ಚಾಮರಾಜನಗರ: ವಿಶೇಷಚೇತನರಿಗೆ ಅನುಕೂಲವಾಗುವಂತೆ ಆಯಾ ತಾಲೂಕು ಹಾಗೂ ಹೊಬಳಿಗಳಲ್ಲಿ ಶಿಬಿರಗಳನ್ನು ಏರ್ಪಡಿಸಿ ಯು.ಡಿ.ಐ.ಡಿ. ಗುರುತಿನ ಚೀಟಿಗಳನ್ನು ತ್ವರಿತಗತಿಯಲ್ಲಿ ವಿತರಿಸಲು ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆ.ಡಿ.ಪಿ. ಸಭಾಂಗಣದಲ್ಲಿಂದು ನಡೆದ ವಿಶೇಷಚೇತನರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ಯೋಜನೆಗಳು ವಿಶೇಷಚೇತನರಿಗೆ ಪಾರದರ್ಶಕವಾಗಿ ತಲುಪಿಸಲು ಯು.ಡಿ.ಐ.ಡಿ ಕಾರ್ಡ್‌ಗಳು ಅವಶ್ಯಕವಾಗಿದ್ದು, ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಗುರುತಿನ ಚೀಟಿಗಳನ್ನು ಸ್ಥಳೀಯ ಮಟ್ಟದಲ್ಲಿ ವಿಶೇಷ ಶಿಬಿರಗಳನ್ನು ಏರ್ಪಡಿಸಿ ಶೀಘ್ರವಾಗಿ ತಲುಪಿಸುವ ಕೆಲಸ ಆಗಬೇಕು. ಇದಕ್ಕಾಗಿ ವಿಶೇಷಚೇತನರು ಕಚೇರಿಗಳಿಗೆ ಅಲೆದಾಡಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರದ ಹಲವಾರು ಯೋಜನೆಗಳಲ್ಲಿ ವಿಶೇಷಚೇತನರ ಶ್ರೇಯೋಭಿವೃದ್ದಿಗಾಗಿ ಮೀಸಲಿರುವ ಶೇ. ೫ರಷ್ಟು ಅನುದಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ವಿಶೇಷಚೇತನರಿಗೆ ಅಗತ್ಯವಾಗಿರುವ ಸಾಧನ ಸಲಕರಣೆಗಳನ್ನು ಹೊಣೆಗಾರಿಕೆಯಿಂದ ತಲುಪಿಸುವ ಕಾರ್ಯ ಚುರುಕುಗೊಳ್ಳಬೇಕು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿಯೂ ಸಹ ಶೇ. ೫ರಷ್ಟು ಅನುದಾನ ಸದ್ಬಳಕೆಯಾಗಲು ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.
ಸರ್ಕಾರಿ ಕಚೇರಿಗಳಲ್ಲಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ, ಕೋರ್ಟ್‌ಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷಚೇತನರಿಗೆ ಅನುಕೂಲವಾಗುವಂತೆ ವಿಶೇಷ ಶೌಚಾಲಯ ವ್ಯವಸ್ಥೆ ಕಲ್ಪಿಸಿ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಶೌಚಾಲಯಗಳ ಸ್ವಚ್ಚತೆ ಕಾಪಾಡಬೇಕು. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ವಿಶೇಷಚೇತನರಿಗೆ ರ್‍ಯಾಂಪ್‌ಗಳ ವ್ಯವಸ್ಥೆ ಮಾಡಬೇಕು ಎಂದರು.
ಆರೋಗ್ಯ ಕೇಂದ್ರಗಳಲ್ಲಿ ಅಂಗವೈಕಲ್ಯತೆಯ ಪತ್ತೆ ಹಚ್ಚುವಿಕೆ ಹಾಗೂ ಶೇಕಡವಾರು ಪ್ರಮಾಣವನ್ನು ಪ್ರಮಾಣೀಕರಿಸುವಲ್ಲಿ ವೈದ್ಯರು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಮಧ್ಯವರ್ತಿಗಳ ಹಾವಳಿಗೆ ಸಿಲುಕದಂತೆ ನೋಡಿಕೊಳ್ಳಬೇಕು. ನಕಲಿ ಅಂಗವೈಕಲ್ಯತೆಯ ಪ್ರಕರಣಗಳಿದ್ದಲ್ಲಿ ತಕ್ಷಣವೇ ರದ್ದುಗೊಳಿಸಬೇಕು. ಅಂತಹ ನಕಲಿ ಪ್ರಮಾಣ ಪತ್ರ ನೀಡುವ ವೈಧ್ಯಾಧಿಕಾರಿಗಳ ವಿರುದ್ದ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು.
