ಚಾಮರಾಜನಗರ:ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಸಂಬಂಧ ಅಧಿಕಾರಿಗಳು ಪೂರಕವಾಗಿರುವ ಎಲ್ಲಾ ವಿಷಯಗಳನ್ನು ಮನದಟ್ಟು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಮಾದರಿ ನೀತಿ ಸಂಹಿತೆ ಹಾಗೂ ಚುನಾವಣಾ ವೆಚ್ಚ ತಂಡದ ಅಧಿಕಾರಿಗಳಿಗೆ ಮಂಗಳವಾರ (ಮಾ.೨೧) ಆಯೋಜಿಸಿದ್ದ ತರಬೇತಿ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಚುನಾವಣೆ ಕೆಲಸ ಅತ್ಯಂತ ಹೊಣೆಗಾರಿಕೆಯದ್ದು, ಎಲ್ಲಿಯೂ ಲೋಪವಾಗದಂತೆ ಕರ್ತವ್ಯವನ್ನು ನಿರ್ವಹಿಸಬೇಕಾಗುತ್ತದೆ. ಚುನಾವಣಾ ಆಯೋಗದ ನಿರ್ದೇಶನ ಸೂಚನೆ ಅನುಸಾರ ಕಾರ್ಯ ನಿರ್ವಹಿಸಬೇಕಾಗುತ್ತದೆ. ಹೀಗಾಗಿ ಅಧಿಕಾರಿಗಳು ನಿಯೋಜಿಸಿದ್ದ ಕೆಲಸವನ್ನು ಹಗುರವಾಗಿ ಪರಿಗಣಿಸಬಾರದು ಎಂದರು.
ಸಾರ್ವಜನಿಕ ಸ್ಥಳಗಳಲ್ಲಿಯೇ ಆಗಲಿ ಅಥವಾ ಖಾಸಗಿ ಪ್ರದೇಶಗಳಲ್ಲಿಯೇ ಆಗಲಿ ಅನುಮತಿ ಇಲ್ಲದೆ ಯಾವುದೇ ಪೋಸ್ಟರ್, ಬ್ಯಾನರ್, ಹೋರ್ಡಿಂಗ್ ಗಳನ್ನು ಅಳವಡಿಸುವಂತಿಲ್ಲ. ಪರವಾನಗಿ ಪಡೆಯುವುದು ಕಡ್ಡಾಯವಾಗಲಿದೆ. ಈ ಬಗ್ಗೆ ನಿಗಾ ವಹಿಸಬೇಕು. ಸಂಬಂದಪಟ್ಟ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರಾದ ಡಿ.ಎಸ್. ರಮೇಶ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಹಾಗೂ ಮಾದರಿ ನೀತಿ ಸಂಹಿತೆ ಜಿಲ್ಲಾ ನೋಡಲ್ ಅಧಿಕಾರಿಗಳಾದ ಎಸ್. ಪೂವಿತಾ ಅವರು ಮಾತನಾಡಿ ಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕಾಗಿ ನೇಮಕವಾಗಿರುವ ಎಸ್.ಎಸ್.ಟಿ, ಫ್ಲೈಯಿಂಗ್ ಸ್ಕ್ವಾಡ್, ವೀಡಿಯೋ ಸರ್ವಲೆನ್ಸ್, ವೀಡಿಯೋ ವೀವಿಂಗ್ ತಂಡಗಳು ಅತ್ಯಂತ ಜವಾಬ್ದಾರಿಯುತವಾಗಿ ಕರ್ತವ್ಯ ಕೈಗೊಳ್ಳಬೇಕು. ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬ ಬಗ್ಗೆ ಪೂರ್ಣ ಮಾಹಿತಿ ಹೊಂದಬೇಕು ಎಂದರು.
ಚುನಾವಣಾ ಸಂಬಂಧಿ ಪೋಸ್ಟರ್, ಕರಪತ್ರ ಸೇರಿದಂತೆ ಯಾವುದೇ ಮುದ್ರಿತ ಪ್ರಚಾರ ಸಾಮಗ್ರಿಗಳಲ್ಲಿ ಮುದ್ರಕರು, ಪ್ರಕಾಶಕರ ಹೆಸರು ಕಡ್ಡಾಯವಾಗಿ ಇರಬೇಕು. ಅನುಮತಿ ಸಹ ಪಡೆದುಕೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ಕ್ರಮ ಜರುಗಿಸಬೇಕಾಗುತ್ತದೆ. ಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕಾಗಿ ನಿಯೋಜಿತರಾಗಿರುವ ಇತರೆ ತಂಡಗಳು, ಅಕೌಂಟಿಂಗ್ ತಂಡಗಳು ಪ್ರತಿನಿತ್ಯ ನಿಗದಿತ ನಮೂನೆಯಲ್ಲಿ ವರದಿ ಸಲ್ಲಿಸಬೇಕು ಎಂದು ಜಿ.ಪಂ. ಸಿಇಒ ಎಸ್. ಪೂವಿತಾ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಬಸವರಾಜು, ವಿಧಾನಸಭಾ ಕ್ಷೇತ್ರವಾರು ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು, ಎಸ್.ಎಸ್.ಟಿ, ಫ್ಲೈಯಿಂಗ್ ಸ್ಕ್ವಾಡ್, ವಿಡಿಯೀ ಸರ್ವಲೆನ್ಸ್, ವೀಡಿಯೋ ವೀವಿಂಗ್ ತಂಡದ ಅಧಿಕಾರಿಗಳು ಭಾಗವಹಿಸಿದ್ದರು.