರವನ್ನು ಪರಿಶೀಲಿಸಿದರು. ಪೌಷ್ಟಿಕ ತೋಟವನ್ನು ನಿರ್ಮಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಯಡಿಯೂರು ಗ್ರಾಮದ ೨ನೇ ಅಂಗನವಾಡಿ ಕೇಂದ್ರದಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಲಾಗಿರುವ ಪೌಷ್ಟಿಕ ತೋಟವನ್ನು ಪರಿಶೀಲಿಸಿ ನಂತರ ಮಕ್ಕಳ ಹಾಜರಾತಿ, ಗರ್ಭಿಣಿ ಮತ್ತು ಬಾಣಂತಿಯರಿಗೆ ನೀಡುತ್ತಿರುವ ಪೌಷ್ಠಿಕ ಆಹಾರವನ್ನು ಪರಿಶೀಲಿಸಿದರು. ಯಡಿಯೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಬಿಸಿಯೂಟ ವಿತರಣೆ ಮಾಡಿರುವ ಬಗ್ಗೆ ಮಾಹಿತಿ ಪಡೆದರು.
ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಪ್ರಕಾಶ್, ಮಂಗಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆದಿಶೇಷಮೂರ್ತಿ, ಇನ್ನಿತರರು ಇದ್ದರು.
