ಮೈಸೂರು, ನವೆಂಬರ್.17- ಉನ್ನತ ಶಿಕ್ಷಣ ಇಲಾಖೆಯು ಪದವಿ ಕಾಲೇಜುಗಳನ್ನು ಮಂಗಳವಾರದಿಂದ ಪುನರಾರಂಭಿಸಿದ ಹಿನ್ನೆಲೆ ನಗರದ ಮಹಾರಾಣಿ ಮಹಿಳಾ ಕಲಾ ಮತ್ತು ವಿಜ್ಞಾನ ಕಾಲೇಜಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಭೇಟಿ ನೀಡಿ ಪರಿಶೀಲಿಸಿದರು.
ನೇರ ತರಗತಿಗಾಗಿ ಕಾಲೇಜಿಗೆ ಆಗಮಿಸಿದ್ದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಮತ್ತು ಬೋಧಕರಿಗೆ ಕೋವಿಡ್-19 ಪರೀಕ್ಷೆ ನಡೆಸಿದ ಬಗ್ಗೆ ಮಾಹಿತಿ ಪಡೆದ ಅವರು, ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಸಾರಿಗೆ ಹಾಗೂ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ಬಗ್ಗೆ ಚರ್ಚಿಸಿದರು. ಕಾಲೇಜಿನ ಕಟ್ಟಡ, ಶೌಚಾಲಯ, ಎಲ್ಲಾ ಕೊಠಡಿಗಳಲ್ಲಿನ ಪೀಠೋಪಕರಣ ಹಾಗೂ ಪಠ್ಯ ಸಾಮಗ್ರಿಗಳನ್ನು ಸ್ಯಾನಿಟೈಸ್ ಮಾಡುವುದರ ಸಂಬಂಧ ಮಾಹಿತಿ ಪಡೆದರು.
ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವರಿಕೆ ಮಾಡಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಪರಸ್ಪರ ದೈಹಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಬೇಕು ಎಂದು ಬೋಧಕ ಸಿಬ್ಬಂದಿಗೆ ಹೇಳಿದರು.