ಚಾಮರಾಜನಗರ: ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಇಂದು ನಗರದ ಯಡಪುರದಲ್ಲಿರುವ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಬೋಧನಾ ಆಸ್ಪತ್ರೆಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರವನ್ನು ಉದ್ಘಾಟಿಸಿದರು. ಆಸ್ಪತ್ರೆಯ ಮುಂಭಾಗದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಶತಮಾನೋತ್ಸವ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಆಸ್ಪತ್ರೆಯ ಒಳ ಅವರಣದಲ್ಲಿ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಬಡರೋಗಿಗಳಿಗೆ ಕೈಗೆಟುವ ಬೆಲೆಯಲ್ಲಿ ಔಷಧಿಗಳು ಲಭ್ಯವಾಗಬೇಕೆಂಬ ಉದ್ದೇಶದಿಂದ ಜನ ಔಷಧಿ ಕೇಂದ್ರವನ್ನು ತೆರೆಯಲಾಗಿದೆ. ಈ ಸೌಲಭ್ಯ ಬಡವರಿಗೆ, ಜನಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದರು.
ಆಸ್ಪತ್ರೆಯ ಮುಂಭಾಗದಲ್ಲಿ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಶತಮಾನೋತ್ಸವ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ರೆಡ್‌ಕ್ರಾಸ್ ಶತಮಾನೋತ್ಸವ ಭವನವು ಸಾಕಷ್ಟು ಸೇವಾ ಸೌಲಭ್ಯಗಳನ್ನು ಒದಗಿಸುವ ಉದ್ದೇಶ ಹೊಂದಿದೆ. ಆಸ್ಪತ್ರೆಯ ಆಸುಪಾಸಿನಲ್ಲೇ ಜನರಿಗೆ ಅಗತ್ಯವಿರುವ ಸೌಕರ್ಯಗಳನ್ನು ಒದಗಿಸಲಾಗುತ್ತದೆ. ರೋಗಿಗಳ ಆರೈಕೆಗಾಗಿ ಬರುವ ಸಂಬಂಧಿಕರು ವಾಸ್ತವ್ಯ ಹೂಡಲು ಡಾರ್ಮಿಟರಿ ನಿರ್ಮಾಣ ಮಾಡಲಾಗುತ್ತದೆ ಎಂದರು.
ಮೊದಲ ಹಂತದಲ್ಲಿ ಸೇವಾ ಸೌಲಭ್ಯಗಳಿಗೆ ಅಗತ್ಯವಿರುವ ಕಟ್ಟಡ ನಿರ್ಮಿಸಿ ಅನುಕೂಲ ಕಲ್ಪಿಸಲಾಗುತ್ತದೆ. ಎರಡನೇ ಹಂತದಲ್ಲಿ ಕಣ್ಣಿನ ಆಸ್ಪತ್ರೆ ಮತ್ತು ಕಣ್ಣಿನ ಬ್ಯಾಂಕ್ ಸ್ಥಾಪಿಸಲಾಗುತ್ತದೆ. ಈ ಎಲ್ಲಾ ಮಹತ್ತರ ಸೇವೆಗಳನ್ನು ಒದಗಿಸಲು ಶೀಘ್ರವಾಗಿ ಭವನ ನಿರ್ಮಾಣ ಮಾಡಬೇಕು ಎಂದು ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್. ಮಹದೇವಯ್ಯ, ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ. ಸಂಜೀವ್, ಜಿಲ್ಲಾ ಸರ್ಜನ್ ಡಾ. ಕೃಷ್ಣಪ್ರಸಾದ್, ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಜಿಲ್ಲಾ ಕಾರ್ಯದರ್ಶಿ ಡಾ. ಮಹೇಶ್, ರಾಜ್ಯಶಾಖೆಯ ಆಡಳಿತ ಮಂಡಳಿಯ ಡಾ. ರೇಣುಕಾದೇವಿ, ಡಾ. ಅಜಯ್ ಸೇರಿದಂತೆ ಇತರರು ಉಪಸ್ಥಿತರಿದ್ದರು.