ಚಾಮರಾಜನಗರ, ನವೆಂಬರ್ ೨೬ (ಕರ್ನಾಟಕ ವಾರ್ತೆ):- ದೇಶದಲ್ಲಿ ಎಲ್ಲಾ ವರ್ಗದವರಿಗೂ ಸಂವಿಧಾನದಲ್ಲಿ ಸಮಾನ ಅವಕಾಶಗಳನ್ನು ಕಲ್ಪಿಸಲಾಗಿದ್ದು, ಈ ಅವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಂದು ನೆಹರು ಯುವ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ರಂಗವಾಹಿನಿ ಸಂಸ್ಥೆ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.
ಸಂವಿಧಾನದ ಅರಿವು ಪ್ರತಿಯೊಬ್ಬರಿಗೂ ಅವಶ್ಯವಾಗಿದೆ. ಸಂವಿಧಾನದಲ್ಲಿ ಎಲ್ಲಾ ಸಮುದಾಯಗಳಿಗೂ ಸಂವಿಧಾನದಲ್ಲಿ ಸಮಾನ ಅವಕಾಶಗಳನ್ನು ಕಲ್ಪಿಸಲಾಗಿದೆ. ಸಂವಿಧಾನದಡಿ ಸರ್ಕಾರಗಳು ಹಲವು ಸೌಲಭ್ಯ, ಸವಲತ್ತುಗಳನ್ನು ನೀಡುತ್ತಿವೆ ಎಂದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿಶ್ರಮದಿಂದ ಸಂವಿಧಾನ ರಚನೆಯಾಗಿದೆ.
ಅಂಬೇಡ್ಕರ್ ಅವರು ಸಂವಿಧಾನ ರಚನೆಯ ಕರಡು ಸಮಿತಿ ಅಧ್ಯಕ್ಷರಾಗಿ ಸಂವಿಧಾನ ರಚನೆಯ ಮುಂದಾಳತ್ವ ವಹಿಸಿದ್ದರು. ೧೯೪೯ರ ನವೆಂಬರ್ ೨೬ರಂದು ಸಂವಿಧಾನವನ್ನು ದೇಶವು ಅಂಗೀಕರಿಸಿದ್ದು, ೧೯೫೦ ಜನವರಿ ೨೬ರಂದು ಜಾರಿಗೊಂಡಿತು ಎಂದರು ತಿಳಿಸಿದರು.
ಭಾರತಕ್ಕೆ ಉತ್ತಮ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರು ಸ್ಮರಿಸಬೇಕು. ಸಂವಿಧಾನದ ಜಾಗೃತಿ ಎಲ್ಲರಿಗೂ ಅಗತ್ಯವಾಗಿದೆ. ಸಂವಿಧಾನದಲ್ಲಿ ನೀಡಿರುವ ಹಕ್ಕುಗಳನ್ನು ಸದುಪಯೋಗ ಮಾಡಿಕೊಳ್ಳುವುದರ ಜೊತೆಗೆ ಕರ್ತವ್ಯಗಳನ್ನು ಸರಿಯಾಗಿ ಪಾಲಿಸಲೇಬೇಕು ಎಂದು ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು. ಇದೇ ವೇಳೆ ಗಣ್ಯರು ಕಾಲೀಜಿನ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿದಿ ಬೋಧಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ಪಿ. ದೇವರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮೈಸೂರು ಮಹಾರಾಜ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ವಿ. ಷಣ್ಮುಗಂ, ರಂಗವಾಹಿನಿ ಸಂಸ್ಥೆಯ ಅಧ್ಯಕ್ಷರಾದ ಸಿ.ಎಂ. ನರಸಿಂಹಮೂರ್ತಿ, ಇತರರು ಕಾರ್ಯಕ್ರಮದಲ್ಲಿ ಇದ್ದರು.