ಚಾಮರಾಜನಗರ: ಜಿಲ್ಲಾಡಳಿತ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ ಸಹಯೋಗದೊಂದಿಗೆ ಆಯೋಜಿಸಲಾಗಿರುವ ನಾಲ್ಕು ದಿನಗಳ ಚಾಮರಾಜನಗರ ದಸರಾ ಮಹೋತ್ಸವಕ್ಕೆ ನಗರದ ಚಾಮರಾಜೇಶ್ವರ ದೇವಾಲಯದಲ್ಲಿ ಶ್ರೀ ಚಾಮರಾಜೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಇಂದು ಸಾಂಪ್ರದಾಯಿಕ ಚಾಲನೆ ದೊರೆಯಿತು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಚಾಮರಾಜೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ದೀಪ ಬೆಳಗಿಸುವ ಮೂಲಕ ದಸರಾ ಮಹೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ ನೀಡಿದರು.
ಚಾಮುಂಡೇಶ್ವರಿ, ಕೆಂಪನಂಜಮ್ಮ ದೇವರಿಗೂ ಪೂಜೆ ಸಲ್ಲಿಸಲಾಯಿತು, ದಸರಾ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ದೇವಾಲಯವನ್ನು ಹೂವಿನಿಂದ ಅಲಂಕರಿಸಲಾಗಿತ್ತು.
ಜಾನಪದ ಕಂಸಾಳೆ, ಗೊರವರ ಕುಣಿತ, ವೀರಗಾಸೆ, ನಾದಸ್ವರ ತಂಡಗಳು ಪಾಲ್ಗೊಂಡು ಉದ್ಘಾಟನಾ ಮೆರಗನ್ನು ಹೆಚ್ಚಿಸಿದವು.
ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದಾಗಿ ವಿಜೃಂಭಣೆಯಿಂದ ದಸರಾ ಮಹೋತ್ಸವ ಆಚರಿಸಲಾಗಿರಲಿಲ್ಲ. ಈ ಬಾರಿ ಸರ್ಕಾರದಿಂದ ಚಾಮರಾಜನಗರ ದಸರಾ ಮಹೋತ್ಸವಕ್ಕೆ ೧ ಕೋಟಿ ರೂ ನಿಗದಿಯಾಗಿದ್ದು ನಾಲ್ಕು ದಿನಗಳ ಕಾಲ ಅದ್ದೂರಿಯಾಗಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಬಳಿಕ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದ ಚಿತ್ರಕಲಾ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಚಾಲನೆ ನೀಡಿದರು.
ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ತಹಶೀಲ್ದಾರ್ ಬಸವರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಗುರುಲಿಂಗಯ್ಯ ಇತರೆ ಗಣ್ಯರು ಪಾಲ್ಗೊಂಡಿದ್ದರು.