ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ಯಾತ್ರಾಕ್ಷೇತ್ರ ಬಿಳಿಗಿರಿರಂಗನ ಬೆಟ್ಟದ ಶ್ರೀ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯದಲ್ಲಿ ಏಪ್ರಿಲ್ ೧೬ರಂದು ಜರುಗಲಿರುವ ಬ್ರಹ್ಮ ರಥೋತ್ಸವ, ಜಾತ್ರಾ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿಗದಿಪಡಿಸಿರುವ ಕಾರ್ಯಚಟುವಟಿಕೆಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಬಿಳಿಗಿರಿರಂಗನಾಥಸ್ವಾಮಿ ದೇವಾಲಯದ ಬ್ರಹ್ಮ ರಥೋತ್ಸವ ಸಂಬಂಧ ಕಾರ್ಯಕ್ರಮದ ಪೂರ್ವ ಸಿದ್ದತೆಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಏಪ್ರಿಲ್ 16 ರಂದು ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆಯಲಿರುವ ಬಿಳಿಗಿರಿರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ ಜಾತ್ರೆಯನ್ನು ವ್ಯವಸ್ಥಿತವಾಗಿ ನಡೆಸುವ ಸಂಬಂಧ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿಯಾಗಿ ನಡೆದಿರುವ ಸಭೆಗಳಲ್ಲಿ ವಿವಿಧ ಇಲಾಖೆ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ವಹಿಸಲಾಗಿದೆ. ೪-೫ ವರ್ಷಗಳ ನಂತರ ಜಾತ್ರೆ ನಡೆಯುತ್ತಿದ್ದು ರಥೋತ್ಸವ, ಜಾತ್ರಾ ಸಂದರ್ಭದಲ್ಲಿ ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಅಧಿಕಾರಿಗಳು ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಯವರು ಸೂಚನೆ ನೀಡಿದರು.
ಜಾತ್ರಾ ಸಂಬಂಧ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ದೇವಾಲಯದ ಹೊರ ಆವರಣದಲ್ಲಿ ನಡೆಯುತ್ತಿರುವ ನೆಲಹಾಸು ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಸಂಬಂಧ ಅಗತ್ಯವಿರುವ ಸಲಕರಣೆಗಳು ಹಾಗೂ ಹೆಚ್ಚುವರಿಯಾಗಿ ಕಾರ್ಮಿಕರನ್ನು ನಿಯೋಜಿಸಿಕೊಳ್ಳಬೇಕು. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಕಾಮಗಾರಿ ಪ್ರಗತಿ ಕುರಿತು ಖುದ್ದು ಸ್ಥಳ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿಯವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಾತ್ರಾ ಸಮಯದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಸೇರಿದಂತೆ ಅವಶ್ಯವಿರುವ ಎಲ್ಲಾ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಹೆಚ್ಚುವರಿಯಾಗಿ ತಾತ್ಕಾಲಿಕ ಶೌಚಾಲಯ ನಿರ್ಮಿಸಬೇಕು. ಬಿಳಿಗಿರಿರಂಗನಬೆಟ್ಟದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆದು ದಿನದ ೨೪ ಗಂಟೆಗಳು ಸಾರ್ವಜನಿಕರಿಗೆ ಆರೋಗ್ಯ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕ ಭಕ್ತಾದಿಗಳಿಗೆ ಅನುಕೂಲವಾಗುವಂತೆ ದೇವಾಲಯ ಸಮಿತಿ ಹಾಗೂ ಸ್ಥಳೀಯ ಪಂಚಾಯಿತಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಯವರು ಸೂಚಿಸಿದರು.
ಏಪ್ರಿಲ್ ೧೫ ರಂದು ಬ್ರಹ್ಮ ರಥೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳ ಖಾಸಗಿ ವಾಹನಗಳಿಗೆ ಬೆಟ್ಟದ ತಪ್ಪಲಿನಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಬೆಟ್ಟದ ತಪ್ಪಲಿನಿಂದ ದೇವಾಲಯದ ಸಮೀಪಕ್ಕೆ ತೆರಳಲು ಕೆಎಸ್‌ಆರ್.ಟಿ.ಸಿ ಬಸ್‌ಗಳ ವ್ಯವಸ್ಥೆಗಾಗಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು. ಜಾತ್ರಾ ಸಂದರ್ಭದಲ್ಲಿ ಯಾವುದೇ ಅಗ್ನಿ ಅವಘಡಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಜಾತ್ರೆಯ ಅಂಗವಾಗಿ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು. ಪೊಲೀಸ್ ಇಲಾಖೆ ವತಿಯಿಂದ ಅಗತ್ಯ ಬಂದೋಬಸ್ತ್ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಉಪವಿಭಾಗಾಧಿಕಾರಿ ಡಾ.ಗಿರೀಶ್ ದಿಲೀಪ್ ಬಡೋಲೆ, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕರಾದ ಡಾ. ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಗುಡೂರು ಭೀಮಸೇನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ವಿನಯ್, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್, ಜಿಲ್ಲಾ ಧಾರ್ಮಿಕ ಪರಿಷತ್‌ನ ವೇದಮೂರ್ತಿ, ಬಿಳಿಗಿರಿರಂಗನಾಥಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್‌ಕುಮಾರ್, ಪ್ರಧಾನ ಅರ್ಚಕರಾದ ಎ.ಎಸ್. ರವಿಕುಮಾರ್, ಪಾರುಪತ್ತೆದಾರರಾದ ರಾಜು, ಜಿಲ್ಲಾಮಟ್ಟದ ಅಧಿಕಾರಿಗಳು ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.