ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ವ್ಯವಸ್ಥೆ ಮಾಡಿರುವ ಕೋವಿಡ್ ಕೇರ್ ಸೆಂಟರ್ ಗಳಿಗೆ ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ. ರಾಮಚಂದ್ರ ಭೇಟಿ ನೀಡಿ ಪರಿಶೀಲನೆ ಮಾಡಿದರು.
ತಾಲೂಕಿನ ಸಂತೆಮರಹಳ್ಳಿ ಅರ್ಚರಿ ಶಾಲೆ, ಉಮ್ಮತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ, ಹರವೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಮಲ್ಲಯ್ಯನಪುರದ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಕೋವಿಡ್ ಕೇರ್ ಸೆಂಟರ್ ಸಿದ್ಧಪಡಿಸಿದ್ದು, ಪ್ರಾಥಮಿಕ ಹಂತದಲ್ಲಿರುವ ಸೋಂಕಿತರನ್ನು ಸೆಂಟರ್‌ನಲ್ಲಿಟ್ಟು ಚಿಕಿತ್ಸೆ ನೀಡಲು ಹಾಸಿಗೆ, ಕೃತಕ ವೆಂಟಿಲೇಟರ್ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಜಿಲ್ಲಾಡಳಿತ ಕೈಗೊಂಡಿರುವುದನ್ನು ವೀಕ್ಷಣೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಎಲ್ಲರಿಗೂ ಸೂಕ್ತ ಚಿಕಿತ್ಸೆ ದೊರೆತು ಗುಣಮುಖರಾಗಬೇಕೆಂದು ಸರ್ಕಾರ ಹಾಗೂ ಜಿಲ್ಲಾಡಳಿತದ ಆಶಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ಕೈಕೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರ ಕಳೆದ ೧೦ ದಿನಗಳ ಜನತಾ ಕರ್ಪ್ಯೂ ವಿಧಿಸಿ, ಸೋಂಕಿನ ಚೈನ್ ಕಡಿತಗೊಳಿಸಲು ಶ್ರಮಿಸುತ್ತಿದೆ. ಜನರು ಸಹ ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದನ್ನು ರೂಡಿಸಿಕೊಂಡು ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭಲ್ಲಿ ಚಡಾ ಮಾಜಿ ಅಧ್ಯಕ್ಷ ಬಾಲಸುಬ್ರಹ್ಮಣ್ಯ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹೊನ್ನಳ್ಳಿ ವೃಷಬಂದ್ರಪ್ಪ, ಆರೆಸ್ಸೆಸ್ ಜಿಲ್ಲಾ ಪ್ರಚಾರಕ್ ಪ್ರಶಾಂತ್ ಇತರರು ಇದ್ದರು.