ಚಾಮರಾಜನಗರ: ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯಿತಿಗಳಲ್ಲಿ ಕುಷ್ಠರೋಗ ನಿರ್ಮೂಲನ ಕುರಿತು ಅರಿವು ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯತ್ರಿ ಅವರು ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಇಂದು ನಡೆದ ರಾಷ್ಟ್ರೀಯ ಸ್ಪರ್ಶ್ ಕುಷ್ಠ ರೋಗ ಅರಿವು ಆಂದೋಲನ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನವರಿ ೩೦ ರಿಂದ ಫೆಬ್ರವರಿ ೧೩ ರವರೆಗೆ ಕುಷ್ಠರೋಗ ವಿರೋಧಿ ಪಾಕ್ಷಿಕ ದಿನವನ್ನು ಜಿಲ್ಲಾದ್ಯಂತ ಆಚರಿಸಲಾಗುತ್ತಿದೆ. ಈ ಅವಧಿಯಲ್ಲಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸುವ ಜಾಥ, ಜಾಗೃತಿ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ನಡೆಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ತಿಳಿಸಿದರು.
ಶಾಲೆಗಳಲ್ಲಿಯೂ ಮಕ್ಕಳಿಗೆ ರೋಗದ ಬಗ್ಗೆ ಅರಿವು ಮೂಡಿಸಬೇಕು. ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಬೇಕು. ಕುಷ್ಠ ರೋಗಿಗಳಿಗೆ ಸೆಲ್ಫ್ ಕೇರ್ ಕಿಟ್ ಹಾಗೂ ಸೂಕ್ತ್ತ ಅನುಕೂಲವಾದ ಪಾದರಕ್ಷೆಗಳನ್ನು ನೀಡಬೇಕು ಎಂದರು.
ಇದೇ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಾದ ಕೆ.ಎಂ. ಗಾಯತ್ರಿ ಅವರು ಸ್ಪರ್ಶ್ ಕುಷ್ಠ ರೋಗ ಅರಿವು ಆಂದೋಲನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಜಿಲ್ಲಾ ಕುಷ್ಠ ರೋಗ ನಿರ್ಮೂಲನಾಧಿಕಾರಿ ಡಾ. ಚಂದ್ರಶೇಖರ್ ಅವರು ಮಾತನಾಡಿ ೨೦೨೧-೨೨ನೇ ಸಾಲಿನಲ್ಲಿ ಡಿಸೆಂಬರ್‌ವರೆಗೆ ೨೪ ಹೊಸ ರೋಗಿಗಳು ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇವರಿಗೆ ಎಂ.ಡಿ.ಟಿ. ಬಹುಔಷಧ ಚಿಕಿತ್ಸೆ ನೀಡಲಾಗುತ್ತಿದೆ. ೨೦ ರೋಗಿಗಳು ಗುಣಮುಖರಾಗಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಒಟ್ಟು ೨೩೦ ಎಂ.ಸಿ.ಆರ್ ಪಾದರಕ್ಷೆ, ೩೮ ಸೆಲ್ಫ್ ಕೇರ್ ಕಿಟ್ ಗಳನ್ನು ವಿತರಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ೭ ವಿಕಲಚೇತನ ರೋಗಿಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಕುಷ್ಠರೋಗದಿಂದ ಗುಣಮುಖರಾದ ಐವರಿಗೆ ಗ್ರೂಪ್ ಡಿ ಹುದ್ದೆ ದೊರಕಿದೆ. ೧೩ ಕುಷ್ಠ ರೋಗಿಗಳಗೆ ವಸತಿ ಯೋಜನೆಯ ಸೌಲಭ್ಯ ಒದಗಿಸಲಾಗಿದೆ ಎಂದು ಡಾ. ಚಂದ್ರಶೇಖರ್ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷ್ಮಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಭಾಗೀರಥಿ, ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.