ಚಾಮರಾಜನಗರ:ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ವಸತಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿಂದು ಜಿಲ್ಲೆಯ ಗ್ರಾಮಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ವಸತಿ ಯೋಜನೆಗಳ ಅನುಷ್ಟಾನ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮನೆ ಅಗತ್ಯವಿರುವವರನ್ನು ಗುರುತಿಸಬೇಕು. ಜಿಲ್ಲೆಯ ಎಲ್ಲಾ ೧೩೦ ಗ್ರಾಮಪಂಚಾಯಿತಿ ಹಾಗೂ ನಗರ, ಸ್ಥಳೀಯ ಸಂಸ್ಥೆಗಳಲ್ಲಿನ ವ್ಯಾಪ್ತಿಯಲ್ಲಿ ಅಗತ್ಯವಿರುವವರಿಗೆ ಮನೆಗಳನ್ನು ನಿರ್ಮಿಸಿಕೊಡಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಕಂದಾಯ ಇಲಾಖೆಗಳ ಅಧಿಕಾರಿಗಳು ಅಲ್ಲದೆ ನಗರ, ಸ್ಥಳೀಯ ಸಂಸ್ಥೆಗಳಲ್ಲಿನ ನಗರಸಭೆ ಆಯುಕ್ತರು, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಅರ್ಹ ಫಲಾನುಭವಿಗಳ ಪಟ್ಟಿ ಮಾಡಬೇಕು. ಮುಂದಿನ ೧೫ ದಿನದೊಳಗೆ ಅಗತ್ಯವಿರುವ ಮನೆಗಳ ಪಟ್ಟಿ ತಯಾರಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿರುವ ಬಡವರಿಗೆ ಮನೆಗಳ ನಿರ್ಮಿಸಿಕೊಳ್ಳಲು ನೀಡಲಾಗುವ ಅನುದಾನದ ಮೊತ್ತವನ್ನು ಹೆಚ್ಚಿಸಲು ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಲಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿಯವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಉಪವಿಭಾಗಾಧಿಕಾರಿ, ಎಲ್ಲಾ ತಾಲೂಕುಗಳ ತಹಶೀಲ್ದಾರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಎಲ್ಲರಿಗೂ ಸೂರು ಕಲ್ಪಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಬೇಕು ಎಂದರು.
ಸರ್ಕಾರಿ ಜಾಗಗಳನ್ನು ಗುರುತಿಸಿ ಅರ್ಹರಿಗೆ ನಿವೇಶನ ಹಂಚಿಕೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು ಸೆಸ್ಕ್ ಅಧಿಕಾರಿಗಳು ತೋಟದ ಮನೆಗಳಿಗೆ ವಿದ್ಯುತ್ ಕಡಿತಗೊಳಿಸಬಾರದು. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪ್ರಯಾಣಿಕರಿಗೆ, ವಿದ್ಯಾರ್ಥಿಗಳಿಗೆ ಸಾರಿಗೆ ಬಸ್‌ಗಳ ಕೊರತೆ ನೀಗಿಸಿ ಹೆಚ್ಚುವರಿ ಬಸ್‌ಗಳ ಓಡಾಟಕ್ಕೆ ಕ್ರಮವಹಿಸಬೇಕು. ಈ-ಸ್ವತ್ತು, ವಿಧವಾ ವೇತನ, ಮಾಸಾಶನ ಪಡೆಯಲು ಜನರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ ಸಕಾಲಕ್ಕೆ ಸೌಲಭ್ಯಗಳನ್ನು ಒದಗಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಸೂಚಿಸಿದರು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಆರ್. ನರೇಂದ್ರ, ಸಿ.ಎಸ್. ನಿರಂಜನಕುಮಾರ್, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ದೀಪಾ ಜೆ. ಕಂಟ್ರಾಕ್ಟರ್, ಇತರರು ಸಭೆಯಲ್ಲಿ ಇದ್ದರು.
