ಚಾಮರಾಜನಗರ: ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಜನವರಿ ೪ ಮತ್ತು ೫ರಂದು ನಡೆಸಲು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡದಿರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ ೪ ಹಾಗೂ ೫ರಂದು ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪೂರ್ವಭಾವಿಯಾಗಿ ಕೈಗೊಳ್ಳಬೇಕಿರುವ ಕ್ರಮಗಳಿಗೆ ಅಧಿಕಾರಿಗಳು ಈಗಿನಿಂದಲೇ ಸಿದ್ದತೆ ಮಾಡಿಕೊಳ್ಳಬೇಕೆಂದು ತಿಳಿಸಿದರು.
ಕ್ರೀಡಾಕೂಟಕ್ಕೆ ತೀರ್ಪುಗಾರರನ್ನು ಆಯ್ಕೆಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಾಂಸ್ಕೃತಿಕ ಕಾರ್ಯಕ್ರಮ ಸ್ಪರ್ಧೆಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ತೀರ್ಪಗಾರರನ್ನು ಆಯ್ಕೆ ಮಾಡಲು ಕ್ರಮ ತೆಗೆದುಕೊಳ್ಳಬೇಕು. ಸ್ವಚ್ಚತಾ ಕಾರ್ಯಗಳಿಗೆ ನಗರಸಭೆ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸೂಚಿಸಿದರು.
ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ಕುಡಿಯುವ ನೀರಿನ ವ್ಯವಸ್ಥೆ, ಇತರೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಅಗತ್ಯ ಔಷದೋಪಚಾರದೊಂದಿಗೆ ವೈದ್ಯರನ್ನು ನಿಯೋಜಿಸಬೇಕು. ಕ್ರೀಡಾಕೂಟ ಯಶಸ್ವಿಗೆ ಎಲ್ಲಾ ಕಾರ್ಯಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನಿರ್ವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ಅವರು ಮಾತನಾಡಿ ಎರಡು ದಿನಗಳ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಎಲ್ಲಾ ಇಲಾಖೆಗಳ ಅಧಿಕಾರಿ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಬೇಕು. ಆಯೋಜನೆಗೆ ಎಲ್ಲಾ ರೀತಿಯ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಧರಣೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್. ಅನಿತಾ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಗೌರವ ಅಧ್ಯಕ್ಷರಾದ ಶಿವಮೂರ್ತಿ, ಖಜಾಂಚಿ ಮಹದೇವಯ್ಯ, ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ್, ಕ್ರೀಡಾ ಕಾರ್ಯದರ್ಶಿ ಆ.ಪು. ಮಹದೇವ್, ತಾಲೂಕು ಅಧ್ಯಕ್ಷರಾದ ಮಂಜುನಾಥ್, ಅಂಕಪ್ಪ, ಅಲೆಕ್ಸಾಂಡರ್, ಪೊಲೀಸ್ ವೃತ್ತ ನಿರೀಕ್ಷಕರಾದ ರಂಗಸ್ವಾಮಿ, ಇತರೆ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿರಿದ್ದರು.
