ಚಾಮರಾಜನಗರ: ಕೋವಿಡ್ ಪ್ರಕರಣಗಳು ಹೆಚ್ಚು ಕಂಡು ಬಂದಿರುವ ಕಂಟೈನ್‌ಮೆಂಟ್ ಪ್ರದೇಶಗಳಲ್ಲಿ ವಿಶೇಷ ಕಣ್ಗಾವಲು ವ್ಯವಸ್ಥೆ ಕೈಗೊಂಡು ಪ್ರಕರಣಗಳು ಉಲ್ಬಣಿಸದಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್-೧೯ ನಿಯಂತ್ರಣ ಸಂಬಂಧ ನಡೆದ ಜಿಲ್ಲಾ ಮಟ್ಟದ ತಾಂತ್ರಿಕ ತಜ್ಞರ ಸಮಿತಿ, ನೋಡಲ್ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗಿ ವರದಿಯಾಗಿರುವ ಪ್ರದೇಶಗಳಲ್ಲಿ ಈಗಾಗಲೇ ಕಂಟೈನ್‌ಮೆಂಟ್ ವಲಯವೆಂದು ಘೋಷಿಸಲಾಗಿದೆ. ಅಂತಹ ಪ್ರದೇಶಗಳಲ್ಲಿ ಸೋಂಕು ಮತ್ತಷ್ಟು ವ್ಯಾಪಿಸದಂತೆ ಹೆಚ್ಚಿನ ಗಮನ ನೀಡಬೇಕು. ಕಂಟೈನ್ ಮೆಂಟ್ ವ್ಯಾಪ್ತಿಯಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಳ ಮಾಡಬೇಕು. ಸಂಪರ್ಕ ಪತ್ತೆ ಕಾರ್ಯಕ್ಕೆ ವಿಶೇಷ ಆದ್ಯತೆ ಕೊಡಬೇಕು ಎಂದರು.
ಕೋವಿಡ್ ಪ್ರಕರಣಗಳು ಹೆಚ್ಚು ಕಂಡುಬಂದಿರುವ ಕಂಟೈನ್‌ಮೆಂಟ್, ಕ್ಲಸ್ಟರ್‌ಗಳಲ್ಲಿ ಕೋವಿಡ್ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಕಣ್ಗಾವಲು ಚಟುವಟಿಕೆಗಳನ್ನು ಸಕ್ರಿಯಗೊಳಿಸಬೇಕು. ಕಂಟೈನ್‌ಮೆಂಟ್ ವಲಯಗಳ ಜನತೆಗೆ ದಿನನಿತ್ಯದ ಅಗತ್ಯತೆಗಳ ಬಗ್ಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಯಾವುದೇ ಲೋಪಗಳಿಗೆ ಅವಕಾಶವಾಗಬಾರದೆಂದು ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯತ್ರಿ ಅವರು ಗ್ರಾಮೀಣ ಭಾಗದ ಕಂಟೈನ್‌ಮೆಂಟ್ ವ್ಯಾಪ್ತಿಯಲ್ಲಿ ಜನರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಲು ಪಂಚಾಯತ್ ಮಟ್ಟದ ಕಾರ್ಯಪಡೆಗಳಿಗೆ ತಿಳಿಸಲಾಗಿದೆ. ಸೋಂಕು ಹರಡದಂತೆ ವಹಿಸಬೇಕಿರುವ ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಈಗಾಗಲೇ ಮಾಹಿತಿ ನೀಡಲಾಗಿದೆ ಎಂದರು.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮಾತನಾಡಿ ಕೋವಿಡ್ ಸೋಂಕು ಪ್ರಕರಣಗಳನ್ನು ನಿಯಂತ್ರಿಸಲು ಕೋವಿಡ್ ಪರೀಕ್ಷೆ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು. ಯಾವ ಗ್ರಾಮದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದೆಯೇ ಅಂತಹ ಕಡೆ ಪರೀಕ್ಷೆಯನ್ನು ಇನ್ನಷ್ಟು ತೀವ್ರಗೊಳಿಸಬೇಕು. ಕೋವಿಡ್ ಪರೀಕ್ಷೆಗಳನ್ನು ವ್ಯಾಪಕವಾಗಿ ಹಾಗೂ ವೇಗವಾಗಿ ನಡೆಸುವುದರಿಂದ ಸೋಂಕು ಮತ್ತಷ್ಟು ಹರಡವುದನ್ನು ತಡೆಗಟ್ಟಬಹುದು ಎಂದರು.
