ಮಂಡ್ಯ: ಜಿಲ್ಲೆಯಲ್ಲಿ ಕೃಷಿಗೆ ಪೂರಕವಾಗಿ ಬೇಕಾಗುವಂತಹ ಬಿತ್ತನೆ ಬೀಜ, ರಸಗೊಬ್ಬರಗಳ ಕೊರತೆಯಾಗದಂತೆ ಕ್ರಮವಹಿಸಲು ಕೃಷಿ ಸಚಿವ ಬಿ.ಸಿ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಲಭ್ಯತೆ ಹಾಗೂ ಪೂರ್ವ ಸಿದ್ಧತೆ ಕುರಿತು ಜಿಲ್ಲೆಯ ಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಹಾಗೂ ಕೃಷಿ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಸಗೊಬ್ಬರ ಸಂಬಂಧ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕ್ರಮವಹಿಸಲಾಗುವುದು ಎಂದರು.
ಈ ಸಂಬಂಧ ಅಧಿಕಾರಿಗಳು ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಅವರ ಪರವಾನಗಿ ರದ್ದು ಮಾಡಿ ಕೇಸ್ ದಾಖಲಿಸಿ ಎಂದರು. ಗ್ರಾಮಗಳಲ್ಲಿ ಕೃಷಿ ಯಂತ್ರೊಪಕರಣ ಬ್ಯಾಂಕ್ ಮಾಡಿ 20 ಕುಟುಂಬಕ್ಕೆ ಸಹಾಯಕವಾಗುವಂತೆ, ಟ್ರ್ಯಾಕ್ಟರ್ ಹಾಗೂ ಕೃಷಿ ಸಾಮಾಗ್ರಿಗಳನ್ನು ನೀಡಲಾಗುತ್ತಿದ್ದು ಈ ಸಂಬಂಧ ಜಿಲ್ಲೆಯಲ್ಲಿ 5 ಕುಟುಂಬಗಳಿಗೆ ಈ ಯೋಜನೆ ತಲುಪಿದೆ ಎಂದು ತಿಳಿಸಿದರು. ನನ್ನ ಬೆಳೆ ನನ್ನ ಹಕ್ಕು ಘೋಷವಾಕ್ಯದೊಂದಿಗೆ ಬೆಳೆ ಸಮೀಕ್ಷೆ ನಡೆಯುತ್ತಿದೆ ಹಾಗೂ ಕಿಸಾನ್ ಸಮ್ಮಾನ್ ಯೋಜನೆ ಉತ್ತಮ ರೀತಿಯಲ್ಲಿ ಕೃಷಿ ಚಟುವಟಿಕೆಗೆ ಪೂರಕವಾಗುತ್ತಿದೆ. ಕೃಷಿಯಂತ್ರಧಾರೆ ಸಂಬಂಧಿಸಿದಂತೆ ಚಾಲ್ತಿಯಲ್ಲಿರುವ ಸಂಸ್ಥೆಗಳಿಗೆ ಅವಕಾಶ ಕೊಡಿ, ಕೆಲಸ ನಿರ್ವಹಿಸದ ಸಂಸ್ಥೆಗಳನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಿ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣ ಗೌಡ, ಶಾಸಕರಾದ ಡಿ.ಸಿ ತಮ್ಮಣ್ಣ, ಎಂ ಶ್ರೀನಿವಾಸ್,ಕೆ.ಅನ್ನದಾನಿ, ಸುರೇಶ್ ಗೌಡ, ವಿಧಾನಪರಿಷತ್ ಸದಸ್ಯರಾದ ಕೆ.ಟಿ ಶ್ರೀಕಂಠೇಗೌಡ, ಅಪ್ಪಾಜಿಗೌಡ, ಜಿಲ್ಲಾಧಿಕಾರಿ ಎಸ್.ಅಶ್ವಥಿ, ಸಿಇಒ ದಿವ್ಯಾಪ್ರಭು ಮತ್ತಿತರರು ಸಭೆಯಲ್ಲಿದ್ದರು.