ಚಾಮರಾಜನಗರ: ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಕೈಗಾರಿಕೆಯ ಜಿಲ್ಲಾ ಉದ್ಯಮ ತರಬೇತಿ ಕಾರ್ಯಕ್ರಮದಡಿ ನೀಡಲಾದ ಕೌಶಲ್ಯಾಬಿವೃದ್ದಿ ತರಬೇತಿ ಪಡೆದುಕೊಂಡಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ ಹೊಲಿಗೆ ಯಂತ್ರಗಳನ್ನು ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ವಿತರಿಸಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿಂದು ಆಯೋಜಿತವಾಗಿದ್ದ ಸರಳ ಕಾರ್ಯಕ್ರಮದಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ್ಯಕ್ರಮದಡಿ ಡ್ರೆಸ್ ಮೇಕಿಂಗ್ ಕೋರ್ಸ್ ತರಬೇತಿ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹೊಲಿಗೆಯಂತ್ರ ವಿತರಿಸಿದರು.
ಇದೇ ವೇಳೆ ಫಲಾನುಭವಿಗಳೊಂದಿಗೆ ಸಮಾಲೋಚಿಸಿದ ಸಚಿವರು ಉತ್ತಮ ಬದುಕು ರೂಪಿಸಿಕೊಳ್ಳಲು ಯೋಜನೆಗಳ ತರಬೇತಿ ಪಡೆಯಬೇಕು. ಸ್ವ ಉದ್ಯೋಗಕ್ಕೆ ಪೂರಕವಾದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದು ಸಲಹೆ ಮಾಡಿದರು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎನ್. ಮಹೇಶ್, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿ ದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಕೈಗಾರಿಕಾ ಇಲಾಖೆ ಅಧಿಕಾರಿ ರಾಜೇಂದ್ರಪ್ರಸಾದ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಲಿಂಗತ್ವ ಅಲ್ಪಸಂಖ್ಯಾತರು ಸ್ವ ಸಾಮರ್ಥ್ಯದಿಂದ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ಮರಿಯಾಲದ ಜೆ.ಎಸ್.ಎಸ್. ನೈಪುಣ್ಯ ತರಬೇತಿ ಸಂಸ್ಥೆಯ ಮೂಲಕ ಡ್ರೆಸ್ ಮೇಕಿಂಗ್ ಕೋರ್ಸ್ ತರಬೇತಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಆಸಕ್ತಿ ವಹಿಸಿ ಆಯೋಜಿಸಿದ್ದರು.
