ಚಾಮರಾಜನಗರ: ಸರ್ವರಿಗೂ ನ್ಯಾಯ ಎಂಬ ಪರಿಕಲ್ಪನೆಯಡಿಯಲ್ಲಿ ಶೀಘ್ರ ಹಾಗೂ ತ್ವರಿತವಾಗಿ ಪ್ರಕರಣವನ್ನು ಇತ್ಯರ್ಥ ಪಡಿಸುವ ಉದ್ದೇಶದೊಂದಿಗೆ ಕಳೆದ ಜೂನ್ ೨೭ರ ಶನಿವಾರದಂದು ನಡೆದ ಮೆಗಾ ಲೋಕ್ ಅದಾಲತ್‌ನಲ್ಲಿ ಒಟ್ಟು ೮೪೪೧ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.
ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ವ್ಯಾಜ್ಯ ಪೂರ್ವ ಪರಿಹಾರ ಕೇಂದ್ರದಲ್ಲಿಂದು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರದಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಈ ವಿಷಯ ತಿಳಿಸಿದರು.
ಮೆಗಾ ಲೋಕ್ ಅದಾಲತ್‌ನಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿದ್ದ ೨೦೪೫ ಪ್ರಕರಣಗಳು ಇತ್ಯರ್ಥವಾಗಿವೆ. ಈ ಪೈಕಿ ೧೬೦ ಸಿವಿಲ್ ಪ್ರಕರಣಗಳು, ೧೮೮೫ ಕ್ರಿಮಿನಲ್ ಪ್ರಕರಣಗಳಾಗಿವೆ. ಅಲ್ಲದೇ ೬೩೯೬ ವ್ಯಾಜ್ಯ ಪೂರ್ವ ಪ್ರಕರಣಗಳು ಸಹ ಇತ್ಯರ್ಥಪಡಿಸಲಾಗಿದೆ. ಲೋಕ್ ಅದಾಲತ್ ನಲ್ಲಿ ಹೆಚ್ಚಿನ ಪ್ರಕರಣಗಳು ವಿಲೇವಾರಿಯಾಗಿರುವುದರಿಂದ ಜನಸಾಮಾನ್ಯರಿಗೆ ಅನುಕೂಲವಾಗಿದೆ. ಅಲ್ಲದೇ ನ್ಯಾಯಾಲಯಗಳ ಮೇಲಿನ ಪ್ರಕರಣದ ಹೊರೆ ತಗ್ಗಿದೆ ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿತ್ತು. ಈ ಅದಾಲತ್ ನಲ್ಲಿ ರಾಜಿ ಯೋಗ್ಯ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ, ಉದ್ಯೋಗ ಪುನರ್ ಸ್ಥಾಪನೆ, ಕೈಗಾರಿಕೆ, ಕಾರ್ಮಿಕ ವೇತನ, ಗ್ರಾಹಕರ ವೇದಿಕೆ, ರಿಯಲ್ ಎಸ್ಟೇಟ್, ಸಾಲ ವಸೂಲಾತಿ, ಚೆಕ್ ಅಮಾನ್ಯ ಪ್ರಕರಣಗಳನ್ನು ಬಗೆಹರಿಸುವ ಉದ್ದೇಶ ಹೊಂದಲಾಗಿತ್ತು.
ಮೋಟಾರ್ ಅಪಘಾತ ಪರಿಹಾರ, ವಿದ್ಯುತ್, ನೀರಿನ ಶುಲ್ಕ, ಭೂ ಸ್ವಾಧೀನ, ವೇತನ ಭತ್ಯೆ, ಪಿಂಚಣಿ, ಸಾರ್ವಜನಿಕ ಉಪಯುಕ್ತತೆ ಸೇವೆಗಳು, ರಾಜೀ ಯೋಗ್ಯ, ಸಿವಿಲ್ ಮತ್ತು ಇತರೆ ಪ್ರಕರಣಗಳು, ವಿವಾಹ ವಿಚ್ಚೇದನ ಹೊರತುಪಡಿಸಿದ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಮೆಗಾ ಲೋಕ್ ಅದಾಲತ್ ನಡೆಸಲಾಯಿತು.
ಒಟ್ಟಾರೆ ೮೪೪೧ ಪ್ರಕರಣಗಳಲ್ಲಿ ಒಟ್ಟು ೭,೦೦,೮೬,೧೩೪ ರೂ. ಗಳಿಗೆ ಸಂಬಂಧಿಸಿದಂತೆ ಮೆಗಾ ಲೋಕ್ ಅದಾಲತ್‌ನಲ್ಲಿ ತೀರ್ಮಾನವಾಗಿದೆ. ಲೋಕ್ ಅದಾಲತ್ ಯಶಸ್ಸಿಗೆ ಕಾರಣರಾದ ಜಿಲ್ಲೆಯ ಎಲ್ಲಾ ನ್ಯಾಯಾಧೀಶರು, ವಕೀಲರು, ನ್ಯಾಯಾಲಯದ ಸಿಬ್ಬಂದಿ ಅಧಿಕಾರಿಗಳಿಗೆ, ಇತರ ಎಲ್ಲರಿಗೆ ಪ್ರಾಧಿಕಾರದ ವತಿಯಿಂದ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
