ಚಾಮರಾಜನಗರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ. ಎಂ. ಗಾಯತ್ರಿ ಅವರು ಇಂದು ಯಳಂದೂರು ತಾಲ್ಲೂಕು ಮದ್ದೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿರುವ ಕಾಂಪೌಂಡ್ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು. ಕೊಳ್ಳೇಗಾಲ ತಾಲೂಕು ಸಿದ್ದಯ್ಯನಪುರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸಭೆ ನಡೆಸಿ ವಿವಿಧ ಸೌಲಭ್ಯ ಕಾಮಗಾರಿಗಳ ಅನುಷ್ಠಾನಕ್ಕೆ ಸೂಚಿಸಿದರು. 
ಯಳಂದೂರು ತಾಲೂಕಿನ ಮದ್ದೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೈಗೆತ್ತಿಕೊಂಡಿರುವ ಸುತ್ತುಗೋಡೆ ನಿರ್ಮಾಣದ ಕಾಮಗಾರಿಯನ್ನು ವೀಕ್ಷಿಸಿದರು. ನಂತರ ಶಾಲೆಗೆ ಭೇಟಿ ನೀಡಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಜೊತೆ ಪಠ್ಯ ಚಟುವಟಿಕೆ ಹಾಗೂ ಪರೀಕ್ಷೆಗೆ ತಯಾರಾಗಿರುವ ಬಗ್ಗೆ ಸಂವಾದ ನಡೆಸಿದರು.

ಬಳಿಕ ಅಮೃತ ಗ್ರಾಮ ಪಂಚಾಯಿತಿ ಯೋಜನೆಯಡಿ ಆಯ್ಕೆಯಾಗಿರುವ ಸಿದ್ದಯ್ಯನಪರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಿ.ಎಂ. ಗುಣಶೇಖರ್, ಉಪಾಧ್ಯಕ್ಷರಾದ ರಾಜೇಶ್ವರಿ ಹಾಗೂ ಇತರೆ ಸದಸ್ಯರು ಅಧಿಕಾರಿಗಳೊಂದಿಗೆ ವಿವಿಧ ಕಾಮಗಾರಿ, ಯೋಜನೆ, ಸೌಲಭ್ಯಗಳ ಕುರಿತು ಸಭೆ ನಡೆಸಿದರು.

ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ, ಜಲ ಜೀವನ್ ಮಿಷನ್, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಡಿಜಿಟಲೀಕರಣ, ಶಾಲೆಗಳಲ್ಲಿ ಮೂಲ ಸೌಕರ್ಯಗಳಾದ ಆಟದ ಮೈದಾನ ಅಭಿವೃದ್ಧಿ, ಕಾಂಪೌಂಡ್, ಶೌಚಾಲಯ, ಕುಡಿಯುವ ನೀರಿನ ಸೌಲಭ್ಯಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಸೌರ ವಿದ್ಯುತ್ ಅಳವಡಿಕೆ, ಗ್ರಾಮಗಳಿಗೆ ಬೀದಿ ದೀಪಗಳ ಅಳವಡಿಕೆ, ಎನ್.ಆರ್.ಎಲ್.ಎಂ, ತೆರಿಗೆ ವಸೂಲಾತಿ ಹಾಗೂ ಇನ್ನಿತರ ಕಾರ್ಯಗಳಿಗೆ ವಿಶೇಷ ಒತ್ತು ನೀಡಬೇಕು. ಅಂಗನವಾಡಿಗಳಿಗೂ ಕುಡಿಯುವ ನೀರಿನ ಸೌಲಭ್ಯ ಮತ್ತು ಶೌಚಾಲಯ ಒದಗಿಸಬೇಕು. ಈ ಎಲ್ಲಾ ಕೆಲಸಗಳನ್ನು ಮಾರ್ಚ್ ಅಂತ್ಯದ ವೇಳೆಗೆ ಪೂರ್ಣಗೊಳಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯತ್ರಿ ಅವರು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್, ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಭಾಗ್ಯ, ತಾಲ್ಲೂಕು ಮಟ್ಟದ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.