ಕೋವಿಡ್ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯ ಚಟುವಟಿಕೆಗಳು ಸಮರ್ಪಕವಾಗಿ ನಡೆಯಬೇಕು. ಈ ಕಾರ್ಯಕ್ಕೆ ನಿಯೋಜಿತರಾಗಿರುವವರು ತಮ್ಮ ಕರ್ತವ್ಯವನ್ನು ಹಗುರವಾಗಿ ಪರಿಗಣಿಸುವಂತಿಲ್ಲ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಟಾಸ್ಕ್‌ಪೋರ್ಸ್‌ಗಳು ಕ್ರೀಯಾಶೀಲವಾಗಿ ಕಾರ್ಯ ನಿರ್ವಹಿಸಲು ಆಯಾ ಮುಖ್ಯ ಅಧಿಕಾರಿಗಳು ನೋಡಿಕೊಳ್ಳಬೇಕು. ಹೋಂ ಐಸೋಲೇಷನ್‌ನಲ್ಲಿ ಇರುವವರ ಬಗ್ಗೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಈಗಾಗಲೇ ಗುರುತಿಸಲಾಗಿರುವ ಕೋವಿಡ್ ಕೇರ್ ಸೆಂಟರ್‌ಗಳಿಗೆ ಅಗತ್ಯ ಮೂಲ ಸೌಕರ್ಯವವನ್ನು ತ್ವರಿತವಾಗಿ ಒದಗಿಸಬೇಕು. ನೋಡಲ್ ಅಧಿಕಾರಿಗಳು ವ್ಯಾಪಕವಾಗಿ ಪರಿಶೀಲಿಸಿ ಬಾಕಿ ಉಳಿದಿರುವ ಅವಶ್ಯಕ ಕೆಲಸಗಳನ್ನು ಪೂರ್ಣಗೊಳಿಸಿ ಸಜ್ಜುಗೊಳಿಸಬೇಕು. ಕೋವಿಡ್ ಲಸಿಕಾಕರಣದಲ್ಲೂ ಪ್ರಗತಿ ಸಾಧಿಸಬೇಕು. ಎರಡನೇ ಡೋಸ್ ಹಾಗೂ ಬೂಸ್ಟರ್ ಡೋಸ್ ಗಳನ್ನು ಅರ್ಹರು ಶೀಘ್ರ ಪಡೆಯಲು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು.
ವೈದ್ಯಕೀಯ ಕಾಲೇಜಿನ ಡೀನ್ ಡಾ. ಸಂಜೀವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಸರ್ವಲೆನ್ಸ್ ಅಧಿಕಾರಿ ಡಾ. ನಾಗರಾಜು, ಕೋವಿಡ್ ಆಸ್ಪತ್ರೆಯ ನೋಡಲ್ ಅಧಿಕಾರಿ ಡಾ. ಮಹೇಶ್, ಬಿ.ಆರ್.ಟಿ ಹುಲಿ ಸಂರಕ್ಷಿತ ಅರಣ್ಯ ನಿರ್ದೇಶಕರಾದ ಡಾ. ಸಂತೋಷ್, ಜಿಲ್ಲಾ ಆಸ್ಪತ್ರೆಯ ಡಾ. ಕೃಷ್ಣಪ್ರಸಾದ್, ಮಹಿಳಾ ಮತ್ತು ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷ್ಮಿ, ತೋಟಗಾರಿಕಾ ಇಲಾಖೆ ಉಪನಿರ್ದೇಶಕರಾದ ಶಿವಪ್ರಸಾದ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ಉಪನಿರ್ದೇಶಕರಾದ ರಾಜೇಂದ್ರ ಪ್ರಸಾದ್ ಇತರರು ಸಭೆಯಲ್ಲಿ ಹಾಜರಿದ್ದರು.