ಚಾಮರಾಜನಗರ: ಜಿಲ್ಲೆಯ ವಿವಿಧ ಐತಿಹಾಸಿಕ ಇತರೆ ಪ್ರವಾಸಿ ತಾಣಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿ, ಮತ್ತಷ್ಟು ಸೌಲಭ್ಯಗಳ ಅಭಿವೃದ್ದಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಯಳಂದೂರಿನಲ್ಲಿರುವ ರಾಜ್ಯ ಪುರಾತತ್ವ ಇಲಾಖೆ ನಿರ್ವಹಣೆಯ ದಿವಾನ್ ಪೂರ್ಣಯ್ಯ ಸರ್ಕಾರಿ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿ ವೀಕ್ಷಿಸಿದರು. ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ಇನ್ನಿತರ ಮಾಹಿತಿಯನ್ನು ಪಡದುಕೊಂಡರು. ಹೆಚ್ಚು ಪ್ರವಾಸಿಗರು, ಸಾರ್ವಜನಿಕರು ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿ ವಿಷಯ ಮಾಹಿತಿ ಪಡೆಯಲು ಅನುಕೂಲವಾಗುವಂತೆ ಮತ್ತಷ್ಟು ಸೌಲಭ್ಯಗಳನ್ನು ಹೆಚ್ಚಿಸಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.

ಐತಿಹಾಸಿಕ ಬಳೆಮಂಟಪಕ್ಕೆ ಭೇಟಿ ನೀಡಿ ಅಲ್ಲಿನ ನಿರ್ವಹಣೆ ಬಗ್ಗೆ ವ್ಯಾಪಕವಾಗಿ ಪರಿಶೀಲಿಸಿದರು. ಮೆಟ್ಟಿಲುಗಳನ್ನು ನಿರ್ಮಾಣ ಮಾಡುವ ಸಂಬಂಧ ಸೂಚನೆ ನೀಡಿದರು.

ಕೊಳ್ಳೇಗಾಲ ತಾಲೂಕು ವ್ಯಾಪ್ತಿಗೆ ಬರುವ ಪ್ರಸಿದ್ದ ಪ್ರವಾಸಿ ಸ್ಥಳ ಭರಚುಕ್ಕಿಗೆ ಭೇಟಿ ನೀಡಿ ಅಲ್ಲಿ ಪ್ರವಾಸಿಗರಿಗೆ ಕಲ್ಪಿಸಿರುವ ಸೌಲಭ್ಯಗಳನ್ನು ವೀಕ್ಷಿಸಿದರು. ಜಲಪಾತ ವೀಕ್ಷಣೆಗಾಗಿ ನಿರ್ಮಿಸಲಾಗಿರುವ ವೀಕ್ಷಣಾ ಗೋಪುರ ಇನ್ನಿತರ ಸೌಕರ್ಯಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಯವರು ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯಲು ಇನ್ನಷ್ಟು ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಮಧ್ಯರಂಗ ದೇವಾಲಯದಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಕೈಗೆತ್ತಿಕೊಂಡಿರುವ ೨.೫೮ ಕೋಟಿ ರೂ ವೆಚ್ಚದ ಸಂರಕ್ಷಣಾ ಕಾಮಗಾರಿಯನ್ನು ಪರಿಶೀಲಿಸಿದರು. ದೇವಾಲಯ ಆವರಣಕ್ಕೆ ಹೊಂದಿಕೊಂಡಿರುವ ಇನ್ನಿತರ ದೇವಾಲಯಗಳ ಅಭಿವೃದ್ದಿ ಕಾಮಗಾರಿಗೂ ಅಗತ್ಯ ಪ್ರಸ್ತಾವನೆ ಸಿದ್ದಪಡಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ತಿಳಿಸಿದರು.

ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು, ಜಿಲ್ಲಾ ನಗರಾಭಿವೃದ್ದಿ ಯೋಜನಾ ನಿರ್ದೇಶಕರಾದ ಕೆ. ಸುರೇಶ್, ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ರಾಘವೇಂದ್ರ, ಪುರಾತತ್ವ ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆಯ ಕ್ಯುರೇಟರ್ ಸುನೀಲ್‌ಕುಮಾರ್ ಇತರೆ ಅಧಿಕಾರಿಗಳು ಹಾಜರಿದ್ದರು.