ಚಾಮರಾಜನಗರ: ಮತದಾನದ ಮಹತ್ವ ಸಾರುವ ಜಾಗೃತಿ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳು ಪರಿಣಾಮಕಾರಿಯಾಗಿ ತೊಡಗಿಕೊಳ್ಳಬೇಕು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಕಮಿಟಿಯ ಅಧ್ಯಕ್ಷರಾದ ಎಸ್. ಪೂವಿತಾ ಅವರು ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಮತದಾನದ ಬಗ್ಗೆ ಅರಿವು ಮೂಡಿಸುವ ಸ್ವೀಪ್ ಕಾರ್ಯ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವವನ್ನು ಬಲಪಡಿಸುವ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತದಾನದಲ್ಲಿ ಪಾಲ್ಗೊಳ್ಳಬೇಕಿದೆ. ಮತದಾರರಿಗೆ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಆಯೋಜಿಸಬೇಕು. ಈಗಾಗಲೇ ಸಿದ್ದಪಡಿಸಿರುವ ಯೋಜನಾ ಅನುಸಾರ ವಿವಿಧ ಇಲಾಖೆಗಳು ತೊಡಗಿಕೊಳ್ಳಬೇಕೆಂದು ಸಿಇಒ ಅವರು ತಿಳಿಸಿದರು.
ಜಾಥಾ, ಶಾಲಾ ಮಕ್ಕಳಿಂದ ಪೋಷಕರಿಗೆ ಅರಿವು ಮೂಡಿಸುವುದು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಯಿಂದ ಮತದಾನದ ಪ್ರಾಮುಖ್ಯತೆ ತಿಳಿಸಿಕೊಡಬೇಕಿದೆ. ಸೋಲಿಗರು, ಗಿರಿಜನ ಹಾಡಿಗಳಲ್ಲಿಯೂ ಹೆಚ್ಚಿನ ಮತದಾನ ಆಗಬೇಕಿದೆ. ಮತದಾನ ಜಾಗೃತಿ ರಾಯಭಾರಿಯಾಗಿ ಜಿಲ್ಲೆಯವರೇ ಆದ ಸೋಲಿಗ ಸಮುದಾಯದ ಮಾದಮ್ಮ ಅವರನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ. ಅಧಿಕಾರಿಗಳು ಮತ್ತಷ್ಟು ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು ಎಂದರು.
ಕಾಲೇಜು ವಿದ್ಯಾರ್ಥಿಗಳಿಂದ ವಿಶಿಷ್ಟವಾದ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಬೇಕು. ಸ್ಥಳೀಯ ಸಂಸ್ಥೆಗಳು ತಮ್ಮಲ್ಲಿರುವ ವಾಹನಗಳು, ಪ್ರಚಾರ ಸಾಧನಗಳ ಮೂಲಕ ಮನೆ ಮನೆಗಳಿಗೆ ಮತದಾನದ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಮತದಾನದ ಪ್ರಮಾಣ ಹೆಚ್ಚಳವಾಗಬೇಕು. ಜನತಂತ್ರ ವ್ಯವಸ್ಥೆಯಲ್ಲಿ ಸಕ್ರಿಯರಾಗಿ ಭಾಗವಹಿಸುವಂತಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಸರಸ್ವತಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪ್ರಭಸ್ವಾಮಿ, ಸಹಾಯಕ ಯೋಜನಾಧಿಕಾರಿ ಧರಣೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುನಾಥ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೆಶಕರಾದ ಮಂಜುನಾಥ ಪ್ರಸನ್ನ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಎಂ.ವಿ. ಸುಧಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮಲ್ಲಿಕಾರ್ಜುನ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷ್ಮಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿಂದ್ಯಾ, ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್. ಅನಿತಾ ಇತರರು ಸಭೆಯಲ್ಲಿ ಹಾಜರಿದ್ದರು.
