ಮಂಡ್ಯ: ಕೊರೋನಾ ಬಗ್ಗೆ ಭಯ ಬೇಡ, ಆತ್ಮವಿಶ್ವಾಸದಿಂದ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿ ಕೊರೋನಾ ಯುದ್ಧವನ್ನು ಗೆದ್ದು ಬರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ ನಾರಾಯಣಗೌಡ ಕೊರೋನಾ ಸೋಂಕಿತರಲ್ಲಿ ಆತ್ಮಸ್ಥೈರ್ಯ ತುಂಬಿದ್ದಾರೆ.
ಕೆ.ಆರ್.ಪೇಟೆ ತಾಲೂಕಿನ ಶೆಟ್ಟನಾಯಕನಕೊಪ್ಪಲು ಗ್ರಾಮದಲ್ಲಿರುವ ಕಿತ್ತೂರರಾಣಿ ಚೆನ್ನಮ್ಮ ವಸತಿಶಾಲೆಯಲ್ಲಿ ಸ್ಥಾಪಿಸಿರುವ ಕೋವಿಡ್ ಹೆಲ್ತ್ ಕೇರ್ ಸೆಂಟರ್ ಗೆ ದಿಢೀರ್ ಭೇಟಿ ನೀಡಿ, ಕೋವಿಡ್ ಸೋಂಕಿತರೊಂದಿಗೆ ಸಂವಾದ ನಡೆಸಿ ಕುಶಲೋಪರಿ ವಿಚಾರಿಸಿದರು. ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ, ಶುಚಿರುಚಿಯಾದ ಊಟ, ವಸತಿಯನ್ನು ಸದ್ಬಳಕೆ ಮಾಡಿಕೊಂಡು ಶೀಘ್ರ ಗುಣಮುಖರಾಗಿ. ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಿ, ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಗುಣಮುಖರಾಗಿ ಕೋವಿಡ್ ನಿರ್ಮೂಲನೆಗೆ ತಾಲ್ಲೂಕು ಆಡಳಿತದೊಂದಿಗೆ ಸಹಕರಿಸಿ ಎಂದು ಸಚಿವರು ಮನವಿ ಮಾಡಿದರು.
ಈ ಸಂದರ್ಭ ನಡೆದ ಸಚಿವರ ನಿವಾಸದಲ್ಲಿ ಕೊರೋನಾ ನಿಯಂತ್ರಣ, ಆಕ್ಸಿಜನ್ ಸಮಸ್ಯೆ ನಿವಾರಣೆ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ನಡೆದ ಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಂಡಿರುವ ಅಗತ್ಯ ಸುರಕ್ಷತಾ ಕ್ರಮಗಳು ಹಾಗೂ ಕೋವಿಡ್ ಹೆಲ್ತ್ ಕೇರ್ ಸೆಂಟರ್ ನಲ್ಲಿ ಸೋಂಕಿತರ ಆರೋಗ್ಯ ಸಂವರ್ಧನೆಗೆ ಕೈಗೊಂಡಿರುವ ಚಿಕಿತ್ಸೆ ಬಗ್ಗೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹಿರಿಕಳಲೆ ಗ್ರಾಮದಲ್ಲಿ ೨೦ಕ್ಕೂ ಹೆಚ್ಚಿನ ಸೋಂಕಿತರು ಕಂಡುಬಂದಿದ್ದು ಗ್ರಾಮವನ್ನು ಸೀಲ್ ಡೌನ್ ಮಾಡಿ ಕಂಟೋನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಗ್ರಾಮೀಣ ಪ್ರದೇಶದ ಜನರು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಧರಿಸಿಕೊಂಡು, ಸ್ಯಾನಿಟೈಸರ್ ನಲ್ಲಿ ಕೈತೊಳೆದು ಸಾಮಾಜಿಕ ಅಂತರದೊಂದಿಗೆ ಸೋಂಕು ಹರಡುವುದನ್ನು ನಿಯಂತ್ರಿಸಲು ತಾಲೂಕು ಆಡಳಿತದೊಂದಿಗೆ ಸಹಕರಿಸಬೇಕು ಎಂzರಲ್ಲದೆ, ಪ್ರಾಣವಾಯು ಆಕ್ಸಿಜನ್ ಮತ್ತು ರೆಡಮಿಸಿವರ್ ಲಸಿಕೆ ದಾಸ್ತಾನಿನ ಬಗ್ಗೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ.ಶಿವಮೂರ್ತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್ ಮತ್ತು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಎಂ.ಎಸ್.ಜಯಂತ್ ಸಚಿವರ ಸಮಾಲೋಚನೆಯಲ್ಲಿ ಭಾಗವಹಿಸಿದರು.