• ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನಸೇವಕ ಕಾರ್ಯಕ್ರಮದಲ್ಲಿ ಸಚಿವರ ವಿಶ್ವಾಸ
• ಗ್ರಾಮ ಪಂಚಾಯಿತಿ ಗೆಲುವಿನಲ್ಲಿ ಪ್ರಧಾನಿಗಳಾದ ಮೋದಿ, ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಶ್ರಮವಿದೆ; ಸಚಿವ ಸೋಮಶೇಖರ್
ಬೆಂಗಳೂರು: ಬೆಂಗಳೂರು ಹಾಗೂ ಸುತ್ತಮುತ್ತಲಿನಲ್ಲಿ ಬರುವ 28ಕ್ಕೆ 28 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಮಲ ಅರಳುವಂತೆ ಮಾಡುತ್ತೇವೆ. ಎಲ್ಲ ಕಡೆಯೂ ಬಿಜೆಪಿ ಶಾಸಕರೇ ಆಯ್ಕೆಯಾಗಲಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಜನಸೇವಕ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮುಖ್ಯಮಂತ್ರಿಗಳು ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಕಡೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಕೊಟ್ಟಿದ್ದಾರೆ. ಅದರಲ್ಲೂ ವಿಶೇಷವಾಗಿ ಬೆಂಗಳೂರಿನ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದಾರೆ. ಫ್ಲೈಓವರ್, ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳು ನಡೆಯುತ್ತಿವೆ ಎಂದು ತಿಳಿಸಿದರು.
ಬೆಂಗಳೂರು ಹಾಗೂ ಸುತ್ತಮುತ್ತಲ ವಿಧಾನಸಭಾ ಕ್ಷೇತ್ರಗಳಲ್ಲಿ ಚಾಲನೆ ಕೊಟ್ಟಿರುವ ಮುಖ್ಯಮಂತ್ರಿಗಳು, ಬೆಂಗಳೂರು ಭಾಗದ 28 ವಿಧಾನಸಭಾ ಕ್ಷೇತ್ರಗಳನ್ನೂ ಅಭಿವೃದ್ಧಿ ಮಾಡಲಾಗುತ್ತಿದೆ. ಅಲ್ಲದೆ, 198ರಿಂದ 233 ಕಾರ್ಪೋರೇಶನ್ ಮಾಡುವ ನಿಟ್ಟಿನಲ್ಲಿಯೂ ಪ್ರಯತ್ನಗಳು ನಡೆಯುತ್ತಿವೆ. ಹಾಗಾಗಿ ಬೆಂಗಳೂರು ಹಾಗೂ ಸುತ್ತಮುತ್ತಲಿರುವ 28ಕ್ಕೆ 28 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕಮಲ ಅರಳುವಂತೆ ಮಾಡಿ, ಶಾಸಕರನ್ನು ಆಯ್ಕೆ ಮಾಡಿಸಿಕೊಂಡು ಬರುತ್ತೇವೆ. ಎಲ್ಲ ಕಡೆಯೂ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆಯಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ. ಇದಕ್ಕೆ ಪ್ರತಿಯೊಬ್ಬ ಕಾರ್ಯಕರ್ತ ಹಾಗೂ ನಾಯಕರೂ ದುಡಿಯುತ್ತೇವೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.
ಗ್ರಾಮ ಪಂಚಾಯಿತಿ ಚುನಾವಣೆಗೆ ಹೆಚ್ಚಿನ ಒತ್ತು ಕೊಡುವ ಮೂಲಕ ಬಿಜೆಪಿ ಬೆಂಬಲಿತರಿಗೆ ಬಲ ತುಂಬುವ ಕೆಲಸವನ್ನು ಮಾಡಲಾಯಿತು. ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಇಂದು ಬಿಜೆಪಿ ಅಭೂತಪೂರ್ವ ಸಾಧನೆ ಮಾಡಿದೆ. ಅವರ ಜನಪರ ಯೋಜನೆಗಳು ಹಾಗೂ ಸಂಘಟನೆಯಿಂದ ಈ ಗೆಲುವು ಸಾಧ್ಯವಾಗಿದೆ ಎಂದು ಸಚಿವರಾದ ಎಸ್ ಟಿ ಎಸ್ ಹೇಳಿದರು.