ಗುಂಡ್ಲುಪೇಟೆ: ತಾಲೂಕಿನ 11 ಪರೀಕ್ಷಾ ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಸುಸೂತ್ರವಾಗಿ ನಡೆಯಿತು. ಇದಕ್ಕೆ ಶಿಕ್ಷಣ ಇಲಾಖೆ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಶಿವಮೂರ್ತಿ ನೇತೃತ್ವದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಮೊದಲ ದಿನ 2.363 ವಿದ್ಯಾರ್ಥಿಗಳು ಪ್ರಥಮ ಭಾಷೆ ಪರೀಕ್ಷೆ ಬರೆದಿದ್ದು, 42 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. 2405 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಇದರಲ್ಲಿ 1219 ಗಂಡು ಮಕ್ಕಳು, 1178 ಹೆಣ್ಣು ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು, 25 ಮಂದಿ ಗಂಡು ಮಕ್ಕಳು, 14 ಮಂದಿ ಹೆಣ್ಣು ಮಕ್ಕಳು ಗೈರು ಹಾಜರಾಗಿದ್ದರು.

ಎಲ್ಲಾ ಶಾಲೆಗಳಲ್ಲಿ ಸ್ಯಾನಿಟೈಸರ್: ತಾಲೂಕಿನಲ್ಲಿ ನಡೆದ 11 ಪರೀಕ್ಷಾ ಕೇಂದ್ರಗಳಲ್ಲು ಆರೋಗ್ಯ ಕಾರ್ಯಕರ್ತೆಯರನ್ನು ನೇಮಕಾತಿ ಮಾಡಿ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ಮಾಡಿ, ಮಾಸ್ಕ್ ಧರಿಸಿ ಪರೀಕ್ಷೆ ಬರೆಯುವಂತೆ ಸೂಚನೆ ನೀಡಲಾಗಿತ್ತು. ಜೊತೆಗೆ ಪರೀಕ್ಷೆ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು, ಸ್ಥಾನಿಕ ಜಾಗೃತ ದಳ, ತಾಲೂಕು ವಿಚಕ್ಷಣ ದಳ ಹಾಗೂ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕೊಠಡಿ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿತ್ತು. ಪರೀಕ್ಷೆ ಕೇಂದ್ರಗಳ ಸುತ್ತ 144 ಸೆಕ್ಷನ್ ಜಾರಿ ಗೊಳಿಲಾಗಿತ್ತು. ಜೊತೆಗೆ ಎಲ್ಲಾ ಪ್ರೌಢಶಾಲೆಗಳಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆದ ವಿದ್ಯಾರ್ಥಿನಿ: ಶಾಲೆಗೆ ಹಿಜಾಬ್ ಹಾಕಿಕೊಂಡ ತೆರಳಬೇಕು ಎಂದು ಪಟ್ಟು ಹಿಡಿದಿದ್ದ ಪಟ್ಟಣ ಗೌತಮ ಪ್ರೌಢಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿ ರೇಷ್ಮಾ ಹಿಜಾಬ್ ತೆಗೆದಿಟ್ಟು ಕೆ.ಎಸ್.ನಾಗತ್ನಮ್ಮ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಿದೆ. ಇದರಿಂದ ತಾಲೂಕಿನಲ್ಲಿ ಹಿಜಾಬ್ ವಿವಾದ ತಲೆದೊರಲಿಲ್ಲ.

ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ: ತಾಲೂಕಿನಲ್ಲಿ ನಡೆಯುತ್ತಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಶಿವಮೂರ್ತಿ ಭೇಟಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನು ಪರಿಶೀಲನೆ ನಡೆಸಿದರು. ಜೊತೆಗೆ ಎಲ್ಲಾ ಕಡೆಗಳಲ್ಲಿ ಶಾಂತಿಯುತವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ದತೆ ಮಾಡಿದ್ದರು.

ವರದಿ: ಬಸವರಾಜು ಎಸ್.ಹಂಗಳ