ಚಾಮರಾಜನಗರ: ಮಹಿಳಾ ಸಬಲೀಕರಣದಿಂದ ಮಾತ್ರ ಅಭಿವೃದ್ದಿ, ಸಮಾಜದ ಏಳಿಗೆ ಸಾಧ್ಯವಾಗಲಿದೆ. ಹೀಗಾಗಿ ಮಹಿಳಾ ಸಬಲೀಕರಣದ ಬಗ್ಗೆ ಹೆಚ್ಚು ಚರ್ಚೆಯಾಗಬೇಕಿದೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಭಿಪ್ರಾಯಪಟ್ಟರು.
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ಗ್ರಾಮೀಣ ಮತ್ತು ನಗರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕುಟುಂಬದಲ್ಲಿ ಹಲವಾರು ಪ್ರಮುಖ ಪಾತ್ರ ವಹಿಸುವ ಮಹಿಳೆಯರಿಗೆ ತಾರತಮ್ಯ ಮಾಡಬಾರದು. ಎಲ್ಲಾ ರಂಗದಲ್ಲಿಯೂ ಮಹಿಳೆಯರು ದಿಟ್ಟತನದಿಂದ ತೊಡಗಿಕೊಂಡಿರುವುದನ್ನು ಇಂದು ಕಾಣಬಹುದಾಗಿದೆ. ಮಹಿಳೆಯರಿಗೆ ಹೆಚ್ಚು ಅವಕಾಶಗಳು ನೀಡಬೇಕು. ಮಹಿಳೆಯರು ಸಬಲರಾದರೆ ಸಮಾಜದ ಪ್ರಗತಿಯು ಆಗಲಿದೆ. ಈ ನಿಟ್ಟಿನಲ್ಲಿ ಚಿಂತನೆ ಮಾಡಬೇಕಿದೆ ಎಂದು ಶಾಸಕರು ತಿಳಿಸಿದರು.
ಮಹಿಳಾ ಸ್ವ ಸಹಾಯ ಸಂಘಗಳು ಅಸ್ತಿತ್ವಕ್ಕೆ ಬಂದಿದ್ದು ಇದರಿಂದ ಹಲವು ಕುಟುಂಬಗಳಿಗೆ ನೆರವಾಗಿದೆ. ಮಹಿಳೆಯರು ಸಕ್ರಿಯರಾಗಿ ತೊಡಗಿಕೊಂಡು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಮಹಿಳೆಯರ ಅಭಿವೃದ್ದಿಗೆ ಪೂರಕವಾಗಿರುವ ಕಾರ್ಯಕ್ರಮಗಳಿಗೆ ಉತ್ತೇಜನ ನೀಡಬೇಕೆಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು.
ನಗರಸಭೆ ಅಧ್ಯಕ್ಷರಾದ ಸಿ.ಎಂ ಆಶಾ ಅವರು ಮಾತನಾಡಿ ಮಹಿಳೆಯರು ಕುಟುಂಬದಲ್ಲಷ್ಟೇ ಅಲ್ಲ. ಎಲ್ಲ ಕ್ಷೇತ್ರಗಳಲ್ಲಿಯೂ ಹೊಣೆಗಾರಿಕೆಯಿಂದ ಸಾಧನೆ ಮಾಡಬಲ್ಲವರಾಗಿದ್ದಾರೆ. ರಾಜಕೀಯ ಕ್ಷೇತ್ರ, ಆಡಳಿತ ಸೇವಾ ಕ್ಷೇತ್ರವೇ ಇರಲಿ, ಇಂದು ಹಲವಾರು ಮಹಿಳೆಯರು ಉನ್ನತ ಸ್ಥಾನದಲ್ಲಿ ಇರುವುದನ್ನು ನೋಡಬಹುದಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದ ಮಹಿಳೆಯರಿಗೆ ಹಕ್ಕುಗಳು ಅವಕಾಶಗಳು ಲಭಿಸಿವೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ ಅವರು ಮಾತನಾಡಿ ಪ್ರತಿ ಮಹಿಳೆ ಸಬಲವಾಗಬೇಕು. ಎಷ್ಟೋ ಮಹಿಳೆಯರು ಶಿಕ್ಷಣದಿಂದ ವಂಚಿತರಾಗಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಯಾವ ಮಹಿಳೆಯು ಕೂಡ ಸಂಕಷ್ಟದಿಂದ ಬಳಲಬಾರದು. ಸಮಾಜದಲ್ಲಿ ಮೇಲೆ ಬರಬೇಕು. ಅಭಿವೃದ್ದಿ ಹೊಂದಬೇಕು. ಉತ್ತಮ ವೇದಿಕೆಗಳಲ್ಲಿ ಅವಕಾಶ ಪಡೆಯುವಂತಾಗಬೇಕು. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಚಾಮರಾಜನಗರ ನಗರಸಭೆಯ ಪ್ರಗತಿ ಪ್ರದೇಶಮಟ್ಟದ ಒಕ್ಕೂಟ ಸಂಘಕ್ಕೆ ೧.೫ ಲಕ್ಷ ರೂ, ಕೊಳ್ಳೇಗಾಲದ ಆದರ್ಶ ನಗರ ಮಟ್ಟದ ಒಕ್ಕೂಟಕ್ಕೆ ೧ ಲಕ್ಷ ರೂ. ಬಹುಮಾನವನ್ನು ಗಣ್ಯರು ವಿತರಿಸಿದರು. ಅತ್ಯುತ್ತಮ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸರಸ್ವತಿ, ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷ್ಮಿ, ಗ್ರಾಮೀಣ ಸಣ್ಣ ಕೈಗಾರಿಕೆ ಉಪನಿರ್ದೇಶಕರಾದ ರಾಜೇಂದ್ರಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಬಸವರಾಜು, ಜಿಲ್ಲಾ ಹಿಂದುಳಿದ ವಗಗಳ ಕಲ್ಯಾಣಾಧಿಕಾರಿ ಬಿಂದ್ಯಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಜಿಲ್ಲಾ ಉದ್ಯೋಗಾಧಿಕಾರಿ ಮಹಮ್ಮದ್ ಅಕ್ಬರ್, ಭೂ ದಾಖಲೆಗಳ ಉಪನಿರ್ದೇಶಕರಾದ ವಿದ್ಯಾಯಿನಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಅನಿತಾ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಬಳಿಕ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮೂರು ದಿನಗಳ ಕಾಲ ನಗರದ ಶ್ರೀ ಚಾಮರಾಜೇಶ್ವರ ದೇವಾಸ್ಥಾನದ ಆವರಣದಲ್ಲಿ ನಡೆಯಲಿರುವ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ತಯಾರಿಸಿದ ವಿವಿಧ ರೀತಿಯ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನಕ್ಕೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡಿದರು. ನಗರಸಭೆ ಅಧ್ಯಕ್ಷರಾದ ಆಶಾ ಅವರು ವಿವಿಧ ಮಳಿಗೆಗಳನ್ನು ಉದ್ಘಾಟಿಸಿದರು.
