ಚಾಮರಾಜನಗರ: ಜಿಲ್ಲೆಯಲ್ಲಿ ಐದು ತಾಲೂಕುಗಳಿಂದ ಒಟ್ಟು ೧೪,೧೪೪ ವಸತಿ ಸೌಲಭ್ಯ ಕೋರಿ ಪ್ರಸ್ತಾವನೆ ಸಿದ್ದವಾಗಿವೆ. ಈ ಸಂಬಂಧ ಶೀಘ್ರ ಮಂಜೂರಾತಿ ಆದೇಶ ಹೊರಡಿಸಲು ಕ್ರಮ ತೆಗೆದು ಕೊಳ್ಳಲಾಗುವುದೆಂದು ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ವಸತಿ ಯೋಜನೆಗಳ ಸಂಬಂಧ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ವಸತಿ ಯೋಜನೆ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ನಿವೇಶನ ಹೊಂದಿದ್ದು ಮನೆ ಇಲ್ಲದವರಿಗೂ ಸೌಕರ್ಯ ಕಲ್ಪಿಸಬೇಕಿದೆ. ವಸತಿ ಯೋಜನೆಯನ್ನು ಅರ್ಹರಿಗೆ ತಲುಪಿಸುವ ಉದ್ದೇಶದಿಂದ ಅನೇಕ ಪಾರದರ್ಶಕ ಸುಧಾರಣೆ ತರಲಾಗಿದೆ. ಅಡಮಾನ ಪ್ರಕ್ರಿಯೆಯನ್ನು ಕೈಬಿಡಲಾಗಿದೆ. ಅರ್ಹರೆಲ್ಲರಿಗೂ ವಸತಿ ಯೋಜನೆ ಸಿಗುವಂತಾಗಲು ಅಧಿಕಾರಿಗಳು ಪರಿಶೀಲಿಸಿ ವಿವರ ಒದಗಿಸಬೇಕು ಎಂದು ಸಚಿವರು ತಿಳಿಸಿದರು.
ಅಧಿಕಾರಿಗಳಲ್ಲಿ ಸೇವಾ ಮನೋಭಾವನೆ ಇರಬೇಕು. ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಗ್ರಾಮಾಂತರ ಪ್ರದೇಶಗಳ ಜನತೆಗೆ ಸಮರ್ಪಕವಾಗಿ ಸೇವೆ ಒದಗಿಸಬೇಕು. ಮೂಲ ಸೌಕರ್ಯಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಜನರನ್ನು ಅಲೆದಾಡಿಸದೇ ಸಮಸ್ಯೆಗಳನ್ನು ಪರಿಹರಿಸಬೇಕು. ಗ್ರಾಮಗಳ ವಿದ್ಯುತ್ ದೀಪ, ಕುಡಿಯುವ ನೀರು, ಸ್ವಚ್ಚತೆಗೆ ಒತ್ತು ನೀಡಬೇಕು ಎಂದರು.
ಯೋಜನೆಗಳನ್ನು ಅನುಷ್ಠಾನ ಮಾಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಇವುಗಳನ್ನು ಪಾರದರ್ಶಕವಾಗಿ ನಿರ್ವಹಿಸಿ. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ತಾರತಮ್ಯ ಮಾಡದೇ ಅರ್ಹರಿಗೆ ಯೋಜನೆ ಪ್ರಯೋಜನ ಸಿಗಬೇಕು. ಬಡವರಿಗೆ ಅನುಕೂಲವಾಗುವ ಕೆಲಸವನ್ನು ಮಾಡಬೇಕೆಂದು ಸಚಿವರು ಸೂಚಿಸಿದರು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಗ್ರಾಮ ಸಭೆಗಳಲ್ಲಿ ಫಲಾನುಭವಿಗಳ ಆಯ್ಕೆ ಮಾಡಬೇಕು. ತಳಮಟ್ಟದಲ್ಲಿ ಸುಧಾರಣೆಯಾದರೆ ಅರ್ಹರಿಗೆ ಸವಲತ್ತು ತಲುಪಲಿದೆ. ಹೀಗಾಗಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಿ ಎಂದರು.
