ಚಾಮರಾಜನಗರ: ಜ್ವರ ಪ್ರಕರಣಗಳು ವರದಿಯಾಗಿದ್ದ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಾಣೆ ಗ್ರಾಮದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಮುಂಜಾಗ್ರತಾ ನಿಯಂತ್ರಣ ಕ್ರಮಗಳನ್ನು ಕೈಗೊಂಡು ಗ್ರಾಮಸ್ಥರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗಿದೆ.

 ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಕಚೇರಿ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ಜ್ವರ ಸಮೀಕ್ಷೆ, ಲಾರ್ವ ಸಮೀಕ್ಷೆ ನಡೆಸಿ ಗ್ರಾಮಸ್ಥರಿಗೆ ಡೆಂಗ್ಯೂ, ಚಿಕನ್‌ಗುನ್ಯ ಬಗ್ಗೆ ಅರಿವು ಮೂಡಿಸಲಾಗಿದೆ. ಆರೋಗ್ಯ ಶಿಕ್ಷಣದ ಕುರಿತು ಕರಪತ್ರಗಳನ್ನು ವಿತರಿಸಲಾಗಿದೆ. ಗ್ರಾಮಸ್ಥರಿಗೆ ಸೊಳ್ಳೆಪರದೆಯನ್ನು ವಿತರಿಸಲಾಗಿದೆ. 

 ಗ್ರಾಮದಲ್ಲಿ ಐವರ ರಕ್ತ ಮಾದರಿಯನ್ನು ಸಂಗ್ರಹಿಸಿ ಜಿಲ್ಲಾ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಗ್ರಾಮದಲ್ಲಿ ಧೂಮೀಕರಣ ಕಾರ್ಯ ಚಟುವಟಿಕೆಯನ್ನು ನಡೆಸಲಾಗಿದೆ. ಕೋವಿಡ್ ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಜಾಗೃತಿ ಮೂಡಿಸಲಾಗಿದೆ. 

 ಸ್ಥಳೀಯ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳ ಸಹಕಾರ ಸಮ್ಮುಖದೊಂದಿಗೆ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ. 

 ಮಾರ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ರಾಜೇಶ್, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಕಚೇರಿಯ ಸಿಬ್ಬಂದಿ ಇತರರು ಆರೋಗ್ಯ ಅರಿವಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.