ಚಾಮರಾಜನಗರ: ದೇಶಕ್ಕೆ ಸ್ವಾತಂತ್ರ್ಯ ಬಂದು ೭೫ ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಹೋರಾಟ ಸ್ಮರಿಸುವ ಅಮೃತ ಭಾರತಿಗೆ ಕನ್ನಡದ ಆರತಿ ಶೀರ್ಷಿಕೆಯಡಿ ಜಿಲ್ಲೆಯಲ್ಲಿ ಜೂನ್ ೨೫ರಂದು ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳುವ ಸಂಬಂಧ ಇಂದು ಪೂರ್ವಭಾವಿ ಸಭೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜನೆ ಸಂಬಂಧ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಮಾತನಾಡಿ ಚಾಮರಾಜನಗರ ಹಾಗೂ ಗುಂಡ್ಲುಪೇಟೆಯಲ್ಲಿ ಜೂನ್ ೨೫ರಂದು ಏಕಕಾಲದಲ್ಲಿ ಅಮೃತ ಭಾರತಿಗೆ ಕನ್ನಡದ ಆರತಿ ವಿಶೇಷ ಕಾರ್ಯಕ್ರಮ ಆಯೋಜಿಸಬೇಕಿದೆ. ಸ್ವಾತಂತ್ರ್ಯ ಚಳವಳಿಗೆ ಕರ್ನಾಟಕದ ಹಾಗೂ ಜಿಲ್ಲೆಯ ಕೊಡುಗೆಯನ್ನು ಸ್ಮರಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದರು.
ಈ ವಿಶೇಷ ಕಾರ್ಯಕ್ರಮದ ಆಯೋಜನೆಗೆ ಉಪ ಸಮಿತಿಗಳನ್ನು ರಚಿಸಿ ವಿವರವಾಗಿ ಚರ್ಚಿಸಲಾಗುತ್ತದೆ. ಕಾರ್ಯಕ್ರಮ ದಂದು ಮೆರವಣಿಗೆ, ಉಪನ್ಯಾಸ, ಚಿತ್ರ ಪ್ರದರ್ಶನ, ಛಾಯಾಚಿತ್ರ ಪ್ರದರ್ಶನ, ಗೀತಗಾಯನ ಸೇರಿದಂತೆ ಸ್ವಾತಂತ್ರ್ಯ ಹೋರಾಟದ ಸ್ಮರಣೆ ಸಂಬಂಧ ಇತರೆ ವಿಭಿನ್ನ ಕಾರ್ಯಕ್ರಮಗಳನ್ನು ಏರ್ಪಡಿಸಬೇಕಿದೆ. ಈ ನಿಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಜವಾಬ್ದಾರಿ ಹೆಚ್ಚಿದೆ ಎಂದು ಹೇಳಿದರು.
ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಎರಡು ಸಮಿತಿಗಳು ಕಾರ್ಯಕ್ರಮ ಆಯೋಜನೆ ಸಂಬಂಧ ಕಾರ್ಯನಿರ್ವಹಿಸಬೇಕಿದೆ. ಎರಡು ಸ್ಥಳಗಳಲ್ಲಿಯೂ ಕಾರ್ಯಕ್ರಮ ನಡೆಯಬೇಕಿದ್ದು ಇದರ ಸಿದ್ದತೆಗೆ ಸೂಕ್ತ ಏರ್ಪಾಡು ಮಾಡಿಕೊಳ್ಳಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಹೆಚ್. ಚನ್ನಪ್ಪ ಅವರು ಮಾತನಾಡಿ ಸ್ವಾತಂತ್ರ್ಯ ಚಳವಳಿಗೆ ಈ ನಾಡು ಹಾಗೂ ನೆಲದ ಹೋರಾಟದ ನೆನಪುಗಳನ್ನು ಜನತೆಗೆ ತಿಳಿಯಪಡಿಸುವ ಹಿನ್ನೆಲೆಯಲ್ಲಿ ಪ್ರಮುಖ ಕಾರ್ಯಕ್ರಮವಾಗಿ ಅಮೃತ ಭಾರತಿಗೆ ಕನ್ನಡದ ಆರತಿ ರೂಪುಗೊಳಿಸಲಾಗಿದೆ ಎಂದರು.
ಚಾಮರಾಜನಗರ ತಹಶೀಲ್ದಾರರಾದ ಐ.ಇ. ಬಸವರಾಜು, ಗುಂಡ್ಲುಪೇಟೆ ತಹಶೀಲ್ದಾರರಾದ ರವಿಶಂಕರ್, ಜಿಲ್ಲಾ ಆಹಾರ ಇಲಾಖೆಯ ಉಪನಿರ್ದೆಶಕರಾದ ಯೋಗಾನಂದ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ನಾಗಮಲ್ಲೇಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ನಂದಾ ಹಣಬರಟ್ಟಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳ, ನಗರಸಭೆ ಆಯುಕ್ತರಾದ ಕರಿಬಸವಯ್ಯ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರೇಮ್ ಕುಮಾರ್, ಶ್ರೀಕಂಠರಾಜೇಅರಸ್, ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
