ಚಾಮರಾಜನಗರ: ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿಂದು ಫೋಕ್ಸೋ ನ್ಯಾಯಾಲಯವನ್ನು ಉಚ್ಚನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಜಿಲ್ಲಾ ನ್ಯಾಯಾಂಗದ ಆಡಳಿತಾತ್ಮಕ ನ್ಯಾಯಾಧೀಶರಾದ ಎಂ.ಐ. ಅರುಣ್ ಅವರು ವರ್ಚುವಲ್ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿಯವರು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಫೋಕ್ಸೋ ನ್ಯಾಯಾಲಯ ಜಿಲ್ಲೆಗೆ ತುಂಬ ಅಗತ್ಯವಾಗಿದೆ. ಜಿಲ್ಲೆಯಲ್ಲಿ ಇದುವೆರಗೂ ೧೨೭ ಫೋಕ್ಸೋ ಪ್ರಕರಣಗಳು ದಾಖಲಾಗಿವೆ. ಹಾಗಾಗಿ ಇದಕ್ಕಾಗಿಯೇ ಪ್ರತ್ಯೇಕ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಯಲು ಜಿಲ್ಲೆಯ ಗ್ರಾಮಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪೋಕ್ಸೋ ನ್ಯಾಯಾಲಯವನ್ನು ಸ್ಥಾಪಿಸಲು ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಆರ್ಥಿಕ ನೆರವನ್ನು ಒದಗಿಸಲಾಗಿದೆ ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಅವರು ಮಾತನಾಡಿ ಜನರಿಗೆ ತಿಳುವಳಿಕೆಯ ಕೊರತೆಯಿಂದಾಗಿ ಬಾಲ್ಯವಿವಾಹಗಳು ಆಗುತ್ತಿವೆ. ನ್ಯಾಯಾಲಯದಲ್ಲಿ ೧೦೦ಕ್ಕೂ ಹೆಚ್ಚು ಫೋಕ್ಸೋ ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಫೋಕ್ಸೊ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. ಪ್ರಕರಣಗಳ ಇತ್ಯರ್ಥಕ್ಕೆ ವಕೀಲರ ಸಹಕಾರ ಅಗತ್ಯವಿದೆ ಎಂದರು.
ಹಿರಿಯ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಶ್ರೀಧರ, ಹಿರಿಯ ಸಿವಿಲ್ ನಾಯಾಧೀಶರಾದ ಹೊನ್ನಸ್ವಾಮಿ, ವೆಂಕಟೇಶ್, ಹೆಚ್ಚುವರಿ ಹಿರಿಯ ಸಿವಿಲ್ ನಾಯಾಧೀಶರಾದ ಚಂಪಕ, ನಿವೇದಿತ, ಮಕ್ಕಳ ಸ್ನೇಹಿ ನ್ಯಾಯಾಲಯದ ನೂತನ ನ್ಯಾಯಾಧೀಶರಾದ ಎ.ಸಿ. ನಿಷಾರಾಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಗೀತಾಲಕ್ಷ್ಮಿ, ಪಿ.ಡಬ್ಲ್ಯೂ.ಡಿ ಕಾರ್ಯಪಾಲಕ ಅಭಿಯಂತರರಾದ ಆರ್. ವಿನಯ್‌ಕುಮಾರ್, ವಿಶೇಷ ಸರ್ಕಾರಿ ಅಭಿಯೋಜಕರಾದ ಕೆ. ಯೋಗೇಶ್, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ಎಸ್. ಮಂಜು, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷಸ್ವಾಮಿ, ಜಂಟಿ ಕಾರ್ಯದರ್ಶಿ ಮಲ್ಲು, ಖಜಾಂಚಿ ಆರ್. ಗಿರೀಶ್, ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.