ಚಾಮರಾಜನಗರ: ಕೋವಿಡ್ ಲಸಿಕೆ ನೀಡುವ ಕಾರ್ಯವನ್ನು ಇನ್ನು ಒಂದು ವಾರದೊಳಗೆ ಸಮರೋಪಾದಿಯಲ್ಲಿ ಕೈಗೊಂಡು ಉತ್ತಮ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಅಧಿಕಾರಿಗಳೊಂದಿಗೆ ನಡೆದ ಕೋವಿಡ್ ಲಸಿಕಾಕರಣ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್ ಲಸಿಕಾಕರಣದಲ್ಲಿ ಇನ್ನೂ ಪೂರ್ಣಪ್ರಮಾಣದ ಪ್ರಗತಿಗೆ ಬಾಕಿ ಇರುವ ಹೋಬಳಿಯ ಗ್ರಾಮಗಳನ್ನು ಈಗಾಗಲೇ ಪಟ್ಟಿ ಮಾಡಲಾಗಿದೆ. ಸಂಬಂಧಿಸಿದ ನೋಡಲ್ ಅಧಿಕಾರಿಗಳು ಆಯಾ ವ್ಯಾಪ್ತಿಯಲ್ಲಿ ತ್ವರಿತವಾಗಿ ಲಸಿಕೆ ನೀಡುವ ಕಾರ್ಯವನ್ನು ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಹೆಚ್ಚಿನ ಪ್ರಗತಿಯಾಗಬೇಕಿರುವ ಹೋಬಳಿಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳು ತಾಲೂಕು ಮುಖ್ಯ ಅಧಿಕಾರಿಗಳು ಭೇಟಿ ನೀಡಿ ಲಸಿಕಾಕರಣಕ್ಕೆ ವೇಗ ನೀಡಬೇಕು. ವಿಶೇಷ ಆಂದೋಲನ ಮಾದರಿಯಲ್ಲಿ ಲಸಿಕೆ ನೀಡುವ ಕಾರ್ಯವನ್ನು ಕೈಗೆತ್ತಿಕೊಂಡು ನಿಗದಿತ ಗುರಿ ತಲುಪಬೇಕು ಎಂದರು.
ಪ್ರತಿದಿನ ಲಸಿಕೆ ನೀಡಲು ನಿರ್ದಿಷ್ಟ ಗುರಿಯನ್ನು ಹಾಕಿಕೊಳ್ಳಬೇಕು. ತಾಲೂಕು, ಗ್ರಾಮ ವ್ಯಾಪ್ತಿಯ ಟಾಸ್ಕ್ ಪೋರ್ಸ್, ಇನ್ನಿತರರ ಸಹಕಾರ ಪಡೆದು ಲಸಿಕೆಯ ಮಹತ್ವದ ಬಗ್ಗೆ ತಿಳಿವಳಿಕೆ ಮೂಡಿಸಬೇಕು. ಜನರು ಲಸಿಕೆ ಪಡೆಯಲು ಉತ್ತೇಜಿಸಬೇಕು. ಈ ಪ್ರಮುಖ ಕಾರ್ಯದ ಬಗ್ಗೆ ಅಧಿಕಾರಿಗಳು ಹೆಚ್ಚು ಗಮನಹರಿಸಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.
೧೫ ರಿಂದ ೧೮ ವಯೋಮಾನದ ಮಕ್ಕಳಿಗೂ ಲಸಿಕೆ ನೀಡುವ ಕಾರ್ಯ ಮುಂದುವರೆಯಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಮುಂಚೂಣಿ ಕಾರ್ಯಕರ್ತರ ವ್ಯಾಪ್ತಿಗೆ ಬರುವ ಇಲಾಖೆ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ಇನ್ನಿತರ ಅರ್ಹ ಹಿರಿಯ ನಾಗರಿಕರಿಗೂ ಬೂಸ್ಟರ್ ಡೋಸ್ ಲಸಿಕೆ ನೀಡುವ ಕಾರ್ಯವಾಗಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯತ್ರಿ ಅವರು ಮಾತನಾಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಕೋವಿಡ್ ಲಸಿಕಾಕರಣ ಪ್ರಗತಿ ಸಾಧನೆಗೆ ಹೆಚ್ಚಿನ ಒತ್ತು ನೀಡಬೇಕು. ಬೂಸ್ಟರ್ ಡೋಸ್ ಪಡೆಯಲು ವ್ಯಾಪಕವಾಗಿ ಸೂಚಿಸಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ವಿವಿಧ ಇಲಾಖೆಗಳ ನೋಡಲ್ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.