ಚಾಮರಾಜನಗರ: ಚಾಮರಾಜನಗರ ಜಿಲ್ಲೆಗೆ ಇದೇ ಡಿಸೆಂಬರ್ ೧೨ರಂದು ಮುಖ್ಯಮಂತ್ರಿಗಳು ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿಂದು ವಸತಿ, ಮೂಲಸೌಕರ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಅಧಿಕಾರಿಗಳ ಸಭೆ ನಡೆಸಿದರು.
ಮುಖ್ಯಮಂತ್ರಿಯವರು ಡಿಸೆಂಬರ್ ೧೨ರಂದು ಚಾಮರಾಜನಗರ, ಹನೂರು ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ, ಮಲೆ ಮಹದೇಶ್ವರ ಬೆಟ್ಟಕ್ಕೂ ಭೇಟಿ ನೀಡಿ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರಾದ ಆರ್. ನರೇಂದ್ರ ಅವರೊಂದಿಗೆ ಮಹದೇಶ್ವರ ಬೆಟ್ಟದ ನಾಗಮಲೈ ಭವನ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಕಾರ್ಯಕ್ರಮ ಆಯೋಜನೆ ಸಂಬಂಧ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಮಾತನಾಡಿ, ಮುಖ್ಯಮಂತ್ರಿಗಳ ಕಾರ್ಯಕ್ರಮವು ಅಚ್ಚುಕಟ್ಟಾಗಿ ನೆರವೇರಬೇಕು. ಮುಖ್ಯ ರಸ್ತೆಗಳು, ಮಾರ್ಗಗಳನ್ನು ಸಿದ್ದಪಡಿಸಬೇಕು, ವಿವಿದೆಡೆ ಗುಂಡಿಬಿದ್ದಿರುವ ರಸ್ತೆಗಳನ್ನು ಸರಿಪಡಿಸಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪೂರ್ಣವಾಗಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿಯವರು ಭೇಟಿ ನೀಡಲಿದ್ದಾರೆ. ಪ್ರಾಧಿಕಾರದ ಸಭೆ ನಡೆಸಲಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಅಚ್ಚುಕಟ್ಟಾದ ವ್ಯವಸ್ಥೆಗಳನ್ನು ಕೈಗೊಳ್ಳಬೇಕು. ಹೆಲಿಪ್ಯಾಡ್ ರಸ್ತೆಯನ್ನು ಸರಿಪಡಿಸಬೇಕು.
ಹನೂರು, ಚಾಮರಾಜನಗರ ಪಟ್ಟಣಗಳಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿರುವ ಹಿನ್ನಲೆಯಲ್ಲಿ ಕುಡಿಯುವ ನೀರು, ಶಾಮಿಯಾನ ಇನ್ನಿತರ ವ್ಯವಸ್ಥೆಗಳು ಸಮರ್ಪಕವಾಗಿ ಇರಬೇಕೆಂದು ಸಚಿವರು ತಿಳಿಸಿದರು.
ಮಲೆ ಮಹದೇಶ್ವರ ಕ್ಷೇತ್ರದಲ್ಲಿ ನಿರ್ಮಾಣವಾಗುತ್ತಿರುವ ೧೦೮ ಅಡಿ ಎತ್ತರದ ಮಹದೇಶ್ವರ ಪ್ರತಿಮೆ ಕಾರ್ಯ ತ್ವರಿತವಾಗಿ ಆಗಬೇಕು. ಒಳ ಚರಂಡಿ ಕಾಮಗಾರಿಯು ಸಹ ವೇಗಗತಿಯಲ್ಲಿ ಆಗಬೇಕು ಎಂದು ಸಚಿವರು ಸೂಚಿಸಿದರು.
ಸಭೆಯಲ್ಲಿ ಶಾಸಕರಾದ ಆರ್. ನರೇಂದ್ರ, ಜಿಲ್ಲಾಧಿಕಾರಿಗಳಾದ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ, ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರಾದ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಂದರ್‌ರಾಜ್, ಡಿ.ಸಿ.ಎಫ್ ಸಂತೋಷ್‌ಕುಮಾರ್ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.