ಚಾಮರಾಜನಗರ: ಉತ್ತಮ ಪರಿಸರ ನಿರ್ಮಾಣ ಮಾಡಲು ವಿದ್ಯಾರ್ಥಿಗಳು ಬಾಲ್ಯದಿಂದಲೇ ದೃಢಸಂಕಲ್ಪ ಮಾಡಿ, ಪರಿಸರ ಸಂರಕ್ಷಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ ಅವರು ಸಲಹೆ ಮಾಡಿದರು.
ನಗರದ ವಾಲ್ಮೀಕಿ ಭವನದಲ್ಲಿಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪರಿಸರ ಕುರಿತು ಚಿತ್ರ ಬರೆಯುವ ಸ್ಪರ್ಧೆ ಕಾರ್ಯಕ್ರಮ ಉದ್ಟಾಟಿಸಿ ಅವರು ಮಾತನಾಡಿದರು.
ಪರಿಸರವನ್ನು ಕಾಪಾಡಲು ಪ್ರತಿಯೊಬ್ಬರು ಶ್ರಮಿಸಬೇಕು, ನೆರೆಹೊರೆಯವರಿಗೆ ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕು, ಮಾನವ ಅಭಿವೃದ್ದಿ ಹೆಸರಿನಲ್ಲಿ ಪರಿಸರದ ಮೇಲೆ ದಾಳಿ ಮಾಡುತ್ತಿದ್ದಾನೆ. ಪರಿಸರ ರಕ್ಷಣೆಯನ್ನು ಕಡೆಗಣಿಸುವುದರಿಂದ ಅನೇಕ ಅಪಾಯಗಳನ್ನು ಎದುರಿಸಬೇಕಾಗುತ್ತದೆ. ಈ ಕಾರಣದಿಂದ ಪರಿಸರ ಕಾಪಾಡುವುದು ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ ಎಂದರು.
ಪರಿಸರ ಸಂರಕ್ಷಣೆ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚು ನಡೆಸಬೇಕು. ಮರ ಗಿಡಗಳನ್ನು ಬೆಳೆಸುವುದು, ನಗರಹಸಿರೀಕರಣ ಮೂಲಕ ಪರಿಸರ ಸಂರಕ್ಷಣೆಗೆ ವಿಶೇಷ ಒತ್ತು ನೀಡಬೇಕು. ಮುಂದಿನ ಪೀಳಿಗೆಯ ಭವಿಷ್ಯಕ್ಕೆ ಉತ್ತಮ ಪರಿಸರ ನಿರ್ಮಿಸಬೇಕು. ಮಕ್ಕಳು ಈಗಿನಿಂದಲೇ ಒಂದೊಂದು ಗಿಡವನ್ನು ಮನೆಯಲ್ಲಾಗಲೀ ಅಥವಾ ಶಾಲೆಯಲ್ಲಾಗಲೀ ನೆಟ್ಟು, ಅದನ್ನು ಆರೈಕೆ ಮಾಡಿ, ಪರಿಸರಕ್ಕೆ ಕೊಡುಗೆ ನೀಡಬೇಕು ಎಂದು ನ್ಯಾಯಾಧೀಶರು ತಿಳಿಸಿದರು.
ನೀರು ಮತ್ತು ಪ್ರಾಣಿ ಪಕ್ಷಿ ಸಂಕುಲಗಳ ಸಂರಕ್ಷಣೆಗೂ ಮುಂದಾಗಬೇಕು. ಸ್ವಚ್ಛತೆಗೆ ಗಮನ ನೀಡಬೇಕು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಏರ್ಪಡಿಸಿರುವ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ ಎಂದು ನ್ಯಾಯಾಧೀಶರಾದ ಎಂ. ಶ್ರೀಧರ ಅವರು ತಿಳಿಸಿದರು.
ರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಾ. ಕೃಷ್ಣಪ್ರಸಾದ್ ಅವರು ಪರಿಸರವನ್ನು ಕಾಪಾಡಿಕೊಳ್ಳುವುದರಿಂದ ಉತ್ತಮ ಆರೋಗ್ಯ ಹೊಂದಬಹುದಾಗಿದೆ. ಪರಿಸರದ ಮೇಲಿನ ಕಾಳಜಿ ಎಲ್ಲರಿಗೂ ಬರಬೇಕು ಎಂದರು.
ಜಿಲ್ಲಾ ಪರಿಸರ ಅಧಿಕಾರಿ ಎನ್.ಜಿ. ರಘುರಾಮ್, ಉಪ ಪರಿಸರ ಅಧಿಕಾರಿ ಡಾ. ಎಂ.ಶೃತಿ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
