ಚಾಮರಾಜನಗರ: ಇದೇ ತಿಂಗಳ ೨೨ ರಿಂದ ಮೇ ೧೮ರವರೆಗೆ ನಡೆಯಲಿರುವ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳನ್ನು ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಪಾರದರ್ಶಕತೆಯಿಂದ ನಡೆಸಲು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ೨೦೨೧-೨೨ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮುಖ್ಯ ಹಂತದ ಪರೀಕ್ಷೆಯಾಗಿದೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಅನುಕೂಲವಾಗುವಂತೆ ಎಲ್ಲಾ ಅವಶ್ಯ ಸಿದ್ದತಾ ಕಾರ್ಯಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಬೇಕು. ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಅದೇ ಮಾದರಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿಯೂ ಸಹ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಏಪ್ರಿಲ್ ೨೨ರಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯು ಚಾಮರಾಜನಗರ ತಾಲೂಕಿನ ೪, ಗುಂಡ್ಲುಪೇಟೆಯ ೩, ಯಳಂದೂರು ೨, ಕೊಳ್ಳೇಗಾಲ ೫ ಹಾಗೂ ಹನೂರಿನ ೩ ಸೇರಿದಂತೆ ಒಟ್ಟು ೧೭ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ರಾಮಾಪುರ ಹೊರತುಪಡಿಸಿ ಉಳಿದಂತೆ ಎಲ್ಲಾ ಪರೀಕ್ಷಾ ಕೇಂದ್ರಗಳು ತಾಲೂಕು ಕೇಂದ್ರಗಳಲ್ಲಿ ಇವೆ. ಜಿಲ್ಲೆಯಲ್ಲಿ ೩೩೭೮ ವಿದ್ಯಾರ್ಥಿಗಳು, ೩೬೨೩ ವಿದ್ಯಾರ್ಥಿನಿಯರು ಮತ್ತು ಖಾಸಗಿ ಅಭ್ಯರ್ಥಿಗಳು ಹಾಗೂ ಪುನರಾವರ್ತಿತ ೯೬೪ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ೭೯೬೫ ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಯಿಂದ ಯಾವುದೇ ವಿದ್ಯಾರ್ಥಿಗಳು ವಂಚಿತರಾಗದಂತೆ ಗಮನಹರಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕಾರ್ಯಗಳಿಗೆ ನಿಯೋಜಿತರಾದ ಉಪನ್ಯಾಸಕರು ಹಾಗೂ ಅಧಿಕಾರಿಗಳಿಗೆ ಪರೀಕ್ಷಾ ಕೇಂದ್ರದೊಳಗಡೆ ಮೊಬೈಲ್, ಕ್ಯಾಲೂಕೇಟರ್ ಹಾಗೂ ಎಲೆಕ್ಟ್ರಾನಿಕ್ ಕೈಗಡಿಯಾರ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳ ಬಳಕೆ ನಿಷಿದ್ಧವಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು ಸೇರಿದಂತೆ ಅವಶ್ಯ ಸೌಲಭ್ಯಗಳಿಗೆ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರದಲ್ಲಿರುವ ಶೌಚಾಲಯಗಳು ಸ್ವಚ್ಚತೆಯಿಂದ ಕೂಡಿರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕಾರ್ಯವನ್ನು ನಿಯೋಜಿತ ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಆರೋಗ್ಯದ ಹಿತದೃಷ್ಠಿಯಿಂದ ಪರೀಕ್ಷಾ ಕೇಂದ್ರಗಳಿಗೆ ಆಶಾ ಕಾರ್ಯಕರ್ತೆ ಹಾಗೂ ಪ್ಯಾರಾ ಮೆಡಿಕಲ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು. ನಿಯೋಜಿತವಾಗಿರುವ ಮಾರ್ಗಾಧಿಕಾರಿಗಳು ಹಾಗೂ ನೋಡೆಲ್ ಅಧಿಕಾರಿಗಳು ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಅಕ್ರಮಗಳು ನಡೆಯದಮತೆ ಎಚ್ಚರ ವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ ಅವರು ಅಧಿಕಾರಿಗಳಿಗೆ ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ನಾಗಮಲ್ಲೇಶ್, ತಹಶೀಲ್ದಾರ್‌ರಾದ ಚಿದಾನಂದ ಗುರುಸ್ವಾಮಿ, ಜಯಪ್ರಕಾಶ್, ಮಂಜುಳ, ನಾಗರಾಜು, ಆನಂದ ಬಾಳಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕೆ.ಎಂ.ವಿಶ್ವೇಶ್ವರಯ್ಯ, ಜಿಲ್ಲಾ ಖಜಾನೆ ಉಪನಿರ್ದೇಶಕರಾದ ಸುಲೋಚನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷ್ಮೀ, ಎಲ್ಲಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.