ಶಾಸಕರಾದ ಆರ್. ನರೇಂದ್ರ ಅವರು ಮಾತನಾಡಿ ಉದ್ಯೋಗ ಖಾತರಿ ಯೋಜನೆಯಡಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿಯೂ ಒಂದೇ ರೀತಿಯ ಸಾಧನೆಯಾಗುತ್ತಿಲ್ಲ. ಕೆಲವೆಡೆ ಉತ್ತಮ ಪ್ರಗತಿ ಇದ್ದರೆ ಇತರೆಡೆ ಪ್ರಗತಿ ಕುಂಠಿತವಾಗಿರುವುದನ್ನ ಕಾಣುತ್ತಿದ್ದೇವೆ. ಇಚ್ಚಾಶಕ್ತಿಯಿಂದ ಕೆಲಸ ಮಾಡಬೇಕು. ಇದರಿಂದ ಬಡವರಿಗೆ ಅನುಕೂಲವಾಗಲಿದೆ ಎಂದರು.
ಶಾಸಕರಾದ ಎನ್. ಮಹೇಶ್ ಅವರು ಮಾತನಾಡಿ ಸಂಕಷ್ಟದಲ್ಲಿರುವ ಬಡವರಿಗೆ ಸ್ಪಂದಿಸಬೇಕು. ಪ್ರವಾಹದಿಂದ ಹಾನಿಯಾಗಿರುವ ರಸ್ತೆಗಳ ಗುಂಡಿ ಮುಚ್ಚಬೇಕು. ನಗರೋತ್ಥಾನ ೪ನೇ ಹಂತದ ಕಾಮಗಾರಿ ಶೀಘ್ರವೇ ಆರಂಭಿಸಬೇಕು. ರಸ್ತೆ ಸಂಚಾರಕ್ಕೆ ಅಡಚಣೆಯಾಗುತ್ತಿರುವ ರಸ್ತೆ ಬದಿಯ ಜಾಲಿ ಗಿಡಗಂಟಿಗಳನ್ನು ತೆರವು ಮಾಡಬೇಕು ಎಂದು ತಿಳಿಸಿದರು.
ಶಾಸಕರಾದ ಸಿ.ಎಸ್. ನಿರಂಜನ್ ಕುಮಾರ್ ಅವರು ಮಾತನಾಡಿ ಗ್ರಾಮ ಪಂಚಾಯಿತಿಗಳಲ್ಲಿ ಇಸ್ವತ್ತಿನ ಬಗ್ಗೆ ಹೆಚ್ಚು ದೂರುಗಳು ಬರುತ್ತಿವೆ. ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ನಿವಾರಿಸಿ ಜನರಿಗೆ ಕೆಲಸ ಮಾಡಿಕೊಡಬೇಕು. ಮೂಲ ಸೌಕರ್ಯ ಒದಗಿಸುವಲ್ಲಿ ಮುಂಚೂಣಿಯಲ್ಲಿರಬೇಕು. ಸಚ್ಚತೆಗೆ ಪ್ರಮುಖ ಗಮನ ನೀಡಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಪ್ರತಿಕ್ರಿಯಿಸಿ ಶಾಸಕರು ಪ್ರಸ್ತಾಪಿಸಿರುವ ಎಲ್ಲಾ ಸಮಸ್ಯೆಗಳಿಗೆ ಕೂಡಲೇ ಅಧಿಕಾರಿಗಳು ಮುತುವರ್ಜಿ ವಹಿಸಿ ಸೂಕ್ತ ಕ್ರಮಗಳಿಗೆ ಮುಂದಾಗಬೇಕು. ಯಾವುದೇ ನಿರ್ಲಕ್ಷ್ಯ ವಹಿಸಬಾರದು ಎಂದು ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಸಭೆಯಲ್ಲಿ ಇದ್ದರು.