ಯಳಂದೂರು ತಾಲೂಕಿನ ಬೂದಿತಿಟ್ಟು ಗ್ರಾಮದ ವಿಕಲಚೇತನರಾದ ಬಸವಣ್ಣ ಅವರು ಮಾತನಾಡಿ ೨೦೧೬ರ ವಿಶೇಷಚೇತನರ ಕಾಯ್ದೆ ಅನುಸಾರ ದೂರುಗಳ ಶೀಘ್ರ ಇತ್ಯರ್ಥಕ್ಕಾಗಿ ವಿಶೇಷಚೇತನರಿಗೆ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ಇದರಿಂದ ಜಿಲ್ಲೆಯ ಎಲ್ಲಾ ವಿಶೇಷಚೇತನರಿಗೆ ಅನುಕೂಲವಾಗಿದೆ ಎಂದು ಮನವಿ ಮಾಡಿದರು. ಈ ಸಂಬಂಧ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು ಈ ಬಗ್ಗೆ ಸೂಕ್ತ ಕ್ರಮ ವಹಿಸಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಅವರು ಮಾತನಾಡಿ ಮಹಿಳಾ ಸ್ವ ಸಹಾಯ ಸಂಘಗಳು ಸರ್ಕಾರ ಹಾಗೂ ಬ್ಯಾಂಕ್‌ಗಳಿಂದ ಸಹಾಯಧನ ಸಾಲ ಪಡೆದು ಸ್ವಯಂ ಉದ್ಯೋಗಿಗಳಾಗಿದ್ದಾರೆ. ಅದೇ ರೀತಿ ವಿಕಲಚೇತನರು ಕೂಡ ಸಂಘ ರಚಿಸಿಕೊಂಡು ಸಾಲ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.
ಅಂಗವಿಕಲರ ಸಂಘದ ಅಧ್ಯಕ್ಷ ರಮೇಶ್, ಜಿಲ್ಲಾ ಸರ್ಜನ್ ಡಾ. ಶ್ರೀನಿವಾಸ್, ಅಂಗವಿಕಲರ ಇಲಾಖೆಯ ಸಂಜೀವ್ ದಾಸ್, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಮಹಮ್ಮದ್ ಅಕ್ಬರ್ ಇತರರು ಸಭೆಯಲ್ಲಿ ಹಾಜರಿದ್ದರು.
ಸಭೆಯ ಬಳಿಕ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಜಿಲ್ಲಾಡಳಿತ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ವಿಲಚೇತನರಿಗಾಗಿ ಆಯೋಜಿಸಲಾಗಿದ್ದ ಉದ್ಯೋಗ ಮೇಳಕ್ಕೆ ಭೇಟಿ ನೀಡಿ ಅಧಿಕಾರಿಗಳೊಡನೆ ಚರ್ಚಿಸಿ ಪರಿಶೀಲಿಸಿದರು. ಉದ್ಯೋಗ ತರಬೇತಿ ಪಡೆಯಲಿಚ್ಚಿಸುವ ಆಸಕ್ತ ಅಭ್ಯರ್ಥಿಗಳಿಗಾಗಿ ಕಾರ್ಯಗಾರ ಏರ್ಪಡಿಸುವಂತೆ ನಿರ್ದೇಶನ ನೀಡಿದರು.
ಉದ್ಯೋಗ ಮೇಳಕ್ಕೆ ಆಗಮಿಸಿದ್ದ ವಿಕಲಚೇತನರನ್ನು ಮಾತನಾಡಿಸಿ, ಅಭ್ಯರ್ಥಿಗಳು ನೊಂದಣಿ ಮಾಡಿಸಿದ ನಂತರ ಅವರು ಉದ್ಯೋಗ ಮೇಳದ ಪ್ರಯೋಜನ ಪಡೆದುಕೊಂಡಿರುವುದರ ವರದಿ ನೀಡುವಂತೆ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಮಹಮ್ಮದ್ ಅಕ್ಬರ್ ಅವರಿಗೆ ಸೂಚಿಸಿದರು.